ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೈಲಿಗೆ ಹೋಗುವುದು ಖಚಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಲಿಂಗಸುಗೂರು (ಫೆ.26): ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೈಲಿಗೆ ಹೋಗುವುದು ಖಚಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಪಟ್ಟಣದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಹಗರಣದ ಉರುಳಿ ನಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಲೋಕಾಯುಕ್ತ ಮುಚ್ಚಿಸಿ, ಹಲ್ಲಿಲ್ಲದ ಎಸಿಬಿ ಹುಟ್ಟು ಹಾಕಿದರು.
ಹಗರಣದ ಕುರಿತು ಕೆಂಪಣ್ಣ ನೀಡಿದ್ದ ವರದಿ ಮುಚ್ಚಿಟ್ಟರು. ಈಗ ಅರ್ಕಾವತಿ ಕುರಿತು ಕೆಂಪಣ್ಣ ಅವರ ವರದಿ ಲೋಕಾಯುಕ್ತಕ್ಕೆ ನೀಡಿ, ತನಿಖೆ ನಡೆಸಿ ತಪ್ಪಿತಸ್ತರನ್ನು ಜೈಲಿಗೆ ಹಾಕುತ್ತೇವೆ ಎಂದು ಗುಡುಗಿದರು. ಅಲ್ಲದೇ ಸಿ.ಟಿ.ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ. ಸಿದ್ದರಾಮಯ್ಯ ಮಾಂಸ ತಿಂದು ಧರ್ಮಸ್ಥಳಕ್ಕೆ ಹೋಗಿದ್ದರು. ಇಬ್ಬರ ಪ್ರಕರಣದಲ್ಲಿ ಭಾರಿ ವ್ಯತ್ಯಾಸಗಳಿವೆ ಎಂದರು.
ಶಿವಾಜಿ ಪ್ರತಿಮೆಗೆ ಅಡ್ಡಿಪಡಿಸಿಲ್ಲ, ಕೀಳು ರಾಜಕೀಯ ಮಾಡಲ್ಲ: ರಮೇಶ್ ಜಾರಕಿಹೊಳಿ
ಬಿಜೆಪಿ ಸಾಧನೆಗಳೇ ಗೆಲುವಿಗೆ ಪೂರಕ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳೇ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪೂರಕವಾಗುತ್ತವೆ ಎಂದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ ಕುಮಾರ ಕಟೀಲ್ ಹೇಳಿದರು. ಶನಿವಾರ ಸಕ್ರ್ಯೂಟ್‌ಹೌಸ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಪರ ಅಲೆ ಇದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳಿಗೆ ಜನಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಡಬಲ್ ಎಂಜಿನ್ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಬೊಮ್ಮಾಯಿ ಸರ್ಕಾರದ ಸಾಧನೆಗಳು ಹಾಗೂ ಎಲ್ಲ ವರ್ಗದ ಆಶೋತ್ತರಗಳನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿರುವ ಬಜೆಟ್ ಬಿಜೆಪಿಯ ಗೆಲುವಿಗೆ ಪೂರಕವಾಗಲಿದೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿ 150 ಗೆಲ್ಲುವುದು ಖಚಿತ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿಂಧನೂರಿನಲ್ಲಿ ಗೆಲ್ಲುವ ಅಭ್ಯರ್ಥಿಗೆ ಟೀಕೆಟ್ ನೀಡಲಾಗುವುದು. ಈ ಬಾರಿ ಸಿಂಧನೂರಿನಲ್ಲಿ ಬಿಜೆಪಿ ಬಾವುಟ ಹಾರಲಿದೆ. ಪಕ್ಷದ ತತ್ವ-ಸಿದ್ಧಾಂತಗಳನ್ನು ಒಪ್ಪಿ ಯಾರೇ ಬಂದರು ಸ್ವಾಗತ ಮಾಡಿಕೊಳ್ಳಲಾಗುವುದು. ಸಿಂಧನೂರು ತಾಲೂಕಿನಲ್ಲಿ ಕಾಂಗ್ರೆಸ್‌ನ ಅನೇಕ ಹಿರಿಯ ಮುಖಂಡರು ಬಿಜೆಪಿಗೆ ಬರುತ್ತಾರೆ ಎಂದು ಕಟೀಲ್ ಉತ್ತರಿಸಿದರು. ಈ ವೇಳೆ ಪಕ್ಷದ ಮುಖಂಡರು ಇದ್ದರು.
