
ತುಮಕೂರು (ಏ.02): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಳ ಫ್ರೀಯಾಗಿದ್ದಾರೆ. ಅವರು ಏನೇ ಆರೋಪ ಮಾಡಲಿ, ದಾಳಿ ಮಾಡಲಿ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು. ನಮ್ಮ ಪಕ್ಷದ ಎಲ್ಲ ನಾಯಕರು, ವಿರೋಧ ಪಕ್ಷದ ನಾಯಕರು ಎಲ್ಲರೂ ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದರು. ರಾಜ್ಯದ ಜನರಿಗೆ ಬೆಲೆ ಏರಿಕೆಯ ಹೊರೆ ಹಾಕುವ ಮೂಲಕ ಬರೆ ಎಳೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಎರಡು ಹಂತದಲ್ಲಿ ದೊಡ್ಡಮಟ್ಟದ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿದೆ. ಏ.2 ರಂದು ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಹಾಗೂ ಏ. 7 ರಂದು ಮೈಸೂರಿನಿಂದ ಜನಾಕ್ರೋಶ ಯಾತ್ರೆ ಕೈಗೊಳ್ಳುತ್ತಿರುವುದಾಗಿ ಹೇಳಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಕಳೆದ 20 ತಿಂಗಳಲ್ಲಿ ಬೆಲೆ ಏರಿಕೆ ಭಾಗ್ಯವನ್ನು ನಿರಂತರವಾಗಿ ದಯಪಾಲಿಸಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗಿದ್ದು, ಕುಟುಂಬಗಳನ್ನು ನಿರ್ವಹಿಸಲು ಪರದಾಡುವಂತಾಗಿದೆ. ಈಗಾಗಲೇ ಹಾಲಿನ ದರ, ಪೆಟ್ರೋಲ್-ಡೀಸೆಲ್ ದರ, ಸ್ಟಾಂಪ್ ಡ್ಯೂಟಿ, ನೀರಿನ ದರ, ವಿದ್ಯುತ್ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದ್ದಾರೆ. ಇದರ ವಿರುದ್ದ ಏ. 2 ರಂದು ಮೊದಲನೇ ಹಂತದ ಹೋರಾಟವನ್ನು ಕೈಗೆತ್ತಿಕೊಳ್ಳುತ್ತಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಈ ಹೋರಾಟದಲ್ಲಿ ಪಕ್ಷದ ಎಲ್ಲ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಸೇರಿದಂತೆ ಮುಖಂಡರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದರು.
ಮುಸ್ಲಿಂ ಶೇ. 4 ಮಿಸಲಾತಿ ಸಂವಿಧಾನ ವಿರೋಧಿ: ಮುಸಲ್ಮಾನರಿಗೆ ಶೇ. 4 ರಷ್ಟು ಸರ್ಕಾರಿ ಕಾಮಗಾರಿಯಲ್ಲಿ ಮೀಸಲಾತಿ ನೀಡಿರುವುದು ಸಂಪೂರ್ಣ ಸಂವಿಧಾನ ವಿರೋಧಿ ನಡೆಯಾಗಿದೆ. ಪರಿಶಿಷ್ಟ ಜಾತಿ, ಪಂಗಡಗಳ ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಸುಮಾರು 38 ಕೋಟಿ ರು.ಗಳನ್ನು ಬೇರೆ ಬೇರೆ ಕಾರ್ಯಗಳಿಗೆ ವರ್ಗಾವಣೆ ಮಾಡುವ ಶೋಷಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ವಿಜಯೇಂದ್ರ ಹರಿಹಾಯ್ದರು.
ಶಾಸಕ ಯತ್ನಾಳ್ ಉಚ್ಚಾಟನೆ ಹಿಂದೆ ನಾವಿಲ್ಲ: ಬಿ.ವೈ.ವಿಜಯೇಂದ್ರ ಸ್ಪಷ್ಟನೆ
7ಕ್ಕೆ ಮೈಸೂರಿನಿಂದ ಜನಾಕ್ರೋಶ ಯಾತ್ರೆ: ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಜನತೆಗೆ ತಿಳಿಸಲು ಹಾಗೂ ಮುಸ್ಲಿಂರಿಗೆ ಶೇ. 4 ರಷ್ಟು ಮೀಸಲಾತಿಯನ್ನು ಸರ್ಕಾರಿ ಕಾಮಗಾರಿಯಲ್ಲಿ ನೀಡಿರುವುದನ್ನು ವಿರೋಧಿಸಿ ಏ. 7 ರಂದು ಮೈಸೂರಿನಿಂದ ಜನಾಕ್ರೋಶ ಯಾತ್ರೆಯನ್ನು ಕೈಗೊಳ್ಳಲಾಗುವುದು. ಅಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಈ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.