ಡಿಕೆಶಿ ಅಕ್ರಮ ಆಸ್ತಿ ಗಳಿಕೆ ಕೇಸ್‌: ಸರ್ಕಾರದ ಶಿಫಾರಸು ಪ್ರಶ್ನಿಸಿದ್ದ ಅರ್ಜಿ ಹೈಕೋರ್ಟಲ್ಲಿ ವಜಾ

By Kannadaprabha News  |  First Published Apr 21, 2023, 8:02 AM IST

ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದ ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. 


ಬೆಂಗಳೂರು (ಏ.21): ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದ ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಇದರಿಂದ, ಡಿ.ಕೆ. ಶಿವಕುಮಾರ್‌ಗೆ ತೀವ್ರ ಹಿನ್ನಡೆಯಾದಂತಾಗಿದೆ.

ಸರ್ಕಾರದ ಆದೇಶ ರದ್ದು ಕೋರಿ ಡಿ.ಕೆ. ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರ ನ್ಯಾಯಪೀಠ ಗುರುವಾರ ಪ್ರಕಟಿಸಿದೆ. ಇದೇ ವೇಳೆ ಸಿಬಿಐ ತನಿಖೆಗೆ ತಡೆ ಕೋರಿ ಸಲ್ಲಿಸಿರುವ ಮತ್ತೊಂದು ಅರ್ಜಿಯನ್ನು ಮೇ 30ಕ್ಕೆ ಮುಂದೂಡಿರುವ ಹೈಕೋರ್ಟ್‌, ಅಲ್ಲಿಯವರೆಗೆ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿ ಬುಧವಾರವಷ್ಟೇ (ಏ.19) ಆದೇಶಿಸಿದೆ. ಹಾಗಾಗಿ, ಸದ್ಯಕ್ಕೆ ಡಿ.ಕೆ.ಶಿವಕುಮಾರ್‌ ಸಿಬಿಐ ತನಿಖೆ ಎದುರಿಸುವುದಿಲ್ಲ.

Tap to resize

Latest Videos

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಮೆಟ್ಟಿಲೇರಿದ ಸಿಬಿಐ

ಆದೇಶವೇನು?: ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಡಿ.ಕೆ.ಶಿವಕುಮಾರ್‌ ಅವರ ಸಂಬಂಧಿ ಶಶಿಕುಮಾರ್‌ ಶಿವಣ್ಣ, ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದ ಸರ್ಕಾರದ ಆದೇಶ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್‌ ಏಕ ಸದಸ್ಯ ಪೀಠ ವಜಾಗೊಳಿಸಿ ಆದೇಶಿಸಿತ್ತು. ಅದನ್ನು ವಿಭಾಗೀಯ ಪೀಠ ಎತ್ತಿಹಿಡಿದಿತ್ತು. ಇನ್ನೂ ಆರೋಪಿಯಾಗಿರುವ ಅರ್ಜಿದಾರರಿಗೆ ತನ್ನ ವಿರುದ್ಧದ ಪ್ರಕರಣವನ್ನು ಯಾವ ಸಂಸ್ಥೆ ತನಿಖೆ ನಡೆಸಬೇಕು ಎಂದು ಆಯ್ಕೆ ಮಾಡಿಕೊಳ್ಳಲು ಅವಕಾಶವಿಲ್ಲ. ಸಿಬಿಐ ತನಿಖೆಗೆ ಒಪ್ಪಿಗೆ ನೀಡಿದ ಆದೇಶದಲ್ಲಿ ಕಾರಣಗಳನ್ನು ನಮೂದಿಸುವ ಅವಶ್ಯಕತೆ ಸರ್ಕಾರಕ್ಕೆ ಇಲ್ಲವಾಗಿದೆ ಎಂಬುದಾಗಿ ಈಗಾಗಲೇ ಹಲವು ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಆದ್ದರಿಂದ ಅರ್ಜಿ ವಜಾಗೊಳಿಸಲು ಅರ್ಹವಾಗಿದೆ ಎಂದು ನ್ಯಾಯಪೀಠ ತೀರ್ಪಿನಲ್ಲಿ ಹೇಳಿದೆ.

ಪ್ರಕರಣದ ಹಿನ್ನೆಲೆ: 2017ರ ಆಗಸ್ಟ್‌ನಲ್ಲಿ ಡಿ.ಕೆ. ಶಿವಕುಮಾರ್‌ಗೆ ಸೇರಿದ ಬೆಂಗಳೂರು ಮತ್ತು ದೆಹಲಿಯ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಕೋಟ್ಯಂತರ ಹಣ ಹಾಗೂ ದಾಖಲೆ ವಶಪಡಿಸಿಕೊಂಡಿದ್ದರು. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದಲ್ಲಿ ಡಿ.ಕೆ. ಶಿವಕುಮಾರ್‌ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ 2019ರ ಸೆ.25ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಡಿಕೆಶಿ ವಿರುದ್ಧದ ಐಟಿ, ಇಡಿ ತನಿಖೆ ಬಗ್ಗೆ ಆತಂಕ: ಡಿಕೆಶಿ ನಾಮಪತ್ರ ಓಕೆ ಆದರೆ ಡಿಕೆಸು ವಾಪಸ್‌?

ಈ ಮಧ್ಯೆ, ಪ್ರಕರಣ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ.ಕೆ. ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿತ್ತು. ಇದರಿಂದ, ಸಿಬಿಐ ತನಿಖೆ ರದ್ದು ಕೋರಿ ಶಿವಕುಮಾರ್‌ ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಸಿಬಿಐ ತನಿಖೆಗೆ ತಡೆ ನೀಡಿ 2023ರ ಫೆ.10ರಂದು ಮಧ್ಯಂತರ ಆದೇಶ ಹೊರಡಿಸಿತ್ತು. ಸದ್ಯ ಈ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿದೆ.

click me!