
ಬೆಂಗಳೂರು (ಏ.11): ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಗುಜರಾತ್ ಮಾದರಿ ಟಿಕೆಟ್ ಹಂಚಿಕೆ ಮಾಡುವುದಾಗಿ ಸೂಚನೆ ಕೊಟ್ಟಿದ್ದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ 70 ವರ್ಷ ಮೇಲ್ಪಟ್ಟ ಎಲ್ಲ ರಾಜಕೀಯ ನಾಯಕರಿಗೂ ಕೂಡ ಟಿಕೆಟ್ ನೀಡುವುದಿಲ್ಲ ಎಂಬ ಸುಳಿವನ್ನು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮಗೆ ಈ ಬಾರಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಸಿಗುವುದಿಲ್ಲ ಎಂಬ ನಿರೀಕ್ಷೆಯಿಂದ ಬಿಜೆಪಿಯ ಟಿಕೆಟ್ ಘೋಷಣೆಗೂ ಮುನ್ನವೇ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ಸ್ವತಃ ನಿವೃತ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ.
ಯಾರಾರಿಗೆ ಟಿಕೆಟ್ ಮಿಸ್:
ಕೆ.ಎಸ್. ಈಶ್ವರಪ್ಪ
ಜಗದೀಶ್ ಶೆಟ್ಟರ್
ಎಸ್.ಎ. ರಾಮದಾಸ್
ಎಸ್. ಸುರೇಶ್ ಕುಮಾರ್
ಗುಜರಾತ್‌ನಲ್ಲಿ 38 ಹಾಲಿ ಶಾಸಕರಿಗೆ ಟಿಕೆಟ್ ಮಿಸ್: ಇನ್ನು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, 6 ಸಚಿವರು ಸೇರಿದಂತೆ ಒಟ್ಟು 38 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಮಣೆಯನ್ನು ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಕೂಡ ಹೊಸ ಮುಖಗಳಿಗೆ ಟಿಕೆಟ್ ನೀಡುವ ಉದ್ದೇಶದಿಂದ ವಯಸ್ಸಾದ ವ್ಯಕ್ತಿಗಳಿಗೆ ಟಿಕೆಟ್ ನೀಡದಿರಲು ತೀರ್ಮಾನ ಮಾಡಲಾಗಿತ್ತು. ಈ ಗುಜರಾತ್ ಮಾದರಿಗೆ ಕರ್ನಾಟಕದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ರಾಜಕೀಯ ನಿವೃತ್ತಿ ಆಗುವ ಮೂಲಕ ಮೊದಲ ಬಲಿ ಆದಂತಾಗಿದ್ದಾರೆ.
ರಾಜಕೀಯ ನಿವೃತ್ತಿ ಪತ್ರದಲ್ಲೇನಿದೆ.? :ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನ ಮಾನ ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು' ಎಂದು ತಿಳಿಸಿದ್ದಾರೆ.
ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಧಿಡೀರ್ ಬೆಳವಣಿಗೆಯಲ್ಲಿ ನಿವೃತ್ತಿ ಘೋಷಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಪುತ್ರ ಕೆಇ ಕಾಂತೇಶ್ ಅವರಿಗೆ ಈಶ್ವರಪ್ಪ ಟಿಕೆಟ್ ಕೇಳಿದ್ದಾರೆ ಎನ್ನಲಾಗಿದ್ದು ಇಂದು ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.