
ಬೆಂಗಳೂರು (ಮೇ 18): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್‌ನ ಮುಖಂಡ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಬಹುಮತಗಳಿಸಿ ನಂತರ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರಿಗೆ ಸರ್ಕಾರ ರಚನೆ ಮಾಡುವುದಾಗಿ ಅನುಮತಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಹಕ್ಕುಮಂಡಿಸುವಂತೆ ರಾಜ್ಯಪಾಲರು ಕೂಡ ಹಸಿರು ನಿಶಾನೆ ತೋರಿಸಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರ ಅನುಮೋದನೆಯೊಂದಿಗೆ ಬಹುಮತವನ್ನು ಗಳಿಸಿದ ನಂತರ, ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ (Thavar chandra gahlot) ಕಚೇರಿಗೆ ತೆರಳಿ ಸರ್ಕಾರ ರಚನೆ ಮಾಡುವುಕ್ಕೆ ಅನುಮತಿಯನ್ನು ಕೇಳಿದರು. ಇಂದು ರಾಜ್ಯಪಾಲರ ಜನ್ಮದಿನವಾದ್ದರಿಂದ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಜನ್ಮದಿನದ ಶುಭಾಶಯವನ್ನು ಕೂಡ ತಿಳಿಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ: 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಬಾಕಿ
ಸಚಿವ ಸಂಪುಟ ಚರ್ಚೆಗೆ ನಾಳೆಯೇ ದೆಹಲಿಗೆ ನಾಯಕರ ಪ್ರವಾಸ: ರಾಜ್ಯದಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರಿಂದ ಅನುಮತಿ ದೊರೆತ ಬೆನ್ನಲ್ಲೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗು ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಈ ಬೆನ್ನಲ್ಲೇ ನಾಳೆ ಬೆಳಗ್ಗೆ 10 ಗಂಟೆಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿ ಸಚಿವ ಸಂಪುಟಕ್ಕೆ ಯಾರಾರನ್ನು ಸೇರಿಸಿಕೊಳ್ಳಬೇಕು ಎಂದು ಚರ್ಚೆ ಮಾಡಿ ಪಟ್ಟಿಯನ್ನು ತಯಾರಿಸಿಕೊಂಡು ಬರಲಿದ್ದಾರೆ. ನಾಳೆ ವಿಶೇಷ ವಿಮಾನ ಮೂಲಕ ದೆಹಲಿ ಪ್ರಯಾಣ ಮಾಡಲಿದ್ದಾರೆ. ಸಂಪುಟ ಸಚಿವರ ಪಟ್ಟಿ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲು ದೆಹಲಿ ತೆರಳಿದ್ದು, ರಾಜ್ಯದ ಸಚಿವ ಆಕಾಂಕ್ಷಿಗಳಲ್ಲಿ ಹೆಚ್ಚಿನ ಕುತೂಹಲ ಕೆರಳಿದೆ.
ನೂತನ ಸಿಎಂಗೆ ಹಂಗಾಮಿ ಮುಖ್ಯಮಂತ್ರಿ ಶುಭ ಹಾರೈಕೆ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಸಿದ್ದರಾಮಯ್ಯ ನವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಮಹಾ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ. ಜೊತೆಗೆ, ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.