ಅಧಿವೇಶನದಲ್ಲಿ ಒಗ್ಗಟ್ಟಿನ ಹೋರಾಟಕ್ಕೆ ವಿಪಕ್ಷ ಪಣ

Kannadaprabha News   | Kannada Prabha
Published : Nov 30, 2025, 06:53 AM IST
BJP

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರ ಎಲ್ಲ ರಂಗದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿದ್ಧ ಬಿಜೆಪಿ-ಜೆಡಿಎಸ್‌ ಮೈತ್ರಿಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲು ತೀರ್ಮಾನಿಸಿವೆ.

 ಬೆಂಗಳೂರು :  ರಾಜ್ಯ ಕಾಂಗ್ರೆಸ್‌ ಸರ್ಕಾರ ಎಲ್ಲ ರಂಗದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿದ್ಧ ಬಿಜೆಪಿ-ಜೆಡಿಎಸ್‌ ಮೈತ್ರಿಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲು ತೀರ್ಮಾನಿಸಿವೆ.

ಬೆಳಗಾವಿ ಅಧಿವೇಶನ ಹಿನ್ನೆಲೆಯಲ್ಲಿ ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆಯಲ್ಲಿ ಉಭಯ ಪಕ್ಷಗಳ ಪ್ರಮುಖ ನಾಯಕರು ಅಧಿವೇಶನದಲ್ಲಿ ಒಟ್ಟಾಗಿ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಸುಮಾರು ಒಂದು ತಾಸು ಚರ್ಚಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಜೆಡಿಎಸ್‌ನಿಂದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ಮಾಜಿ ಶಾಸಕ ಸಾ.ರಾ.ಮಹೇಶ್‌, ತಿಪ್ಪೇಸ್ವಾಮಿ ಸೇರಿ ಉಭಯ ಪಕ್ಷಗಳ ಪ್ರಮುಖ ನಾಯಕರು ಈ ಸಮನ್ವಯ ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮಂಡಿಸಿದ್ದಾರೆ.

ಸಿಎಂ ಕುರ್ಚಿ ಕಿತ್ತಾಟದಲ್ಲಿ ತೊಡಗಿರುವ ಕಾಂಗ್ರೆಸ್‌ ಸರ್ಕಾರವನ್ನು ಅಧಿವೇಶನದಲ್ಲಿ ಹೇಗೆ ಇಕ್ಕಟ್ಟಿಗೆ ಸಿಲುಕಿಸಬೇಕು, ಯಾವ ವಿಚಾರಗಳನ್ನು ಆದ್ಯತೆ ಮೇರೆಗೆ ಮುನ್ನೆಲೆಗೆ ತರಬೇಕು, ಸರ್ಕಾರದ ಆಡಳಿತ ವೈಫಲ್ಯ, ಹುಸಿ ಭರವಸೆಗಳು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಸಮಯಕ್ಕೆ ಆಗ್ರಹ, ಅಧಿವೇಶನ ವಿಸ್ತರಣೆಗೆ ಆಗ್ರಹ ಸೇರಿ ಹಲವು ವಿಚಾರಗಳ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ.

20 ದಿನ ಅಧಿವೇಶನ ನಡೆಸಲು ಆಗ್ರಹ:

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚಿಸುವ ಉದ್ದೇಶದಿಂದ 8 ದಿನದ ಬದಲು 20 ದಿನ ನಡೆಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ತೀರ್ಮಾನಿಸಲಾಗಿದೆ ಎಂದರು.

ಬಿಜೆಪಿ ಮತ್ತು ಜೆಡಿಎಸ್‌ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಆರ್‌ಸಿಬಿ ಕಾಲ್ತುಳಿತ ಪ್ರಕರಣ ಸೇರಿ ಹಲವು ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಎರಡೂ ಪಕ್ಷಗಳು ಕಿವಿ ಹಿಂಡುವ ಕೆಲಸ ಮಾಡಿವೆ. ಈಗ ಬೆಳಗಾವಿ ಅಧಿವೇಶನದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕೆಂದು ಚರ್ಚಿಸಲಾಗಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಕಾರಣ, ಉತ್ತರ ಕರ್ನಾಟಕದ ಬಗ್ಗೆ ಹೆಚ್ಚಿನ ಚರ್ಚೆಗೆ ಆಗ್ರಹಿಸಲಾಗುತ್ತದೆ. ಈ ಕುರಿತು, ಕುಟುಂಬದ ಕಾರ್ಯಕ್ರಮದ ನಿಮಿತ್ತ ಸಭೆಗೆ ಗೈರಾಗಿದ್ದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ಮಾಡಿ ಕೆಲ ಸಲಹೆ ನೀಡಿದ್ದಾರೆ ಎಂದು ಹೇಳಿದರು.

ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪ:

ತುಂಗಭದ್ರಾ ಜಲಾಶಯದ ಗೇಟ್‌ ದುರಸ್ತಿಯ 12 ಕೋಟಿ ರು. ಬಿಲ್‌ ಇನ್ನೂ ಪಾವತಿಸಿಲ್ಲ. ಇದರಿಂದಾಗಿ ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿದ್ದಾರೆ. ಒಟ್ಟು 32 ಗೇಟ್‌ ಅಳವಡಿಸಬೇಕಿದೆ. ಎರಡನೇ ಬೆಳೆಗೆ ರೈತರಿಗೆ ನೀರು ದೊರೆಯುತ್ತಿಲ್ಲ. ಎಕರೆಗೆ 25 ಸಾವಿರ ರು. ಪರಿಹಾರ ನೀಡಬೇಕು ಆಗ್ರಹಿಸಲಾಗಿದೆ. ಈ ಸರ್ಕಾರ ಉತ್ತರ ಕರ್ನಾಟಕದ ರೈತರಿಗೆ ಮೋಸ ಮಾಡಿದೆ. ಜತೆಗೆ ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಿಲ್ಲ. ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿಲ್ಲ. ಬಡವರ ಬಿಪಿಎಲ್‌ ಕಾರ್ಡುಗಳ ರದ್ದು, ಬಗರ್‌ ಹುಕುಂ ಮಂಜೂರಾತಿ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಜೈಲುಗಳ ಅಧ್ವಾನ, ಪೊಲೀಸರಿಂದ ದರೋಡೆ, ಪೊಲೀಸ್‌ ವರ್ಗಾವಣೆ ದಂಧೆ, ಬೆಂಗಳೂರಿನ ರಸ್ತೆ ಗುಂಡಿ ಸಮಸ್ಯೆ, ಸರ್ಕಾರಿ ಶಾಲೆಗಳ ದುಸ್ಥಿತಿ, ಶಿಕ್ಷಕರ ನೇಮಕ ವಿಳಂಬ ಸೇರಿ ಹಲವು ವಿಚಾರಗಳ ಬಗ್ಗೆ ಅಧಿವೇಶನದ ಉಭಯ ಸದನಗಳ ಆರಂಭದಲ್ಲೇ ಪ್ರಸ್ತಾಪಿಸಿ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸುತ್ತೇವೆ ಎಂದು ಆರ್‌.ಅಶೋಕ್‌ ಹೇಳಿದರು.

ಸಿದ್ದು ಬಗ್ಗೆ ಎಚ್ಡಿಕೆ ಕಿಡಿ:

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿ, ಬೆಳಗಾವಿ ಅಧಿವೇಶನದಲ್ಲಿ ಎರಡೂ ಪಕ್ಷಗಳು ಪರಿಣಾಮಕಾರಿಯಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಿವೆ ಎಂದರು.

ಅಲ್ಲದೆ, ಸಿದ್ದರಾಮಯ್ಯ ಸಿಎಂ ಆದಾಗ ಪೊಲೀಸರೇ ದರೋಡೆ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅವರು ಮೊದಲ ಬಾರಿಗೆ ಸಿಎಂ ಆಗಿದ್ದಾಗ ಮೈಸೂರಿನ ಬಿಳಿಕೆರೆಯಲ್ಲಿ ಬಸ್ಸಿನಲ್ಲಿ ಹಣ ದರೋಡೆ ಮಾಡಲಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಹಾಡಹಗಲೇ 7 ಕೋಟಿ ರು. ದರೋಡೆ ಮಾಡಲಾಗಿದೆ. ಎರಡೂ ಪ್ರಕರಣದಲ್ಲೂ ಪೊಲೀಸರು ಭಾಗಿಯಾಗಿದ್ದಾರೆ ಎಂದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ - ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