
ಬೆಂಗಳೂರು (ಅ.30): ಕರ್ನಾಟಕ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್ ಆಪರೇಷನ್' (Sting Operation) ಷಡ್ಯಂತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೆಪಿಸಿಸಿ ಭಾರಿ ಸರ್ಜರಿ ನಡೆಸಿದೆ: ಈ ಹೈಡ್ರಾಮಾದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಹಿರಿಯ ಕಾಂಗ್ರೆಸ್ ಮಹಿಳಾ ನಾಯಕಿ ಕೃಪಾ ಆಳ್ವ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬರೋಬ್ಬರಿ 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ (Expelled) ಮಾಡಲಾಗಿದೆ.
ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದ ವಿಡಿಯೋ ಹಾಗೂ ಹೇಳಿಕೆಗಳು ಮಾಧ್ಯಮಗಳಲ್ಲಿ ಭಾರಿ ಮಟ್ಟದಲ್ಲಿ ಪ್ರಸಾರವಾಗಿ, ಬಹಿರಂಗ ಪ್ರತಿಕ್ರಿಯೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿತ್ತು. ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ ಅವರು ಪ್ರಮುಖವಾಗಿ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ, ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಕೆಪಿಸಿಸಿ (KPCC) ವತಿಯಿಂದ ಅವರಿಗೆ ಕಾರಣ ಕೇಳಿ ನೋಟೀಸ್ ಜಾರಿಗೊಳಿಸಲಾಗಿತ್ತು.
ಕೆಪಿಸಿಸಿ ನೀಡಿರುವ ಕಾರಣ ಕೇಳಿ ನೋಟೀಸ್‌ಗೆ ಕೃಪಾ ಆಳ್ವ ಅವರು ನಿಗದಿತ ಸಮಯದ ಒಳಗಾಗಿ ಯಾವುದೇ ರೀತಿಯ ಉತ್ತರವಾಗಲಿ ಅಥವಾ ಸಮಜಾಯಿಷಿಯನ್ನಾಗಲಿ ನೀಡಿರಲಿಲ್ಲ. ಪಕ್ಷದ ಶಿಸ್ತು ನಿಯಮಗಳನ್ನು ಗಾಳಿಗೆ ತೂರಿ, ಉಡಾಫೆಯ ನಡವಳಿಕೆ ತೋರಿದ್ದು ಪಕ್ಷದ ಶಿಸ್ತು ಸಮಿತಿಯ ಕೆಂಗಣ್ಣಿಗೆ ಗುರಿಯಾಗಿದೆ.
ಪಕ್ಷದ ಮುಖಂಡರ ತನಿಖೆ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಖಡಕ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಟಿಂಗ್ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವುದು ಹಾಗೂ ನೋಟೀಸ್‌ಗೆ ಸ್ಪಂದಿಸದಿರುವುದು ಪೂರ್ಣವಾಗಿ 'ಪಕ್ಷವಿರೋಧಿ ಚಟುವಟಿಕೆ' ಎಂದು ಪರಿಗಣಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು 6 ವರ್ಷಗಳ ಕಾಲ ಪಕ್ಷದ ಮೂಲ ಸದಸ್ಯತ್ವದಿಂದಲೇ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ.
ಸಿದ್ದರಾಮಯ್ಯ ಅವರ ಸೈಬರ್ ದೂರಿನ ಬಳಿಕ ಸಿಸಿಬಿ (CCB) ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈಗಾಗಲೇ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ವತಃ ಸಿದ್ದರಾಮಯ್ಯ ಅವರೇ ಈ ಸ್ಟಿಂಗ್ ಆಪರೇಷನ್ ತಮ್ಮ ತೇಜೋವಧೆಗೆ ಹಾಗೂ ಬ್ಲ್ಯಾಕ್‌ಮೇಲ್ ತಂತ್ರಕ್ಕೆ ನಡೆಸಲಾದ ಷಡ್ಯಂತ್ರ ಎಂದು ಬಹಿರಂಗವಾಗಿ ಆರೋಪಿಸಿದ್ದರು. ಇದೀಗ ಪಕ್ಷದ ಹಿರಿಯ ನಾಯಕಿಯನ್ನೇ 6 ವರ್ಷಗಳ ಕಾಲ ಬಾಗಿಲಿಗೆ ಕಳುಹಿಸಿರುವುದು ಕಾಂಗ್ರೆಸ್ ಆಂತರಿಕ ವಲಯದಲ್ಲಿ ಹಾಗೂ ರಾಜ್ಯ ರಾಜಕೀಯ ಅಂಗಳದಲ್ಲಿ ಸಂಚಲನ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.