
ಮಂಡ್ಯ (ಸೆ.02): ಕಾಂಗ್ರೆಸ್ ಸರ್ಕಾರ ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾ ಕೇಸ್‌ನಲ್ಲಿ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಕ್ಕೆ ಪ್ರತಿಯಾಗಿ ಕೋವಿಡ್ ವೇಳೆ ಬಿಜೆಪಿ ಭಾರೀ ಭ್ರಷ್ಟಾಚಾರ ನಡೆಸಿದೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿಗಳು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ರಾಜ್ಯಪಾಲರು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತಿದ್ದಾರೆ ಎನ್ನುವುದು ಹಳೇ ಟ್ಯಾಕ್ಟಿಸ್. ಇದೆಲ್ಲವನ್ನು ಈ ರಾಜ್ಯದ ಜನ ಬಹಳ ನೋಡಿದ್ದಾರೆ ಎಂದರು. ರಾಜ್ಯಪಾಲರು ಅನುಮತಿ ಕೊಟ್ಟಿರುವುದು ಕೇವಲ ತನಿಖೆ ನಡೆಸಿ ಎಂದಷ್ಟೆ. ಆದರೆ, ಕಾಂಗ್ರೆಸ್ಸಿನ ಮಿತ್ರರು ಯಾಕೆ ಅಷ್ಟೊಂದು ಆತಂಕಗೊಂಡಿದ್ದಾರೋ ತಿಳಿಯದು. ಈಗ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅಂತಿಮ ಘಟ್ಟಕ್ಕೆ ಬಂದಿದೆ. ಕಾದು ನೋಡೋಣ ಎಂದರು.
ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ವಿಚಾರದಲ್ಲಿ ರಾಜ್ಯಪಾಲರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ಸಿಗರು ಪ್ರಶ್ನಿಸುತ್ತಿದ್ದಾರೆ. ಅದಕ್ಕೆ ರಾಜ್ಯಪಾಲರು ನಮ್ಮ ಕಚೇರಿಯಲ್ಲಿ ಯಾವ ಕಡತವೂ ಬಾಕಿ ಉಳಿದಿಲ್ಲ ಎಂದು ತಕ್ಕ ಉತ್ತರ ಕೊಟ್ಟಿದ್ದಾರೆ. ಅದೇನೆ ಇರಲಿ, ಅದಕ್ಕೂ ಇದಕ್ಕೂ ಥಳಕು ಹಾಕುವುದು ಸರಿಯಲ್ಲ ಎಂದರು. ಪ್ರಸ್ತುತ ರಾಜ್ಯದ ಮುಖ್ಯಸ್ಥನ ಮೇಲೆ ಆರೋಪವಿರುವುದರಿಂದ ಮುಕ್ತ ಮತ್ತು ಪಾರದರ್ಶಕವಾಗಿ ತನಿಖೆ ನಡೆಯಬೇಕು. ಆ ಬಳಿಕ ನ್ಯಾಯಾಲಯದ ನಿರ್ಧಾರದ ಮೇಲೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೋ ಬೇಡವೋ ಎಂಬುದು ನಿರ್ಧಾರವಾಗುತ್ತದೆ ಎಂದರು.
ಬಿಜೆಪಿಯವರು ಪಶ್ಚಾತಾಪ ಪಡುವ ಸ್ಥಿತಿ ಬರಲಿದೆ, ಸಿದ್ದರಾಮಯ್ಯಗೆ ನ್ಯಾಯ ಸಿಕ್ಕೇ ಸಿಗುತ್ತದೆ: ಸಚಿವ ಎಂ.ಬಿ.ಪಾಟೀಲ್
ಕೋವಿಡ್‌ಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ತರಿಸಿಕೊಂಡಿದ್ದಾರೆ. ಅದರಲ್ಲಿ ಏನಿದೆ ಎಂಬುದು ನಮಗೆ ತಿಳಿದಿಲ್ಲ. ತಿಳಿದ ಬಳಿಕ ಪಕ್ಷ ಸೂಕ್ತ ಉತ್ತರ ನೀಡಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಸಿ.ಪಿ.ಯೋಗೇಶ್ವರ್ ಕಣಕ್ಕೆ ಇಳಿಯುವ ಸಂಬಂಧ ಮೈತ್ರಿ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ. ನಟ ದರ್ಶನ್ ವಿಚಾರವಾಗಿ ಮಾತನಾಡುವುದಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.