ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಮೂಲಕ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.
ಕೆ.ಆರ್.ಪೇಟೆ (ಜ.22): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಮೂಲಕ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು. ತಾಲೂಕಿನ ತೆಂಡೇಕೆರೆ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್ ಘಟಕದಿಂದ ಆಯೋಜಿಸಿದ್ದ ಶೀಳನೆರೆ ಮತ್ತು ಬೂಕನಕೆರೆ ಹೋಬಳಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮಂಡ್ಯ ಜಿಲ್ಲೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ನೆರೆಯ ಹಾಸನ ಹಾಗೂ ಮೈಸೂರು ಜಿಲ್ಲೆಯಂತೆ ಮಂಡ್ಯ ಜಿಲ್ಲೆಯನ್ನೂ ಅಭಿವೃದ್ಧಿ ಪಡಿಸಬೇಕಿದೆ ಎಂದರು.
ಜಿಲ್ಲೆಯ ಜನ ಸ್ವಾಭಿಮಾನ ಕಳೆದುಕೊಳ್ಳಬಾರದು. ಪಕ್ಷದ ಮುಖಂಡರು ತಮ್ಮೊಳಗಿನ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪರಸ್ಪರ ಒಗ್ಗೂಡಿ ಕೆಲಸ ಮಾಡಬೇಕು. ಲೋಕಸಭಾ ಚುನಾವಣೆ ನಂತರವೂ ರಾಜ್ಯದಲ್ಲಿ ಕಾಂಗ್ರೆಸ್ ಮುಂದಿನ ನಾಲ್ಕು ವರ್ಷಗಳ ಕಾಲ ಅಧಿಕಾರದಲ್ಲಿರುತ್ತದೆ ಎಂದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಕಡೆಗೆ ನಾನು ಹೆಚ್ಚು ಒತ್ತು ಕೊಟ್ಟಿದ್ದರಿಂದ ಪಕ್ಷದ ಕಾರ್ಯಕರ್ತರ ಜೊತೆ ಸಕ್ರಿಯವಾಗಿ ಕುಳಿತು ಅವರ ಸಮಸ್ಯೆ ಆಲಿಸಲಾಗಿಲ್ಲ. ಆದರೆ, ಜಿಲ್ಲೆಯ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಜನಪರವಾದ ಕೆಲಸ ಮಾಡುತ್ತಿದ್ದೇನೆ ಎಂದರು.
undefined
ಮುಂದಿನ ದಿನಗಳಲ್ಲಿ ಕಾರ್ಯಕರ್ತರಿಗೆ ಅಧಿಕಾರ ನೀಡಿ ಶಕ್ತಿ ತುಂಬವ ಕೆಲಸ ಮಾಡಲಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯ ಜನ ಶಕ್ತಿ ನೀಡುವ ಕೆಲಸ ಮಾಡಬೇಕು. ಈ ಮೂಲಕ ಕಾಂಗ್ರೆಸ್ ಪಕ್ಷದ ಕೈ ಬಲಡಿಸಬೇಕು ಎಂದರು. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಇಂದು ರಾಜ್ಯದ ಪ್ರತಿ ಮನೆಗೂ ಮಾಸಿಕ 5 ಸಾವಿರ ಹಣ ತಲುಪುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ನಾನು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದೇನೆ. ರಾಜ್ಯದಲ್ಲಿ ತೀವ್ರವಾದ ಬರಗಾಲವಿದೆ. ಆದರೆ, ಕೇಂದ್ರ ಸರ್ಕಾರ ಬರದಲ್ಲೂ ರಾಜಕೀಯ ಮಾಡುತ್ತಿದೆ. ಇದುವರೆಗೂ ರಾಜ್ಯಕ್ಕೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿಲ್ಲ ಎಂದರು.
ಕೊತ್ವಾಲ ಶಿಷ್ಯನ ಕೈಗೆ ಅಧಿಕಾರ ಸಿಕ್ಕದಿರುವುದು ನಮ್ಮ ಪುಣ್ಯ: ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿ
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿಯಾಗಿದೆ. ಜೆಡಿಎಸ್ ಜಾತಿ ಹೆಸರಿನಲ್ಲಿ ಭಾವನಾತ್ಮಕವಾಗಿ ಕೆಲಸ ಮಾಡುತ್ತಿದೆ. ಜಾತಿ ರಾಜಕಾರಣದಿಂದ ಜನರ ಹೊಟ್ಟೆ ತುಂಬುವುದಿಲ್ಲ. ಜಾತಿ ರಾಜಕಾರಣ ಅಭಿವೃದ್ಧಿಗೆ ಪೂರಕವಲ್ಲ ಎಂದರು. ಕಾಂಗ್ರೆಸ್ ಮುಖಂಡ ಬಿ.ಎಲ್.ದೇವರಾಜು ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ತಾಲೂಕು ಉಸ್ತುವಾರಿ ಚಿನಕುರಳಿ ರಮೇಶ್, ವಿಜಯ ರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಹರಳಹಳ್ಳಿ ವಿಶ್ವನಾಥ್, ಜಿಪಂ ಮಾಜಿ ಸದಸ್ಯ ಕೋಡಿಮಾರನಹಳ್ಳಿ ದೇವರಾಜು, ಎಂ.ಡಿ.ಕೃಷ್ಣಮೂರ್ತಿ, ಬಸ್ತಿ ರಂಗಪ್ಪ, ಡಾ.ಕೆ.ಸಿ.ಶ್ರೀಕಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.