
ಬೆಂಗಳೂರು (ಸೆ.04): ‘ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದು, ಅವರು ಶೀಘ್ರ ಸಭೆ ನಿಗದಿ ಮಾಡಲಿದ್ದಾರೆ. ಎರಡ್ಮೂರು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಜಲಸಂಪನ್ಮೂಲ ಸಚಿವರೂ ಆದ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ವಿವಿಧ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಯೋಜನೆಗೆ ಸಂಬಂಧಿಸಿ ಭೂಸ್ವಾಧೀನ, ಪುನರ್ವಸತಿ, ಪುನರ್ ನಿರ್ಮಾಣ, ಭೂಪರಿಹಾರ ಬಗ್ಗೆ ಪರಿಹಾರ ಕಂಡುಹಿಡಿಯಬೇಕು ಎಂದು ಮೂರ್ನಾಲ್ಕು ಸುತ್ತು ಚರ್ಚೆ ನಡೆಸಿದ್ದೇವೆ ಎಂದರು. ಈ ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಸಂಪುಟ ಸಭೆ ಹಾಗೂ ಉಪ ಸಮಿತಿ ಸಭೆಯಲ್ಲಿ ಪ್ರತಿ ಎಕರೆ ನೀರಾವರಿ ಜಮೀನಿಗೆ 24 ಲಕ್ಷ ರು., ಒಣ ಭೂಮಿಗೆ 20 ಲಕ್ಷ ರು. ಎಂದು ತೀರ್ಮಾನ ಮಾಡಿದ್ದರು. ಆದರೆ ಇದನ್ನು ಯಾವ ರೈತರೂ ಒಪ್ಪಲಿಲ್ಲ. ಜತೆಗೆ ನ್ಯಾಯಾಲಯದಲ್ಲೂ ವ್ಯತಿರಿಕ್ತ ತೀರ್ಪು ಬಂದಿದ್ದು ಹೆಚ್ಚು ಪರಿಹಾರ ನೀಡಬೇಕು ಎಂದು ಹೇಳಿದೆ ಎಂದು ಮಾಹಿತಿ ನೀಡಿದರು.
ಹೆಚ್ಚಿನ ಪರಿಹಾರ ಸಾಧ್ಯವಿಲ್ಲ: ಆದರೆ ಹೆಚ್ಚಿನ ಪರಿಹಾರ ನೀಡುವುದು ಸಾಧ್ಯವಿಲ್ಲವೆಂದು ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಕೃಷ್ಣಾ ಮೇಲ್ದಂಡೆ ವಿಚಾರವಾಗಿ ರೈತರು ಸೇರಿ ಎಲ್ಲಾ ಪಕ್ಷಗಳ ಮುಖಂಡರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಪ್ಪಿತ ಪರಿಹಾರದ ಮೂಲಕ ಕೆಲಸ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಇಂದಿನ ಸಂಪುಟ ಸಭೆಯಲ್ಲೂ ಚರ್ಚೆ: ಇಂದು ನಡೆದ ಸಭೆ ಬಗ್ಗೆ ಮುಖ್ಯಮಂತ್ರಿಗಳಿಗೂ ದೂರವಾಣಿ ಮೂಲಕ ಮಾಹಿತಿ ನೀಡಿದ್ದೇನೆ. ವಿಜಯಪುರ ಭಾಗದ ರೈತರು ನ್ಯಾಯಯುತ ಪರಿಹಾರ ನೀಡಿದರೆ ಒಪ್ಪುತ್ತೇವೆ ಎಂದಿದ್ದಾರೆ. ಹೀಗಾಗಿ ಗುರುವಾರ ನಡೆಯುವ ಕ್ಯಾಬಿನೆಟ್ ನಲ್ಲಿಯೂ ಚರ್ಚೆ ನಡೆಸಲಾಗುವುದು. ಚರ್ಚಿಸಿ ಈ ಬಗ್ಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಶಿವಕುಮಾರ್ ಮಾಹಿತಿ ನೀಡಿದರು.
ಏನಿದು ವಿವಾದ?: ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತ ಯೋಜನೆಗೆ ಭೂ ಸ್ವಾಧೀನವೇ ಪ್ರಮುಖ ಸಮಸ್ಯೆ. 1.33 ಲಕ್ಷ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮತ್ತು 20 ಗ್ರಾಮಗಳ ಪುನರ್ವಸತಿಗಾಗಿ 2 ಲಕ್ಷ ಕೋಟಿ ರು. ಅಗತ್ಯವಿದೆ. ಸಂತ್ರಸ್ತರು ಸೂಕ್ತ ಪರಿಹಾರ ಮತ್ತು ಸೌಲಭ್ಯಗಳಿಗಾಗಿ ಒತ್ತಾಯಿಸಿದ್ದಾರೆ. ಈ ಬೇಡಿಕೆಗಳನ್ನೆಲ್ಲ ಪೂರೈಸುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ್ದು, ಈ ಬಗ್ಗೆ ಕಳೆದ ವಾರ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಅವರು ಪ್ರತ್ಯೇಕ ಸಭೆ ನಡೆಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.