
ಬೆಂಗಳೂರು, (ನ.19): ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ (Repealed Farm Laws) ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ (Farmers Protest) ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತ ಮತ್ತು ಕಾಂಗ್ರೆಸ್ ನ ಹೋರಾಟಕ್ಕೆ ಸಂದ ಚಾರಿತ್ರಿಕ ಜಯ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆದಿರುವ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದ ಮೂರು ಕೃಷಿ ಕಾಯ್ದೆಗಳು ಎಪಿಎಂಸಿ ಮಾರುಕಟ್ಟೆಗೆ ಮಾರಕವಾಗಿದ್ದವು. ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡಿರಲಿಲ್ಲ. ದೇಶದ ಕೃಷಿ ಕ್ಷೇತ್ರದಲ್ಲಿ ಖಾಸಗಿಯವರ ಪ್ರವೇಶ, ಒಪ್ಪಂದ ಕೃಷಿ ಸೇರಿದಂತೆ ಇತರೆ ಅಂಶಗಳು ರೈತರ ಭವಿಷ್ಯವನ್ನೇ ಸಮಾಧಿ ಮಾಡುತ್ತಿದ್ದವು.
"
PM Address to Nation: ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಘೋಷಿಸಿದ ಪ್ರಧಾನಿ ಮೋದಿ
ಈ ಹಿನ್ನೆಲೆಯಲ್ಲಿ ದೇಶದ ಅನ್ನದಾತರು ಚಳಿ, ಮಳೆ, ಬಿಸಿಲೆನ್ನದೆ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು. ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ, ಪೊಲೀಸ್ ಬಲ ಪ್ರಯೋಗಿಸಿತ್ತು. ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ಬದ್ಧವಾಗಿ ನಿಂತರು.
ಈ ಹೋರಾಟದಲ್ಲಿ 600ಕ್ಕೂ ಹೆಚ್ಚು ರೈತರು ಪ್ರಾಣ ತ್ಯಾಗ ಮಾಡಿದ್ದು, ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ. ದೇಶದ ಅನ್ನದಾತನನ್ನು ಎದುರುಹಾಕಿಕೊಂಡು ಉಳಿದವರಿಲ್ಲ. ಅಂದು ಬ್ರಿಟೀಷರು ರೈತರ ಮೇಲೆ ದಬ್ಬಾಳಿಕೆ ನಡೆಸಿ ದೇಶದಿಂದ ಕಾಲ್ಕಿತ್ತರು. ಇಂದು ಬಿಜೆಪಿ ಅದೇ ತಪ್ಪು ಮಾಡಿ ಬುದ್ಧಿ ಕಲಿತಿದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ.
3 ಕೃಷಿ ಕಾಯ್ದೆ ವಾಪಸ್ ಪಡೆದ್ರೂ ಪ್ರತಿಭಟನೆ ನಿಲ್ಲಿಸಲು ಮೋದಿಗೆ 1 ಷರತ್ತು ಹಾಕಿದ ಟಿಕಾಯತ್
ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ರೈತನೂ ದೇಶದ ರಕ್ಷಣೆಯಲ್ಲಿ ಯೋಧನಂತೆ ಕೆಲಸ ಮಾಡಿದ್ದಾರೆ. ಇದು ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು. ದುಷ್ಟ ಮನಸ್ಥಿತಿ ವಿರುದ್ಧ ಸಿಕ್ಕ ಗೆಲುವು ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರೈತರ ಹಿತದೃಷ್ಟಿಯಿಂದ ಕಾಂಗ್ರೆಸ್ ಕೂಡ ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಸಂಸತ್ತಿನ ಉಭಯ ಸದನಗಳು, ರಾಜ್ಯ ವಿಧಾನ ಮಂಡಲಗಳಲ್ಲಿ ಈ ಕರಾಳ ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡಿತ್ತು. ಬೀದಿಗಿಳಿದು ಪ್ರತಿಭಟನೆ ಮಾಡಿತ್ತು. ಈ ಕರಾಳ ಕಾಯ್ದೆಯ ಹಿಂದೆ ಅಡಗಿರುವ ಕೇಂದ್ರ ಸರ್ಕಾರದ ಷಡ್ಯಂತ್ರವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿದ್ದೆವು. ಕೇಂದ್ರ ಸರ್ಕಾರ ಇನ್ನುಮುಂದಾದರು ತನ್ನ ಸರ್ವಾಧಿಕಾರಿ ಮನಃಸ್ಥಿತಿಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು. ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕು ಎಂದು ಈ ಸಮಯದಲ್ಲಿ ಸರ್ಕಾರಕ್ಕೆ ಆಗ್ರಹಿಸುತ್ತೇನೆ' ಎಂದು ಹೇಳಿದ್ದಾರೆ.
ಕಾಂಗ್ರೆಸ್ ಎಂದೆಂದಿಗೂ ರೈತರು ಸೇರಿದಂತೆ ಎಲ್ಲ ವರ್ಗವರ ಜತೆಗೆ ಇರಲಿದೆ. ಅವರ ಹಿತಾಸಕ್ತಿಗೆ ಧಕ್ಕೆಯಾದರೆ ಹೋರಾಟ ಮಾಡಲಿದೆ ಎಂದೂ ಶಿವಕುಮಾರ್ ಅವರು ತಿಳಿಸಿದ್ದಾರೆ.
ವಿವಾದಿತ ಮೂರು ಕೃಷಿ ಮಸೂದೆಗಳ ಕೇಂದ್ರ ಸರ್ಕಾರ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್, ರೈತರ ಆಂದೋಲನ (Farmers Protest) ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು(farm laws) ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್ಪಿ (MSP) ಜೊತೆಗೆ ಸರ್ಕಾರವು ರೈತರ ಇತರ ಸಮಸ್ಯೆಗಳನ್ನು ಚರ್ಚಿಸಬೇಕು ಎಂದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.