ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಪರ ನಟ ದರ್ಶನ್ ಚುನಾವಣಾ ಪ್ರಚಾರ ನಡೆಸುವ ವೇಳೆ ಪ್ರಚಾರ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಮಂಡ್ಯ (ಏ.20): ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಪರ ನಟ ದರ್ಶನ್ ಚುನಾವಣಾ ಪ್ರಚಾರ ನಡೆಸುವ ವೇಳೆ ಪ್ರಚಾರ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರಬಾಚನಹಳ್ಳಿ ಬಳಿಯಲ್ಲಿ ಶುಕ್ರವಾರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದರು. ಪ್ರಚಾರದ ವಾಹನದ ವೇಗವಾಗಿ ಮುಂದೆ ಸಾಗುತ್ತಿದ್ದಾಗ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ.
ನಟ ದರ್ಶನ್ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಕೂಡಲೇ ವಿದ್ಯುತ್ ತಂತಿ ಕೂಡಲೇ ತುಂಡಾಗಿ ಬಿದ್ದಿದ್ದರಿಂದ ಅನಾಹುತ ತಪ್ಪಿದೆ. ಘಟನೆಯಲ್ಲಿ ನಟ ದರ್ಶನ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ ಘಟನೆಯ ಬಳಿಕ ನಟ ದರ್ಶನ್ ಲೋಕಸಭಾ ಚುನಾವಣಾ ಪ್ರಚಾರವನ್ನು ಅರ್ಧಕ್ಕೇ ಮೊಟಕುಗೊಳಿಸಿ ಕಾರಿನಲ್ಲಿ ಬೆಂಗಳೂರಿಗೆ ತೆರಳಿದರು ಎಂದು ತಿಳಿದು ಬಂದಿದೆ.
ಸ್ಟಾರ್ ಚಂದ್ರು ಪರ ಪ್ರಚಾರ: ರಾಷ್ಟ್ರದ ಗಮನಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರ ದಿನಕ್ಕೊಂದು ರೀತಿಯ ರಂಗನ್ನು ಪಡೆದುಕೊಳ್ಳುತ್ತಿದೆ. ಅಖಾಡದಲ್ಲಿ ಅಭ್ಯರ್ಥಿಗಳ ಪ್ರಚಾರ ಭರಾಟೆ ಜೋರಾಗಿದೆ. ಇದೀಗ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಕ್ಕೆ ನಟ ದರ್ಶನ್ ನಿಂತಿದ್ದಾರೆ. ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಳಿಕವೂ ನಟ ದರ್ಶನ್ ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ನಡೆಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಆದರೆ, ನಟ ದರ್ಶನ್ ಒಬ್ಬ ಸ್ಟಾರ್ ಪ್ರಚಾರಕರಾಗಿದ್ದು, ಅವರ ಪ್ರಚಾರ ಪಕ್ಷಾತೀತವಾಗಿದೆ. ಅವರೊಂದಿಗೆ ಸ್ನೇಹ, ವಿಶ್ವಾಸದಿಂದ ಇರುವವರ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಲೇ ಬಂದಿದ್ದಾರೆ.
ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಇಂದು ಮೋದಿ ಸಮಾವೇಶ: ಸಿದ್ಧತೆ ಪರಿಶೀಲಿಸಿದ ವಿಜಯೇಂದ್ರ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರಿನಿಂದ ಸ್ಪರ್ಧಿಸಿದ್ದ ಕೆ.ಎಂ.ಉದಯ್, ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ದರ್ಶನ್ ಪುಟ್ಟಣ್ಣಯ್ಯ ಪರ ದರ್ಶನ್ ಹಾಗೂ ಚುನಾವಣಾ ಪ್ರಚಾರ ನಡೆಸಿದ್ದರು. ಇಬ್ಬರೂ ಗೆಲುವು ಸಾಧಿಸಿದ್ದು ವಿಶೇಷವಾಗಿತ್ತು. ಜಿಲ್ಲೆಯೊಳಗೆ ದರ್ಶನ್ ಹೆಸರಿನಲ್ಲಿ ಒಂದಷ್ಟು ವೋಟ್‌ಬ್ಯಾಂಕ್ ಇದೆ. ಅದನ್ನು ಕಾಂಗ್ರೆಸ್‌ನತ್ತ ಸೆಳೆಯುವ ಸಲುವಾಗಿ ದರ್ಶನ್ ಅವರನ್ನು ಕೈಪಡೆಯ ನಾಯಕರು ಚುನಾವಣಾ ಪ್ರಚಾರಕ್ಕೆ ಕರೆತಂದಿದ್ದಾರೆ.