ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಏನೇ ವ್ಯತ್ಯಾಸಗಳಾದರೂ ಹೊಂದಿಕೊಂಡು ಹೋಗಬೇಕು. ಮತ್ತೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ಕೆಲಸ ಮಾಡಬೇಕಿದೆ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಬೆಂಗಳೂರು (ನ.14): ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಏನೇ ವ್ಯತ್ಯಾಸಗಳಾದರೂ ಹೊಂದಿಕೊಂಡು ಹೋಗಬೇಕು. ಮತ್ತೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ಕೆಲಸ ಮಾಡಬೇಕಿದೆ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರು ಆಯ್ಕೆಯಾಗಿದ್ದಾರೆ. ಯುವಕರಿಗೆ ಹೊಸ ಹುರುಪು ಮೂಡಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಈ ವೇಳೆ ಮುಂದೆ ಯಾವ ರೀತಿ ಒಟ್ಟಾಗಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.
ಗೌಡ, ಎಸ್ಸೆಂಕೆ, ಬೊಮ್ಮಾಯಿ ಮನೆಗೆ ವಿಜಯೇಂದ್ರ: ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆರ್ಶೀವಾದ ಮತ್ತು ಮಾರ್ಗದರ್ಶನ ಪಡೆದರು. ಸೋಮವಾರ ಬೆಳಗ್ಗೆ ಮೊದಲು ಆರ್.ಟಿ.ನಗರದಲ್ಲಿನ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ತೆರಳಿದ ವಿಜಯೇಂದ್ರ ಅವರ ಆರೋಗ್ಯ ವಿಚಾರಿಸಿದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಬಂದ ವಿಜಯೇಂದ್ರ ಅವರನ್ನು ಬೊಮ್ಮಾಯಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಉಭಯ ಕುಶಲೋಪರಿ ವಿಚಾರಿಸಿದರು. ಅಲ್ಲದೇ, ಬೊಮ್ಮಾಯಿ ಅವರ ಮಾರ್ಗದರ್ಶನ ಪಡೆದುಕೊಂಡರು.
ಕಾರ್ಯಕರ್ತರನ್ನು ಗೌರವದಿಂದ ಕಾಣುವ ಏಕೈಕ ಪಕ್ಷ ಬಿಜೆಪಿ: ಬಿ.ವೈ.ವಿಜಯೇಂದ್ರ
ನಂತರ ಸುದ್ದಿಗಾರರ ಜತೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹಳ ಸಂತೋಷಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಣಯ ಮಾಡಿದ್ದಾಗಿ ಹೇಳಿದ್ದಾರೆ. ಈ ನೇಮಕದಿಂದ ರಾಜ್ಯಕ್ಕೆ, ರಾಜ್ಯ ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಹುರಿದುಂಬಿಸಿದ್ದಾರೆ ಎಂದರು. ಬಳಿಕ ಪದ್ಮನಾಭನಗರಕ್ಕೆ ತೆರಳಿ ದೇವೇಗೌಡ ಅವರನ್ನು ಭೇಟಿಯಾಗಿ ಆರ್ಶೀವಾದ ಪಡೆದುಕೊಂಡರು. ಈ ವೇಳೆ ಬಿಜೆಪಿ ಶಾಸಕರಾದ ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ, ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದರು.
ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಮಾಜಿ ಸಚಿವ ಗೋವಿಂದ ಕಾರಜೋಳ
ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ವಿಜಯೇಂದ್ರ, ದೇವೇಗೌಡ ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ ಆರ್ಶೀವಾದ ಪಡೆದಿದ್ದೇನೆ. ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿ ಇಷ್ಟು ಚಿಕ್ಕ ವಯಸ್ಸಿಗೆ ದೊಡ್ಡ ಜವಾಬ್ದಾರಿ ನೀಡಿರುವ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ನನ್ನ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬಿದ ಮಾದರಿಯಲ್ಲಿಯೇ ಯಶಸ್ವಿಯಾಗುವಂತೆ ಹರಿಸಿದರು ಎಂದು ಹೇಳಿದರು.