
ಬೆಂಗಳೂರು (ಅ.14): ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಗಳು ಶಾಸಕರ ಅಭಿಪ್ರಾಯದ ಮೇಲೆಯೇ ಆಗುವಂಥದ್ದು, ಕೆಲವೊಮ್ಮೆ ಸಂಖ್ಯೆ ಹೆಚ್ಚು ಕಡಿಮೆ ಆಗಬಹುದು. ಪರಿಸ್ಥಿತಿ ತಿಳಿಯದೆ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರ ಹಂಚಿಕೆಗೆ ಶಾಸಕರ ಬಲ ಮುಖ್ಯ ಆಗಲ್ಲ, ಹೈಕಮಾಂಡ್ ನಿರ್ಣಯವೇ ಮುಖ್ಯ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಹೈಕಮಾಂಡ್‌ನವರು ಯಾವುದೇ ತೀರ್ಮಾನ ಮಾಡುವಾಗ ಎಲ್ಲಾ ಶಾಸಕರನ್ನು ಕೇಳಿಯೇ ತೆಗೆದುಕೊಳ್ಳುತ್ತಾರೆ. ಶಾಸಕರ ಪಲ್ಸ್, ಅಭಿಪ್ರಾಯ ತಿಳಿದುಕೊಳ್ಳದೆ ಹೈಕಮಾಂಡ್ ನಿರ್ಧಾರ ಮಾಡಲ್ಲ ಎಂದರು. ಹೈಕಮಾಂಡ್‌ನವರು ಮೊದಲು ವೀಕ್ಷಕರನ್ನು ರಾಜ್ಯಗಳಿಗೆ ಕಳುಹಿಸಿ ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ಅದನ್ನು ಹೈಕಮಾಂಡ್‌ಗೆ ತಲುಪಿಸುತ್ತಾರೆ. ಕೆಲವೊಮ್ಮೆ ಸಂಖ್ಯೆ ಹೆಚ್ಚು ಇರಬಹುದು, ಕಡಿಮೆ ಇರಬಹುದು. ಆಗ ಪರಿಸ್ಥಿತಿ, ವಾತಾವರಣ ಏನಿದೆ? ಯಾವ ತೀರ್ಮಾನ ಮಾಡಿದರೆ ಪಕ್ಷಕ್ಕೆ ಒಳ್ಳೆಯದು ಎಂದು ತಿಳಿದುಕೊಂಡು ಹೈಕಮಾಂಡ್ ಬುದ್ದಿವಂತಿಕೆಯಿಂದ ಅಂತಿಮ ತೀರ್ಮಾನ ಮಾಡಲಿದೆ ಎಂದರು.
ನಕಾರಾತ್ಮಕತೆ ತುಂಬುವ ಆರ್‌ಎಸ್‌ಎಸ್: ನಾಡಿನ ಮಕ್ಕಳು ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬ ಹೆಸರಿನ ಸಂಘಟನೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ, ಮಕ್ಕಳು ಮತ್ತು ಯುವ ಸಮುದಾಯದ ಮನಸ್ಸಿನಲ್ಲಿ ಭಾರತದ ಐಕ್ಯತೆ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬುವ ಕೆಲಸ ಮಾಡಲಾಗುತ್ತಿದೆ. ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ.
ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜನಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುದಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನ ನಮಗೆ ಅಧಿಕಾರ ನೀಡುತ್ತದೆ. ಹಾಗಾಗಿ ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.