
ಬೆಂಗಳೂರು (ಜ.26): ನನಗೆ ನೀಡಿರುವ ಪೌರಾಡಳಿತ ಮತ್ತು ಸಕ್ಕರೆ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಸರ್ಕಾರ ಹಾಗೂ ಪಕ್ಷಕ್ಕೆ ಒಳ್ಳೆಯ ಹೆಸರು ತರುವುದಾಗಿ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಸತಿ ಇಲಾಖೆ ಖಾತೆ ಕೇಳಿದ್ದು ನಿಜ. ಆದರೆ ಕಾರಣಾಂತರಗಳಿಂದ ಮುಖ್ಯಮಂತ್ರಿಗಳಿಗೆ ಕೊಡಲು ಆಗಲಿಲ್ಲ. ಈಗ ಪೌರಾಡಳಿತ ಮತ್ತು ಸಕ್ಕರೆ ಖಾತೆ ಕೊಟ್ಟಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.
ಅಬಕಾರಿ ಖಾತೆ, ಎಂಟಿಬಿ ಕ್ಯಾತೆ, ಅಸಮಾಧಾನಕ್ಕೆ ಸಿಎಂ ಹೊಸ ಸೂತ್ರ ಹೆಣೆಯುತ್ತಾರಾ..? ..
ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ನಾನು ಹೊಸಕೋಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತೇನೆ, ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಹಾಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕೊಟ್ಟರೆ ನಿಭಾಯಿಸುತ್ತೇನೆ. ಆದರೆ ಉಸ್ತುವಾರಿ ಕೊಡಲೇಬೇಕೆಂದು ಬೇಡಿಕೆ ಇಟ್ಟಿಲ್ಲ. ಮುಂದೆ ಈ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲ ಸರಿಯಾಗಲಿದೆ: ಹಿರಿಯ ಮುಖಂಡರಾದ ಎಚ್. ವಿಶ್ವನಾಥ್ ಅವರಿಗೆ ಸದ್ಯ ಸ್ವಲ್ಪ ಬೇಸರ ಇದೆ. ಅವರಿಗೆ ಏಕೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಎಲ್ಲರಿಗೂ ಗೊತ್ತು. ಅವರು ಏಕಾಂಗಿಯಲ್ಲ. ನಾವೆಲ್ಲ ಅವರ ಜೊತೆ ಇದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ಮುಖ್ಯಮಂತ್ರಿಗಳು ಎಲ್ಲವನ್ನೂ ಸರಿಪಡಿಸುತ್ತಾರೆ ಎಂಬ ವಿಶ್ವಾಸ ತಮಗಿದೆ. ಖಾತೆ ಹಂಚಿಕೆ ವಿಷಯದಲ್ಲಿ ಮಿತ್ರ ಮಂಡಳಿಯಲ್ಲಿ ಯಾವುದೇ ಬಿರುಕು ಇಲ್ಲ. ಅಸಮಾಧಾನವೂ ಇಲ್ಲ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.