
ಮಂಡ್ಯ (ಫೆ.18): ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ನಾಯಕತ್ವದ ಕುರಿತು ಕೇಳಿಬರುತ್ತಿರುವ ಸರಣಿ ಹೇಳಿಕೆಗಳ ಬಗ್ಗೆ ಮಂಡ್ಯದ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುತ್ತೀರೋ ಇಲ್ಲವೋ ಎಂಬುದನ್ನು ಹೈಕಮಾಂಡ್ ಕೂಡಲೇ ಸ್ಪಷ್ಟಪಡಿಸಬೇಕು. ಇಲ್ಲದಿದ್ದರೆ ಪಕ್ಷ ಮತ್ತು ಸರ್ಕಾರ ಎರಡಕ್ಕೂ ಭಾರಿ ಹಾನಿಯಾಗಲಿದೆ' ಎಂದು ಅವರು ಎಚ್ಚರಿಸಿದ್ದಾರೆ.
ಮಂಡ್ಯ ಜಿಲ್ಲೆಯ ಬೂದನೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ನ ಮೌನ ಮತ್ತು ನಾಯಕರ ನಡುವಿನ ಶೀತಲ ಸಮರವನ್ನು ಕಟುವಾಗಿ ಟೀಕಿಸಿದರು. 'ದಿನಕ್ಕೊಬ್ಬರು ಒಂದೊಂದು ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಡಿ.ಕೆ. ಶಿವಕುಮಾರ್ ಅವರ ವಿಚಾರದಲ್ಲಿ ಹೈಕಮಾಂಡ್ ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳಬೇಕು. 'ಅವರನ್ನು ಸಿಎಂ ಮಾಡುತ್ತೇವೆ' ಎಂದಾದರೂ ಹೇಳಲಿ ಅಥವಾ 'ಇಲ್ಲ' ಎಂದಾದರೂ ತಿಳಿಸಲಿ. ಈ ರೀತಿಯ ಅಸ್ಪಷ್ಟತೆಯಿಂದಾಗಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ತೀವ್ರ ನೋವಾಗುತ್ತಿದೆ. ಈ ವಿಚಾರವನ್ನು 'ಟೈಂ ಪಾಸ್' ರೀತಿ ನಡೆಸಿಕೊಳ್ಳಬಾರದು. ಹೈಕಮಾಂಡ್ ಕೂಡಲೇ ಮಧ್ಯಪ್ರವೇಶಿಸಿ ಈ ವಿವಾದಕ್ಕೆ ಪೂರ್ಣವಿರಾಮ ಹಾಕಬೇಕು' ಎಂದು ರವಿಕುಮಾರ್ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಶಾಸಕರು ವಿದೇಶಿ ಪ್ರವಾಸ ಕೈಗೊಂಡಿರುವ ವಿಚಾರದ ಬಗ್ಗೆಯೂ ಗಣಿಗ ರವಿಕುಮಾರ್ ವ್ಯಂಗ್ಯವಾಡಿದರು. 'ಯಾರೋ ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಯನ್ನು ಇಳಿಸಲು ಸಾಧ್ಯವಿಲ್ಲ. ಅವರು ಕದ್ದು ಹೋಗಿದ್ದಾರೋ ಅಥವಾ ಧೈರ್ಯದಿಂದ ಹೋಗಿದ್ದಾರೋ ನನಗಂತೂ ಗೊತ್ತಿಲ್ಲ. ಅವರು ಯಾರೇ ಸ್ಪಾನ್ಸರ್ ಮಾಡಿದರೂ ಹೋಗಿರಲಿ ಅಥವಾ ಸ್ವಂತ ಹಣದಲ್ಲಿ ಹೋಗಿರಲಿ, ವಿದೇಶ ಪ್ರವಾಸಗಳಿಂದ ಸರ್ಕಾರ ಬದಲಾಗುವುದಿಲ್ಲ. ನಾನು 50 ಶಾಸಕರನ್ನು ವಿದೇಶಕ್ಕೆ ಕರೆದುಕೊಂಡು ಹೋದರೂ ಮುಖ್ಯಮಂತ್ರಿಯನ್ನು ಬದಲಾಯಿಸಲು ಸಾಧ್ಯವಿಲ್ಲ' ಎಂದು ಅವರು ಮಾರ್ಮಿಕವಾಗಿ ನುಡಿದರು.
'ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಹೈಕಮಾಂಡ್ ನಡುವೆ ಈಗಾಗಲೇ ಮಾತುಕತೆ ನಡೆದಿದೆ. ಹೈಕಮಾಂಡ್ ಸೂಕ್ತ ಕಾಲದಲ್ಲಿ ಸೂಕ್ತ ತೀರ್ಮಾನ ಮಾಡುತ್ತದೆ ಎಂಬ ನಂಬಿಕೆ ನಮಗಿದೆ. ಆದರೆ, ಸಾರ್ವಜನಿಕವಾಗಿ ನಡೆಯುತ್ತಿರುವ ಈ ಬೆಳವಣಿಗೆಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಿವೆ. ಹೈಕಮಾಂಡ್ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ಮಿತಿ ಮೀರಲಿದೆ' ಎಂದು ಎಚ್ಚರಿಸಿದರು.
ಶಾಸಕ ರವಿಕುಮಾರ್ ಅವರ ಈ ನೇರ ಮತ್ತು ನಿಷ್ಠುರ ನುಡಿಗಳು ಈಗ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಹೈಕಮಾಂಡ್ ಈ ಬಗ್ಗೆ ಯಾವ ರೀತಿ ಸ್ಪಂದಿಸಲಿದೆ ಎಂಬುದು ಕುತೂಹಲಕಾರಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.