
ಬೆಂಗಳೂರು (ಏ.06): ಹಾವೇರಿ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ಹಣ ನಷ್ಟಉಂಟು ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರನ್ನು ದೋಷಿ ಎಂದು ತೀರ್ಮಾನಿಸಿದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿದೆ. ಪ್ರಕರಣದಲ್ಲಿ ದೋಷಿಯಾಗಿ ತೀರ್ಮಾನಿಸಿದ ಮತ್ತು ಎರಡು ವರ್ಷ ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಎರಡೂ ಆದೇಶಕ್ಕೂ ಹೈಕೋರ್ಟ್ ತಡೆಯಾಜ್ಞೆ ಅನ್ವಯಿಸಲಿದೆ. ಇದರಿಂದ ಓಲೇಕಾರ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಾದಿ ಸುಗಮವಾಗಿದೆ.
ಪ್ರಕರಣದಲ್ಲಿ ತಮ್ಮನ್ನು ದೋಷಿಯಾಗಿ ತೀರ್ಮಾನಿಸಿದ ಬೆಂಗಳೂರು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಓಲೇಕಾರ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ಬುಧವಾರ ಈ ಆದೇಶ ಮಾಡಿದೆ. ಮೂಲ ಅರ್ಜಿ ವಿಲೇವಾರಿಯಾಗುವ ತನಕ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಲಭ್ಯವಾಗಬೇಕಿದೆ.
ಮಹಾರಾಷ್ಟ್ರದ ವಿಮೆ ಕಿತಾಪತಿ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ: ಸಿಎಂ ಬೊಮ್ಮಾಯಿ ಕಿಡಿ
ಪ್ರಕರಣ ಸಂಬಂಧ ನೆಹರು ಓಲೇಕಾರ್ ಅವರವನ್ನು ದೋಷಿಯಾಗಿ ತೀರ್ಮಾನಿಸಿ ಮತ್ತು ಅವರಿಗೆ ಎರಡು ವರ್ಷ ಸಾಧಾರಣ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (91ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ) 2023ರ ಫೆ.13ರಂದು ಹೊರಡಿಸಿತ್ತು. ಈ ತೀರ್ಪು ಪ್ರಶ್ನಿಸಿ ಓಲೇಕಾರ್ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮಾ.3ರಂದು ಓಲೇಕಾರ್‌ಗೆ ವಿಧಿಸಿದ್ದ ಎರಡು ವರ್ಷದ ಶಿಕ್ಷೆಯನ್ನು ಅಮಾನತ್ತಿನಲ್ಲಿರಿಸಿದ ಹೈಕೋರ್ಟ್, ಜಾಮೀನು ಮಂಜೂರು ಮಾಡಿತ್ತು. ಇದೀಗ ದೋಷಿಯಾಗಿ ತೀರ್ಮಾನಿಸಿರುವ ಆದೇಶದ ಭಾಗಕ್ಕೂ ತಡೆ ನೀಡಿದೆ.
ಚಿತ್ರ ನಟರ ಮುಖ ತೋರಿಸಿ ಬಿಜೆಪಿ ಮತಭಿಕ್ಷೆ: ಎಚ್.ಡಿ.ಕುಮಾರಸ್ವಾಮಿ
ಏನಿದು ಪ್ರಕರಣ?
- ಹಾವೇರಿ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿದ ಕೇಸ್
- ಶಾಸಕ ನೆಹರು ಓಲೇಕಾರ್‌ಗೆ 2 ವರ್ಷ ಜೈಲು ವಿಧಿಸಿದ್ದ ಕೋರ್ಟ್
- ಮೇಲ್ಮನವಿ ಅಂಗೀಕರಿಸಿ ಶಿಕ್ಷೆ ಅಮಾನತಿನಲ್ಲಿ ಇರಿಸಿದ್ದ ಹೈಕೋರ್ಟ್
- ಈಗ ದೋಷಿಯಾಗಿ ಪರಿಗಣಿಸಿದ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.