
ಬೆಂಗಳೂರು (ನ.24): ತೀವ್ರ ವಿವಾದಕ್ಕೆ ಕಾರಣವಾಗಿದ್ದ ಲೇಖಕ ರವಿ ಹಂಜ್ ರಚಿತ 'ಬಸವ ಮಂಟಪ' ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಕೃತಿಯ ಪ್ರಕಟಣೆ, ಮುದ್ರಣ ಹಾಗೂ ಪ್ರಸಾರವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಸಂಪೂರ್ಣವಾಗಿ ನಿರ್ಬಂಧಿಸಿದೆ.
12ನೇ ಶತಮಾನದ ಸಮಾಜ ಸುಧಾರಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ ಹಾಗೂ ವಚನ ಸಾಹಿತ್ಯಕ್ಕೆ ಧಕ್ಕೆ ತರುವಂತಹ ಆಕ್ಷೇಪಾರ್ಹ ಮತ್ತು ಕಾನೂನುಬಾಹಿರ ಅಂಶಗಳು ಈ ಕೃತಿಯಲ್ಲಿವೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಲಾಗಿತ್ತು. ಇದೀಗ ರಾಜ್ಯ ಗೃಹ ಇಲಾಖೆಯು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ.
'ಬಸವ ಮಂಟಪ' ಕೃತಿಯಲ್ಲಿರುವ ಅಂಶಗಳು ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಿದ್ದು, ಕಾನೂನುಬಾಹಿರವಾಗಿವೆ ಎಂಬ ಕಾರಣ ನೀಡಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 98(1)ರ ಅಡಿಯಲ್ಲಿ ಸರ್ಕಾರ ಈ ಕಠಿಣ ಆದೇಶವನ್ನು ಜಾರಿಗೊಳಿಸಿದೆ. ಈ ಆದೇಶದನ್ವಯ ಕೃತಿಯ ಎಲ್ಲಾ ಮುದ್ರಿತ ಪ್ರತಿಗಳನ್ನು ತಕ್ಷಣವೇ ಸರ್ಕಾರದ ವಶಕ್ಕೆ (ಮುಟ್ಟುಗೋಲು) ಪಡೆದುಕೊಳ್ಳಲು ಸೂಚಿಸಲಾಗಿದೆ.
ರಾಜ್ಯದ ಯಾವುದೇ ಭಾಗದಲ್ಲಿ 'ಬಸವ ಮಂಟಪ' ಕೃತಿಯ ಪ್ರತಿಗಳು ಕಂಡುಬಂದಲ್ಲಿ ಅವುಗಳನ್ನು ತಕ್ಷಣವೇ ವಶಪಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವಿಶೇಷವಾಗಿ, ಸಬ್‌ಇನ್‌ಸ್ಪೆಕ್ಟರ್ (PSI) ದರ್ಜೆಗಿಂತ ಕಡಿಮೆ ಇಲ್ಲದ ಪೊಲೀಸ್ ಅಧಿಕಾರಿಗಳಿಗೆ ಈ ಕೃತಿಯ ಪ್ರತಿಗಳಿಗಾಗಿ ಶೋಧ ನಡೆಸುವ ಮತ್ತು ವಶಪಡಿಸಿಕೊಳ್ಳುವ ಅಧಿಕಾರವನ್ನು ನೀಡಲಾಗಿದೆ.
ಕೇವಲ ಮುದ್ರಿತ ಪುಸ್ತಕ ಮಾತ್ರವಲ್ಲದೆ, ಅಂತರ್ಜಾಲ, ಸಾಮಾಜಿಕ ಜಾಲತಾಣಗಳು ಅಥವಾ ಇನ್ನಾವುದೇ ಡಿಜಿಟಲ್ ರೂಪದಲ್ಲಿರುವ 'ಬಸವ ಮಂಟಪ' ಕೃತಿಯ ಪ್ರಕಟಣೆ ಮತ್ತು ಪ್ರಸಾರದ ಮೇಲೂ ಸರ್ಕಾರ ನಿರ್ಬಂಧ ವಿಧಿಸಿದೆ. ಕೃತಿಯ ಪ್ರಕಟಣೆ ಹಾಗೂ ವಿತರಣೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ಆದೇಶವನ್ನು ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು (DG & IGP), ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶದ ಪ್ರತಿಯನ್ನು ರವಾನಿಸಲಾಗಿದೆ. ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.