ಶಿಕ್ಷಕ ಕ್ಷೇತ್ರಗಳ ಚುನಾವಣೆ ಕಾರಣ 3 ಶಿಕ್ಷಣ ಸಚಿವರೇ ಮುಖ್ಯ ಪ್ರಭಾರಿ. ಆರೂ ಕ್ಷೇತ್ರದಲ್ಲಿ ಗೆಲ್ಲುವ ಗುರಿ. ಕೆಪಿಸಿಸಿ ಪೂರ್ವಭಾವಿ ಸಭೆ ನಿರ್ಧಾರ
ಬೆಂಗಳೂರು (ಮೇ.13): ಲೋಕಸಭೆ ಚುನಾವಣೆ ಮಾದರಿಯಲ್ಲೇ ವಿಧಾನಪರಿಷತ್ ಚುನಾವಣೆ ಎದುರಿಸಿ ಆರೂ ಕ್ಷೇತ್ರಗಳಲ್ಲೂ ಗೆಲ್ಲುವ ಗುರಿಯೊಂದಿಗೆ ಕಾಂಗ್ರೆಸ್ ಪಕ್ಷವು ಸಚಿವರು ಹಾಗೂ ಶಾಸಕರಿಗೆ ವಿವಿಧ ಕ್ಷೇತ್ರಗಳ ಉಸ್ತುವಾರಿ ವಹಿಸಿದ್ದು, ಶತಾಯ ಗತಾಯ ಕ್ಷೇತ್ರದಲ್ಲಿ ಪಕ್ಷದ ಗೆಲ್ಲಿಸಿಕೊಂಡು ಬರುವಂತೆ ಸೂಚನೆ ನೀಡಿದೆ.
ಇನ್ನು ಮುಖ್ಯವಾಗಿ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆ ಆಗಿರುವುದರಿಂದ ಉನ್ನತ ಶಿಕ್ಷಣ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮುಖ್ಯ ಉಸ್ತುವಾರಿಗಳ ಜವಾಬ್ದಾರಿ ನೀಡಿರುವುದಾಗಿ ತಿಳಿದುಬಂದಿದೆ. ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ನಾಯಕರ ನೇತೃತ್ವದಲ್ಲಿ ವಿಧಾನಪರಿಷತ್ ಚುನಾವಣೆ ಪೂರ್ವಭಾವಿ ಸಭೆ ನಡೆಸಲಾಯಿತು.
undefined
ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯ ಉಸ್ತುವಾರಿಯನ್ನು ವಹಿಸಲಾಗಿದೆ.
ಉಳಿದಂತೆ ಹಲವು ಸಚಿವರನ್ನು ಆರು ಕ್ಷೇತ್ರಗಳಿಗೂ ಹೆಚ್ಚುವರಿ ಉಸ್ತುವಾರಿಗಳನ್ನಾಗಿ ನೀಡಲಾಗಿದೆ. ಜತೆಗೆ ಆಯಾ ಭಾಗದಲ್ಲಿರುವ ಶಾಸಕರು ಸಹ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಬೇಕು. ತನ್ಮೂಲಕ ವಿಧಾನಪರಿಷತ್‌ನಲ್ಲೂ ಬಹುಮತ ಬರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಸಭೆಯ ಬಳಿಕ ಮಾತನಾಡಿರುವ ಡಿ.ಕೆ. ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಎಲ್ಲಾ ಮುಖಂಡರು ಸೇರಿ ಈ ಚುನಾವಣೆ ಎದುರಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿರುವುದಾಗಿ ತಿಳಿಸಿದರು.
ಮೇ 3 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ಮೇ 6 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇರುವ ಕಡಿಮೆ ಸಮಯವನ್ನು ಸದುಪಯೋಗ ಮಾಡಿಕೊಂಡು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್, ಶಾಸಕ ತನ್ವೀರ್ ಸೇಠ್ ಸೇರಿ ಹಲವರು ಹಾಜರಿದ್ದರು.
ಮಂದಿಗೆ ಬಿ-ಫಾರಂ ವಿತರಣೆ: ನಾಮಪತ್ರ ಸಲ್ಲಿಕೆಗೆ ಮೇ 17 ಕೊನೆಯ ದಿನಾಂಕವಾಗಿರುವುದರಿಂದ ಕಾಂಗ್ರೆಸ್‌ನ ಐದು ಮಂದಿ ಅಭ್ಯರ್ಥಿಗಳು ಭಾನುವಾರ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರಿಂದ ಬಿ-ಫಾರಂ ಸ್ವೀಕರಿಸಿದರು.
ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ. ಮಂಜುನಾಥ್, ನೈಋತ್ಯ ಪದವೀಧರರ ಕ್ಷೇತ್ರದ ಆಯನೂರು ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿ.ಡಿ. ಶ್ರೀನಿವಾಸ್, ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ, ಈಶಾನ್ಯ ಪದವೀಧರರ ಕ್ಷೇತ್ರದಿಂದ ಡಾ.ಚಂದ್ರಶೇಖರ್ ಬಿ ಪಾಟೀಲ್ ಅವರು ಬಿ-ಫಾರಂ ಸ್ವೀಕರಿಸಿದರು. ಬೆಂಗಳೂರು ಪದವೀಧರರ ಕ್ಷೇತ್ರದ ರಾಮೋಜಿಗೌಡ ಮಾತ್ರ ಬಿ-ಫಾರಂ ಸ್ವೀಕರಿಸಬೇಕಿದೆ ಎಂದು ಮೂಲಗಳು ತಿಳಿಸಿವೆ.
ಮರಿತಿಬ್ಬೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಅವರಿಗೆ ವಿಧಾನಪರಿಷತ್ ಟಿಕೆಟ್ ನೀಡಿ ಎಐಸಿಸಿ ಭಾನುವಾರ ಆದೇಶ ಹೊರಡಿಸಿದೆ. ಜೆಡಿಎಸ್‌ನಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಮರಿತಿಬ್ಬೇಗೌಡ ಅವರು ಇತ್ತೀಚೆಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು. ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯಂತೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:
ದಕ್ಷಿಣ ಶಿಕ್ಷಕರ ಕ್ಷೇತ್ರ - ಮರಿತಿಬ್ಬೇಗೌಡ
ನೈಋತ್ಯ ಪದವೀಧರರ ಕ್ಷೇತ್ರ -ಆಯನೂರು ಮಂಜುನಾಥ್
ನೈಋತ್ಯ ಶಿಕ್ಷಕರ ಕ್ಷೇತ್ರ - ಕೆ.ಕೆ. ಮಂಜುನಾಥ್
ಆಗ್ನೇಯ ಶಿಕ್ಷಕರ ಕ್ಷೇತ್ರ - ಟಿ.ಡಿ. ಶ್ರೀನಿವಾಸ್
ಈಶಾನ್ಯ ಪದವೀಧರರ ಕ್ಷೇತ್ರ - ಡಾ. ಚಂದ್ರಶೇಖರ್ ಬಿ ಪಾಟೀಲ್
ಬೆಂಗಳೂರು ಪದವೀಧರರ ಕ್ಷೇತ್ರ- ರಾಮೋಜಿಗೌಡ