ನಮ್ಮಲ್ಲಿ ಯಾವುದೇ ಬಣ ಇಲ್ಲ. ಕಾಂಗ್ರೆಸ್ ಬಣವೇ ಬಣ ಅಷ್ಟೇ. ಕಾಂಗ್ರೆಸ್ ಪಕ್ಷದಲ್ಲಿ ಇರುವಂತಹ ಶಿಸ್ತೇ ಅಂತಿಮ. ಹೈಕಮಾಂಡ್ ಹೇಳಿದಂತೆ ಎಲ್ಲರೂ ನಡೆದುಕೊಳ್ಳುತ್ತಾರೆ ಅಷ್ಟೇ ಎಂದು ಹೇಳುವ ಮೂಲಕ ನಾನು ಸಿದ್ದರಾಮಯ್ಯ ಬಣ ಎಂದಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಗೆ ತಿರುಗೇಟು ನೀಡಿದ ಸಚಿವ ಬೋಸರಾಜ್
ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಡಗು(ನ.01): ಕೊಡಗು ಜಿಲ್ಲಾಡಳಿತದ ವತಿಯಿಂದ 68 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು(ಬುಧವಾರ) ಅರ್ಥಪೂರ್ಣವಾಗಿ ಜರುಗಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮೊದಲು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿದರು.
ಮಡಿಕೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಕೊಡಗು ಉಸ್ತುವಾರಿ ಸಚಿವ ಭೋಸರಾಜ್ ಅವರಿಗೆ ಮಡಿಕೇರಿ ಶಾಸಕ ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಎಸ್ಪಿ ರಾಮರಾಜನ್ ಸೇರಿದಂತೆ ಇತರರು ಸಾತ್ ನೀಡಿದರು. ಬಳಿಕ ಪೊಲೀಸ್ ಸಶಸ್ತ್ರ ಮೀಸಲು ಪಡೆ, ಅರಣ್ಯ ಪೊಲೀಸ್ ಸೈನಿಕ ಶಾಲೆ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ಎನ್ ಸಿಸಿ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ರಾಜ್ಯೋತ್ಸವದಲ್ಲಿ ಪಥ ಸಂಚಲನ ವೀಕ್ಷಿಸಿದ ಸಚಿವ ಭೋಸರಾಜ್ ಗೌರವ ವಂದನೆ ಸ್ವೀಕರಿಸಿದರು. ಇದಕ್ಕೂ ಮೊದಲು ಬೆಳಿಗ್ಗೆ 7 ಗಂಟೆಗೆ ನಗರದ ಕೋಟೆ ಆವರಣದಿಂದ ಸ್ತಬ್ಧ ಚಿತ್ರಗಳ ಹಾಗೂ ಕಲಾ ತಂಡಗಳ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್ ಚಾಲನೆ ನೀಡಿದರು.
ರಾಜ್ಯಾದ್ಯಂತ ಕನ್ನಡ ಹಬ್ಬ: ಕರಾವಳಿಯಲ್ಲಿ ಕರಾಳ ದಿನ; ಮತ್ತೆ ಕೇಳಿಬಂತು ತುಳು ರಾಜ್ಯದ ಕೂಗು!
ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ, ಪಶುಪಾಲನೆ, ಅರಣ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ತಾಲ್ಲೂಕು ಪಂಚಾಯತ್ ವತಿಯಿಂದ ಸ್ತದ್ಭ ಚಿತ್ರಗಳು ಪಾಲ್ಗೊಂಡಿದ್ದವು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗೊಂಬೆ ಕುಣಿತ, ಡೊಳ್ಳು ಕುಣಿತ ಕಲಾ ತಂಡಗಳು ಭಾಗವಹಿಸಿದ್ದವು.
