
ಬೆಂಗಳೂರು(ಏ.11): ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ವಿ.ಸೋಮಣ್ಣ ಅಥವಾ ಅವರ ಪುತ್ರ ಡಾ. ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ಕ್ಷೇತ್ರ ಪಕ್ಷದ ಕೈತಪ್ಪಲಿದೆ ಎಂದು ಕ್ಷೇತ್ರದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸೋಮವಾರ ಬಿಜೆಪಿ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿಶ್ವನಾಥಗೌಡ ಸೇರಿದಂತೆ ಕ್ಷೇತ್ರದ ಬಿಬಿಎಂಪಿಯ ಮಾಜಿ ಸದಸ್ಯರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಪತ್ರ ಬರೆದಿದ್ದಾರೆ.
ಬಿಜೆಪಿ ಹಿರಿಯ ನಾಯಕರಿಗೆ ಡಬಲ್ ಟೆನ್ಶನ್! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ
ಸೋಮಣ್ಣ ಅವರು ಕಳೆದ ಐದು ವರ್ಷಗಳಲ್ಲಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಿ ಜನಮೆಚ್ಚುಗೆ ಗಳಿಸಿದ್ದಾರೆ. ಆಂತರಿಕ ಸಮೀಕ್ಷಾ ವರದಿಯಲ್ಲಿ ಸೋಮಣ್ಣ ಅವರು ಅತ್ಯಧಿಕ ಮತಗಳಿಂದ ಜಯ ಸಾಧಿಸುತ್ತಾರೆ ಎಂಬ ವರದಿ ಬಂದಿದೆ. ಪ್ರಸಕ್ತ ಸನ್ನಿವೇಶದಲ್ಲಿ ಸೋಮಣ್ಣ ಅವರು ಕ್ಷೇತ್ರ ಬದಲಾವಣೆ ಮಾಡುತ್ತಿರುವುದಾಗಿ ತಿಳಿದು ಬಂದಿದ್ದು, ಹಾಗೇನಾದರೂ ಆದರೆ ಕ್ಷೇತ್ರವು ಪಕ್ಷದ ಕೈತಪ್ಪುವ ಸ್ಥಿತಿ ನಿರ್ಮಾಣವಾಗಲಿದೆ. ಅಂತೆಯೆ ನೆರೆಯ ಕ್ಷೇತ್ರಗಳಾದ ವಿಜಯ ನಗರ, ರಾಜಾಜಿ ನಗರ, ಚಿಕ್ಕಪೇಟೆ, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರಗಳ ಮೇಲೆ ಪರಿಣಾಮ ಉಂಟಾಗಿ ಆ ಕ್ಷೇತ್ರಗಳು ಸಹ ಕೈ ತಪ್ಪುವ ಸನ್ನಿವೇಶ ಉಂಟಾಗಲಿದೆ. ಅಷ್ಟೇ ಅಲ್ಲದೆ, ಕ್ಷೇತ್ರದ ಕಾರ್ಯಕರ್ತರು, ಮುಖಂಡರು, ಬಂಡಾಯವೆದ್ದು ಪಕ್ಷಕ್ಕೆ ತೊಂದರೆಯಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸೋಮಣ್ಣ ಅವರನ್ನು ಗೋವಿಂದರಾಜ ನಗರ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.
ಒಂದು ವೇಳೆ ಸೋಮಣ್ಣ ಅವರನ್ನು ಬೇರೆ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದಲ್ಲಿ ಅವರ ಜಾಗಕ್ಕೆ ಪುತ್ರ ಅರುಣ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಬೇಕು. ಸೋಮಣ್ಣ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಪಕ್ಷದ ಸಂಘಟನೆಯಿಂದ ಪಕ್ಷ ಹಿಡಿತ ಸಾಧಿಸಲಿದೆ. ಈ ಇಬ್ಬರನ್ನೂ ಹೊರತುಪಡಿಸಿ ಬೇರೆ ಯಾರನ್ನೇ ಅಭ್ಯರ್ಥಿಯಾಗಿ ಘೋಷಿಸಿದರೆ ಪಕ್ಷಕ್ಕೆ ಹಿನ್ನೆಡೆಯಾಗಿ 3-4 ಕ್ಷೇತ್ರಗಳು ಕೈ ತಪ್ಪುವ ಸಾಧ್ಯತೆಯಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.