ಸಿದ್ದರಾಮಯ್ಯ, ಡಿಕೆಶಿಗೆ ಸಿಎಂ ಹಗಲುಗನಸು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ತಾವು ಮುಖ್ಯಮಂತ್ರಿಗಳಾಗುತ್ತೇವೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ ಕಟೀಲ್ ಟೀಕಿಸಿದರು. ಇಲ್ಲಿಗೆ ಸಮೀಪದ ಹೊಸಳ್ಳಿ ಇ.ಜೆ.ಕ್ಯಾಂಪ್ ಬಳಿ ಇರುವ ಯಲಿಮಂಜಾಲಿ ವಾಸುದೇವರಾವು ಕಲ್ಯಾಣ ಮಂಟಪದಲ್ಲಿ ಶನಿವಾರ ಪುರಸಭೆ ಮಾಜಿ ಅಧ್ಯಕ್ಷ ಕೆ.ಮರಿಯಪ್ಪನವರು ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಿಎಂ ಹುದ್ದೆ ಆಕಾಂಕ್ಷಿ ಪರಂಗೆ ಈ ಬಾರಿ ಅದೃಷ್ಟ ಒಲಿಯುತ್ತಾ?: ಠಕ್ಕರ್ ನೀಡಲು ಜೆಡಿಎಸ್, ಕಾಂಗ್ರೆಸ್ ತಂತ್ರ
ಕಾಂಗ್ರೆಸ್‌ನಲ್ಲಿ ಮೂಲ ಹಾಗೂ ವಲಸಿಗರು ಎಂಬ ಎರಡು ಗುಂಪುಗಳಿವೆ. ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗೆ ತಳ್ಳಿ, ವಲಸಿಗರೇ ಕಾರುಬಾರು ಮಾಡುತ್ತಿದ್ದಾರೆ. ಮೂಲ ಕಾಂಗ್ರೆಸ್ಸಿಗರಲ್ಲಿ ಒಬ್ಬರಾಗಿದ್ದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರನ್ನು ಪಕ್ಷ ಸರಿಯಾಗಿ ನಡೆಸಿಕೊಳ್ಳದೆ ಅಪಮಾನ ಮಾಡಿದೆ. ಇದರಿಂದ ಅವರು ತುಂಬಾ ನೊಂದಿದ್ದರು. ಅವರು ಬಿಜೆಪಿಗೆ ಸೇರ್ಪಡೆಯಾದ ನಂತರ ಲವಲವಿಕೆಯಿಂದ ಸಂಘಟನೆಗೆ ಮುಂದಾಗಿದ್ದಾರೆ ಎಂದು ಹೇಳಿದರು. ಮಹಾತ್ಮಗಾಂಧೀಜಿ ಕಾಂಗ್ರೆಸ್‌ನಿಂದ ದೇಶ ಸುಭಿಕ್ಷಗೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಕಾಂಗ್ರೆಸ್‌ನ್ನು ವಿಸರ್ಜನೆ ಮಾಡಿ ರಾಮರಾಜ್ಯದ ಕನಸು ಕಂಡಿದ್ದರು. ಆದರೆ, ಆ ಕನಸು ಹಾಗೆಯೆ ಉಳಿಯಿತು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗಾಂಧೀಜಿಯವರ ಕನಸನ್ನು ನನಸು ಮಾಡಿದ್ದಾರೆ ಎಂದು ಶ್ಲಾಘಿಸಿದರು.