ರಾಜ್ಯದಲ್ಲಿ ತೀವ್ರ ಬರ ಆವರಿಸಿರುವ ಹಿನ್ನೆಲೆಯಲ್ಲಿ ನೆರವು ಕೋರಿ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.
ದಾವಣಗೆರೆ (ನ.12): ರಾಜ್ಯದಲ್ಲಿ ತೀವ್ರ ಬರ ಆವರಿಸಿರುವ ಹಿನ್ನೆಲೆಯಲ್ಲಿ ನೆರವು ಕೋರಿ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದರೂ ಕೇಂದ್ರ ಸರ್ಕಾರ ಪರಿಹಾರ ಕಾರ್ಯಕ್ಕೆ ಅನುದಾನ ನೀಡದೆ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದರು. ಕೇಂದ್ರ ಸರ್ಕಾರವು ಕರ್ನಾಟಕದ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ.
ಈಗ ಬಿಜೆಪಿ ರಾಜ್ಯ ನಾಯಕರು ಬರ ಅಧ್ಯಯನ ಪ್ರವಾಸ ಮಾಡುತ್ತಿರುವುದು ಕೇವಲ ಕಣ್ಣೊರೆಸುವ ತಂತ್ರ ಅಷ್ಟೇ ಎಂದು ಟೀಕಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಗೆಂದು ಇಲ್ಲಿಗೆ ಬಂದಿದ್ದೇನೆ. ಲೋಕಸಭೆ ಚುನಾವಣೆ ಆಕಾಂಕ್ಷಿಗಳು, ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು. ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟವಾಗಲಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪೂರ್ವಭಾವಿ ಸಭೆ ನಡೆಸುತ್ತಿದ್ದು, ರಾಜ್ಯ ನಾಯಕರು ಆಯಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ನಮ್ಮ ಪಕ್ಷ ಈ ಸಲ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಿದರು.
ಬಿಜೆಪಿಯಲ್ಲಿ ಬಿಎಸ್‌ವೈ, ಶೆಟ್ಟರ್, ಈಗ ಡಿವಿಎಸ್ ಕಡೆಗಣನೆ: ರೇಣುಕಾಚಾರ್ಯ ಕಿಡಿ
ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲಿದೆ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪೂರ್ವಭಾವಿ ಸಭೆಗಳ ನಡೆಸುತ್ತಿದ್ದು, ಲೋಕಸಭೆ ಚುನಾವಣೆ ಆಕಾಂಕ್ಷಿಗಳು, ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ. ರಾಜ್ಯ ನಾಯಕರು ಆಯಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಕಾಂಗ್ರೆಸ್ ಈ ಬಾರಿ ಹೆಚ್ಚು ಸ್ಥಾನ ಗೆಲ್ಲಲಿದ್ದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟವಾಗಲಿದೆ.
ಅಭ್ಯರ್ಥಿ ಯಾರಾದ್ರೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ: ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಸೇರಿ ರಾಜ್ಯದಿಂದ ಕನಿಷ್ಟ 20 ಕ್ಷೇತ್ರ ಗೆಲ್ಲಿಸಿ ಕನ್ನಡಿಗರೇ ಆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕೈಗಳ ಮತ್ತಷ್ಟು ಬಲಪಡಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.
ನಗರದ ಶಾಬನೂರು ರಸ್ತೆಯ ಎಂಬಿಎ ಒಳಾಂಗಣ ಸಭಾಂಗಣದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯ ಸಂಭಾವ್ಯ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಕುರಿತ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ, ಪಕ್ಷದ ಗೆಲುವೇ ನಮ್ಮ ನಿಮ್ಮೆಲ್ಲರ ಗುರಿಯಾಗಿರಬೇಕು. ಪ್ರತಿ ಕ್ಷೇತ್ರದಲ್ಲೂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುತ್ತದೆ. ಅದೇ ರೀತಿ ಇಲ್ಲಿಯೂ ಇದೆ. ವರಿಷ್ಠರು ಯಾರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೂ, ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಗೆಲುವಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ಇವಿ ನೀತಿ ಕ್ಲೀನ್ ಮೊಬಿಲಿಟಿ ನೀತಿಯಾಗಿ ಮಾರ್ಪಾಟು: ಸಚಿವ ಎಂ.ಬಿ.ಪಾಟೀಲ್
ಯುವ ನಿಧಿ ಯೋಜನೆ ಶೀಘ್ರ: ಕಾಂಗ್ರೆಸ್ ನೀಡಿದ್ದ 5 ಭರವಸೆ ಪೈಕಿ ನಾಲ್ಕನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಬಾಕಿ ಯುವ ನಿಧಿ ಯೋಜನೆ ಶೀಘ್ರವೇ ಅನುಷ್ಠಾನಗೊಳ್ಳಲಿದೆ. ಬಿಜೆಪಿಯಿಂದಾಗಿ ಸಂವಿಧಾನ ಅಪಾಯದಲ್ಲಿದ್ದು, ಕಾಂಗ್ರೆಸ್‌ನಿಂದ ಮಾತ್ರ ದೇಶ, ಸಂವಿಧಾನ, ಜನರ ರಕ್ಷಣೆ ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ನೀಡಿ ಅಧಿಕಾರಕ್ಕೆ ಬಂದರೂ, ಯಾವುದೇ ಹುದ್ದೆ ಸೃಷ್ಟಿಸಲಿಲ್ಲ. ವಿದೇಶದಿಂದ ಕಪ್ಪು ಹಣ ತರುವುದಾಗಿ ಘೋಷಿಸಿದ್ದರು. ಅದೂ ಇನ್ನೂ ಕಾರ್ಯ ರೂಪಕ್ಕೆ ತಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.