ಕಾರ್ಯಕ್ರಮದಲ್ಲಿ ಮೈಸೂರಿನ ಅಮ್ಮ ರಾಮಚಂದ್ರ ತಂಡದವರು ಹುಯಿಲಗೋಳ ನಾರಾಯಣರಾಯರ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ಕುವೆಂಪುರವರ ‘ಎಲ್ಲಾದರು ಇರು ಎಂತಾದರು ಇರು..., ದ. ರಾ ಬೇಂದ್ರೆಯವರ ‘ಒಂದೇ ಒಂದೇ ಕರ್ನಾಟಕ ಒಂದೇ...’, ಸಿದ್ದಯ್ಯ ಪುರಾಣಿಕ ಅವರ ‘ಹೊತ್ತಿತೋ ಹೊತ್ತಿತು ಕನ್ನಡದ ದೀಪ..’ ಮತ್ತು ಚೆನ್ನವೀರ ಕಣವಿ ಅವರ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ..’ ಗೀತೆಗಳನ್ನು ಹಾಡಿ ಗಮನ ಸೆಳೆದರು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಕನ್ನಡ ನಾಡಿನ ಚರಿತ್ರೆ ಹಿರಿಮೆಯನ್ನು ಬಿಂಬಿಸುವ ನೃತ್ಯ ರೂಪಕಗಳು ಎಲ್ಲರ ಗಮನ ಸೆಳೆದವು.
ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಇದ್ದರು.
ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬೋಸರಾಜ್, ನಮ್ಮಲ್ಲಿ ಯಾವುದೇ ಬಣ ಇಲ್ಲ. ಕಾಂಗ್ರೆಸ್ ಬಣವೇ ಬಣ ಅಷ್ಟೇ. ಕಾಂಗ್ರೆಸ್ ಪಕ್ಷದಲ್ಲಿ ಇರುವಂತಹ ಶಿಸ್ತೇ ಅಂತಿಮ. ಹೈಕಮಾಂಡ್ ಹೇಳಿದಂತೆ ಎಲ್ಲರೂ ನಡೆದುಕೊಳ್ಳುತ್ತಾರೆ ಅಷ್ಟೇ ಎಂದು ಹೇಳುವ ಮೂಲಕ ನಾನು ಸಿದ್ದರಾಮಯ್ಯ ಬಣ ಎಂದಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಗೆ ತಿರುಗೇಟು ನೀಡಿದರು. ಇದರಲ್ಲಿ ಯಾರು ಮುಂದು ಹಿಂದು ಎನ್ನುವ ವ್ಯತ್ಯಾಸವಿಲ್ಲ. ಕಾಂಗ್ರೆಸ್ ಅಧಿನಾಯಕರು ಏನು ಹೇಳುತ್ತಾರೆ ಅದರಂತೆ ಎಲ್ಲರೂ ನಡೆದುಕೊಳ್ಳುತ್ತಾರೆ ಅಷ್ಟೇ ಎಂದರು. ಬೇರೆ ಸಿಎಂ ಆಗುತ್ತಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಅದೆಲ್ಲವೂ ವಿರೋಧ ಪಕ್ಷದವರ ಸೃಷ್ಟಿ ಅಷ್ಟೇ. ನಮ್ಮ ಸರ್ಕಾರ ಸುಭದ್ರವಾಗಿದ್ದು,
ಎಲ್ಲಾ ಯೋಜನೆಗಳು ಸುಸೂತ್ರವಾಗಿ ಜಾರಿಯಾಗುತ್ತಿವೆ. ಆದರೆ ರಾಜಕೀಯವಾಗಿ ಉಪದ್ರ ನೀಡುವ ಕೆಲಸಗಳು ವಿರೋಧ ಪಕ್ಷದವರಿಂದ ಆಗುತ್ತಲೇ ಇರುತ್ತವೆ. ಬಿಜೆಪಿ ಜೆಡಿಎಸ್ ನವರ ಕುತಂತ್ರಗಳಿಗೆ ಯಾವುದೇ ಅವಕಾಶ ಇರುವುದಿಲ್ಲ ಎಂದಿದ್ದಾರೆ.