ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡದಿದ್ರೆ ಕಾನೂನು ಹೋರಾಟ: ಸಚಿವ ಎಚ್‌.ಕೆ.ಪಾಟೀಲ್‌

By Kannadaprabha NewsFirst Published Sep 11, 2024, 4:21 PM IST
Highlights

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಈಗಾಗಲೇ ಬಜೆಟ್‌ನಲ್ಲಿ ಘೋಷಿಸಿದಂತೆ 5300 ಕೋಟಿ ರು. ಅನುದಾನವನ್ನು ನೀಡದಿದ್ದರೆ ಕಾನೂನು ಹೋರಾಟ ನಡೆಸಲು ಚಿಂತನೆ ಮಾಡಬೇಕಾಗುತ್ತದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು (ಸೆ.11): ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಈಗಾಗಲೇ ಬಜೆಟ್‌ನಲ್ಲಿ ಘೋಷಿಸಿದಂತೆ 5300 ಕೋಟಿ ರು. ಅನುದಾನವನ್ನು ನೀಡದಿದ್ದರೆ ಕಾನೂನು ಹೋರಾಟ ನಡೆಸಲು ಚಿಂತನೆ ಮಾಡಬೇಕಾಗುತ್ತದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ತನ್ನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು. ನೀಡುವುದಾಗಿ ಅಶ್ವಾಸನೆ ನೀಡಿತ್ತು. ಆದರೆ, ಸೆ.5 ರಂದು ರಾಜ್ಯಕ್ಕೆ ಬರೆದಿರುವ ಪತ್ರದಲ್ಲಿ ಅನುದಾನ ನೀಡುವ ಕುರಿತು ಮೀನಮೀಷ ಎಣಿಸುವ ರೀತಿಯಲ್ಲಿ ಉಲ್ಲೇಖಿಸಲಾಗಿದೆ. 

ಒಂದು ವೇಳೆ ಯೋಜನೆಗೆ ಹಣ ನೀಡಲು ಹಿಂದೇಟು ಹಾಕಿದರೆ, ರಾಜಕೀಯ ಒತ್ತಡ ಹಾಕುವುದು ಅನಿವಾರ್ಯವಾಗುತ್ತದೆ. ಇಲ್ಲದಿದ್ದರೆ, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರಾಜ್ಯಸಭೆಯಲ್ಲಿ ಉತ್ತರಿಸಿರುವ ಕೇಂದ್ರ ಸರ್ಕಾರ, ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟ ಎಲ್ಲ ಹಂತದ ಮಂಜೂರಾತಿಗಳು ದೊರೆತಿದೆ. ಇದು ರಾಷ್ಟ್ರೀಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲಾ ಅರ್ಹತೆ ಪಡೆದಿದೆ ಎಂದು ತಿಳಿಸಿದೆ. 

Latest Videos

ಅಲ್ಲದೇ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 5300 ಕೋಟಿ ರು. ಅನುದಾನ ಘೋಷಣೆ ಮಾಡಿದ್ದರು. ಆದರೆ, ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು ರಾಜ್ಯಕ್ಕೆ ಪತ್ರ ಬರೆದು ಯೋಜನೆಯ ಭೌಗೋಳಿಕ, ಯೋಜನೆಗಾಗಿ ರಾಜ್ಯ ಸರ್ಕಾರ ಬಳಕೆ ಮಾಡಿರುವ ಅನುದಾನ ಮತ್ತು ಕೇಂದ್ರದ ನಿಧಿಯಲ್ಲಿರುವ ಅನುದಾನಕ್ಕನುಗುಣವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪತ್ರದಲ್ಲಿನ ಅಂಶಗಳನ್ನು ಗಮನಿಸಿದರೆ ಅನುದಾನದಲ್ಲಿ ಬಹುತೇಕ ಕಡಿತ ಅಥವಾ ತಿರಸ್ಕರಿಸುವ ಅನುಮಾನ ಮೂಡಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಎಲೆಕ್ಟ್ರೋಲ್ ಬಾಂಡ್ ಬಗ್ಗೆ ಶ್ವೇತ ಪತ್ರ ಹೊರಡಿಸಲಿ: ಸಚಿವ ಎಚ್‌.ಕೆ.ಪಾಟೀಲ್‌

ಕೇಂದ್ರ ಸರ್ಕಾರದ ನಿಯಮಗಳು ಮತ್ತು ಷರತ್ತುಗಳಂತೆ ಎಲ್ಲ ಹಂತಗಳಲ್ಲೂ ಅನುಮೋದನೆಗೊಂಡು ಬಜೆಟ್‌ನಲ್ಲಿ ಘೋಷಣೆಯಾಗಿರುವ ಯೋಜನೆಗೆ ಈಗ ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ ಎಂದು ಟೀಕಿಸಿದರು. ಮಹಾದಾಯಿ ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವಧಿಯಲ್ಲಿಯೇ ಮಹಾದಾಯಿ ಜಲ ವಿವಾದ ಕುರಿತು ನ್ಯಾಯಮಂಡಳಿ ರಚಿಸಲು ಕೋರಿಕೆ ಸಲ್ಲಿಸಲಾಗಿತ್ತು. ಆದರೆ ನ್ಯಾಯಮಂಡಳಿ ಅವಶ್ಯಕತೆ ಇಲ್ಲದಿದ್ದರೂ ಕಾಂಗ್ರೆಸ್‌ ನ್ಯಾಯಮಂಡಳಿ ರಚಿಸಿತು ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿರುವುದು ಅವರ ನಿರ್ಲಕ್ಷವನ್ನು ತೋರುತ್ತದೆ. ಕೇಂದ್ರ ಸರ್ಕಾರದ ವನ್ಯಜೀವಿ ಮಂಡಳಿ ರಾಜ್ಯದ ಪ್ರತಿಷ್ಠಿತ ಮಹತ್ವದ ಯೋಜನೆಗೆ ಅಡ್ಡಗಾಲು ಹಾಕುವುದನ್ನು ಬಿಟ್ಟು ಮಂಜೂರಾತಿ ನೀಡಬೇಕೆಂದು ಒತ್ತಾಯಿಸಿದರು.

click me!