ಕಾಂಗ್ರೆಸ್ ವೋಟ್ ಬ್ಯಾಂಕ್‌ಗೋಸ್ಕರ ಮಾತ್ರ ಮುಸ್ಲಿಮರನ್ನು ಓಲೈಕೆ ಮಾಡುತ್ತಿದೆ. ಮುಸ್ಲಿಮರು ದೇಶದ ಮುಖ್ಯವಾಹಿನಿಯಲ್ಲೇ ಇರಬೇಕು. ಕಾಂಗ್ರೆಸ್ಸಿನ ಯಾವುದೇ ಷಡ್ಯಂತ್ರಕ್ಕೆ ಬಲಿಯಾಗಬಾರದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಭಟ್ಕಳ (ಜು.10): ಕಾಂಗ್ರೆಸ್ ವೋಟ್ ಬ್ಯಾಂಕ್‌ಗೋಸ್ಕರ ಮಾತ್ರ ಮುಸ್ಲಿಮರನ್ನು ಓಲೈಕೆ ಮಾಡುತ್ತಿದೆ. ಮುಸ್ಲಿಮರು ದೇಶದ ಮುಖ್ಯವಾಹಿನಿಯಲ್ಲೇ ಇರಬೇಕು. ಕಾಂಗ್ರೆಸ್ಸಿನ ಯಾವುದೇ ಷಡ್ಯಂತ್ರಕ್ಕೆ ಬಲಿಯಾಗಬಾರದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಪಟ್ಟಣದ ಆಸರಕೇರಿ ತಿರುಮಲ ವೆಂಕಟ್ರಮಣ ಸಭಾಭವನದಲ್ಲಿ ಬಿಜೆಪಿ ಮಂಡಲದ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಮುಸ್ಲಿಮರು ಬಿಜೆಪಿ ವಿರುದ್ಧದ ಮತ ಚಲಾಯಿಸುವ ಮಾನಸಿಕತೆ ಬದಲಾಯಿಸಿಕೊಳ್ಳಬೇಕು. ಒಂದೇ ಕಡೆ ಮತ ಚಲಾಯಿಸುವ ಮನಸ್ಥಿತಿ ಎಂದಿಗೂ ಒಳ್ಳೆಯದಲ್ಲ ಎಂದರು.
ಅಲ್ಪಸಂಖ್ಯಾತರು ಸರಿ ತಪ್ಪಿನ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನ ಷಡ್ಯಂತ್ರಕ್ಕೆ ಒಳಗಾಗಬಾರದು. ಒಂದೇ ಕಡೆ ಮತ ಚಲಾಯಿಸುವ ಮನಸ್ಥಿತಿಯಿಂದ ಮುಂದೆ ಅಪಾಯ ಆಗುವ ಸಾಧ್ಯತೆ ಇದ್ದು, ಈಗಿಂದಲೇ ಸರಿಪಡಿಸಿಕೊಳ್ಳಬೇಕು ಎಂದ ಅವರು, ಕ್ಷೇತ್ರದ ಜನರು ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಲು ನನಗೆ ದಾಖಲೆ ಮತ ನೀಡಿ ಆಯ್ಕೆ ಮಾಡಿದ್ದಾರೆ. ಭಟ್ಕಳದ ಕ್ಷೇತ್ರದಲ್ಲೂ ನನಗೆ ಮುಖಂಡರು, ಕಾರ್ಯಕರ್ತರ ಪರಿಶ್ರಮದಿಂದ ಹೆಚ್ಚಿನ ಮತಗಳು ಲಭಿಸಿವೆ ಎಂದರು.
ಜಿಲ್ಲೆಯಲ್ಲಿ ಅತಿಕ್ರಮಣ ಸಕ್ರಮ, ಹೆದ್ದಾರಿ, ಮೀನುಗಾರಿಕೆ, ರೈಲ್ವೆ, ಪ್ರವಾಸೋದ್ಯಮ, ನಿರುದ್ಯೋಗ ಹೀಗೆ ನಾನಾ ರೀತಿಯ ಸಮಸ್ಯೆಗಳಿದ್ದು, ಇದನ್ನು ಹಂತ- ಹಂತವಾಗಿ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಭಟ್ಕಳ ಕ್ಷೇತ್ರದಲ್ಲಿ ಮಾಜಿ ಶಾಸಕ ಸುನೀಲ್ ನಾಯ್ಕ ತಂದ ಅಭಿವೃದ್ಧಿ ಕಾಮಗಾರಿಗಳನ್ನೇ ಸಚಿವ ಮಂಕಾಳು ವೈದ್ಯ ಮುಂದುವರಿಸಿದ್ದಾರೆ. ಇದನ್ನು ಬಿಟ್ಟು ಸಚಿವರು ಅವರ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾಮಗಾರಿ ತಂದಿಲ್ಲ ಎಂದರು.
ಬೆಂಗಳೂರು ದಕ್ಷಿಣ ಜಿಲ್ಲೆಯಾದರೆ ಅಭಿವೃದ್ಧಿಗೆ ವೇಗ: ಎಚ್‌ಡಿಕೆ ವಿರುದ್ಧ ಶಾಸಕ ಇಕ್ಬಾಲ್ ವಾಗ್ದಾಳಿ
ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ಬಿಜೆಪಿ ಸಂಚಾಲಕ ಗೋವಿಂದ ನಾಯ್ಕ, ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ, ಡಾ. ಜಿ.ಜಿ. ಹೆಗಡೆ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತರಾಮ ಭಟ್ಕಳ, ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಈಶ್ವರ ಎನ್. ನಾಯ್ಕ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸುಬ್ರಾಯ ದೇವಡಿಗ, ಜೆಡಿಎಸ್ ತಾಲೂಕು ಅಧ್ಯಕ್ಷ ಈಶ್ವರ ನಾಯ್ಕ ಮಾತನಾಡಿದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಹೇಮಂತ ಗಾಂವಕರ್ ಮುಂತಾದವರಿದ್ದರು. ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಧನ್ಯಕುಮಾರ ಜೈನ್ ನಿರೂಪಿಸಿದರು. ಬಿಜೆಪಿ ಮಂಡಲ ಸೇರಿದಂತೆ ವಿವಿಧ ಮೋರ್ಚಾ, ಸಂಘ- ಸಂಸ್ಥೆಗಳಿಂದ ಸಂಸದ ಕಾಗೇರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.