
ಬೆಂಗಳೂರು (ಅ.31): ಬೆಳಗಾವಿ ಅಧಿವೇಶನ ಆರಂಭವಾಗುವ ಮುನ್ನವೇ ಒಳಮೀಸಲಾತಿ ಕುರಿತ ಪ್ರಕರಣಗಳು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ನಲ್ಲಿ ದಾಖಲಾಗಿ ಒಳಮೀಸಲಾತಿ ಕುರಿತ ಆದೇಶ ರದ್ದಾಗಬೇಕೆಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರುದ್ದೇಶವಾಗಿದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. 101 ಜಾತಿಗಳಿಗೆ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಸಿಗಬೇಕೆಂದು ಮೂರು ದಶಕದಿಂದ ನಿರಂತರ ಹೋರಾಟ ಮಾಡಲಾಗಿತ್ತು.
ಪ್ರಧಾನಿ ಮೋದಿ ಸರ್ಕಾರ ಮುತುವರ್ಜಿ ವಹಿಸಿ ನ್ಯಾಯ ದೊರಕಿಸಿಕೊಟ್ಟು ಒಂದು ವರ್ಷವಾದರೂ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಾ ಗೊಂದಲ ಸೃಷ್ಟಿಸುತ್ತಿದೆ ಎಂದು ಟೀಕಿಸಿದರು. ಒಂದು ಜಾತಿಯ ಹಿತಕ್ಕಾಗಿ ಸಿದ್ದರಾಮಯ್ಯ ಈ ರೀತಿ ಆಟ ಆಡುತ್ತಿದ್ದಾರೆ. 101 ಜಾತಿಯ ಹಿತ ಕಾಯಲು ಅವರು ಬಯಸುತ್ತಿಲ್ಲ. ಆರ್ಥಿಕ ಸಂಕಷ್ಟ ಇರುವುದರಿಂದ ನೇಮಕಾತಿ ಮುಂದೂಡಿಕೆಯಾದಷ್ಟೂ ಒಳ್ಳೆಯದೆಂಬ ಭಾವನೆ ಅವರಿಗಿದೆ. ಖಜಾನೆ ಖಾಲಿ ಆಗಿದ್ದು, ನೇಮಕಾತಿ ಮಾಡಲೂ ಅವರು ತಯಾರಿಲ್ಲ ಎಂದು ದೂರಿದರು. ರಾಜ್ಯ ವಕ್ತಾರ ಎಚ್.ವೆಂಕಟೇಶ್ ದೊಡ್ಡೇರಿ, ಎಸ್.ಸಿ.ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ, ನಿವೃತ್ತ ಐಎಎಸ್ ಅಧಿಕಾರಿಗಳಾದ ಅನಿಲ್ ಕುಮಾರ್, ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.
ಒಳ ಮೀಸಲಾತಿ ವಿಚಾರದಲ್ಲಿ ಗೊಂದಲಗಳಿವೆ. ಸಂವಿಧಾನಬದ್ಧವಾಗಿ ಯೋಚಿಸದೆ ರಾಜ್ಯ ಸರ್ಕಾರ ರಾಜಕೀಯ ತೀರ್ಮಾನ ತೆಗೆದುಕೊಂಡಿದೆ. ಅಲೆಮಾರಿ ಸಮುದಾಯವು ಪ್ರತ್ಯೇಕ ಮೀಸಲಾತಿ ಕೇಳುತ್ತಿದೆ. ಪ್ಯಾಕೇಜ್ ಕೇಳುತ್ತಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ಒಳ ಮೀಸಲಿಗೆ ಸಂಬಂಧಿಸಿ ಒಂದು ಸಮುದಾಯ ಹೈಕೋರ್ಟ್ ಮೆಟ್ಟಿಲೇರಿದೆ. ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ಒಬ್ಬರೂ ಹಾಜರಾಗಿಲ್ಲ. ನಮ್ಮ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಸಾಮಾಜಿಕ ನ್ಯಾಯ ಕೊಡದಿದ್ದರೆ ಮುಂದಿನ ದಿನಗಳಲ್ಲಿ ಮಾದಿಗರು ಉಗ್ರ ಹೋರಾಟಕ್ಕೆ ಮುಂದಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.