
ವಿಧಾನಸಭೆ (ಆ.20): ರಾಜ್ಯ ಪೊಲೀಸ್ ಇಲಾಖೆಯಲ್ಲಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಂಬಂಧ ಬಹುತೇಕ ಪ್ರಕ್ರಿಯೆಗಳು ಮುಗಿದಿದ್ದು, ಮುಂದಿನ 15ರಿಂದ 20ದಿನದೊಳಗೆ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳವಾರ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಬಿ.ವೈ.ವಿಜಯೇಂದ್ರ ಪ್ರಶ್ನೆಗೆ ಉತ್ತರಿಸಿದ ಅವರು, 2021ನೇ ಸಾಲಿನಲ್ಲಿ 545 ಮತ್ತು 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಸಂಬಂಧ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗಿತ್ತು. ಈ 545 ಪಿಎಸ್‌ಐ ನೇಮಕಾತಿಯಲ್ಲಿ ಅವ್ಯವಹಾರ ನಡೆದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ಇದು ಬಗೆಹರಿಯುವವರೆಗೂ 402 ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಬಳಿಕ 545 ಪಿಎಸ್ಐ ನೇಮಕಾತಿ ಸಂಬಂಧ ಎದುರಾದ ಕಾನೂನಾತ್ಮಕ ಹಾಗೂ ಎಲ್ಲಾ ರೀತಿಯ ಸಮಸ್ಯೆಗಳನ್ನು ಬಗೆಹರಿಸಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ ಎಂದರು. ಇನ್ನು 402 ಪಿಎಸ್‌ಐ ನೇಮಕಾತಿ ಪೈಕಿ 393 ಅಭ್ಯರ್ಥಿಗಳ ಸಿಂಧುತ್ವ, ವೈದ್ಯಕೀಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮುಗಿದಿದೆ. ಶೀಘ್ರದಲ್ಲೇ ಉಳಿದ ಅಭ್ಯರ್ಥಿಗಳ ಬಾಕಿ ಪ್ರಕ್ರಿಯೆ ಮುಗಿಸಿ ಮುಂದಿನ 15-20 ದಿನದೊಳಗೆ 402 ಮಂದಿಗೂ ನೇಮಕಾತಿ ಆದೇಶ ನೀಡಲಾಗುವುದು ಎಂದು ಹೇಳಿದರು.
ಇಲಾಖೆಯಲ್ಲಿ ಪಿಎಸ್‌ಐಗಳ ಸಂಖ್ಯೆ ಕಡಿಮೆಯಿದೆ. ಈಗಾಗಲೇ 545 ಪಿಎಸ್ಐ ಅಭ್ಯರ್ಥಿಗಳು ಕಳೆದ ಮೂರು ತಿಂಗಳಿಂದ ತರಬೇತಿ ಪಡೆಯುತ್ತಿದ್ದಾರೆ. ಇದೀಗ 402 ಪಿಎಸ್‌ಐ ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಆದೇಶ ನೀಡಿ ತರಬೇತಿಗೆ ಕಳುಹಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.