ಯತ್ನಾಳ್‌ಗೆ ರಾಷ್ಟ್ರೀಯ ನಾಯಕರು ಉತ್ತರಿಸ್ತಾರೆ: ವಿಜಯೇಂದ್ರ

By Kannadaprabha News  |  First Published Dec 5, 2023, 8:00 AM IST

ನನ್ನ ಆಯ್ಕೆ ಮತ್ತು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವವರಿಗೆ ನಾನೇನೂ ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾಜಿ ಮತ್ತು ಇತರೆ ನಾಯಕರು ಇದಕ್ಕೆ ಉತ್ತರ ಕೊಡುತ್ತಾರೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ


ಸುವರ್ಣಸೌಧ(ಡಿ.05):  ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಆಯ್ಕೆ ಹಾಗೂ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವವರಿಗೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಉತ್ತರ ಕೊಡುತ್ತಾರೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಸುವರ್ಣಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕರ ಬದಲಾವಣೆಯಾಗಲಿದೆ. ಕುಟುಂಬ ರಾಜಕಾರಣ ಕರ್ನಾಟಕದಲ್ಲೂ ಕೊನೆಯಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ, ಬಹಳ ಸಂತೋಷ, ನನ್ನ ಆಯ್ಕೆ ಮತ್ತು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವವರಿಗೆ ನಾನೇನೂ ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾಜಿ ಮತ್ತು ಇತರೆ ನಾಯಕರು ಇದಕ್ಕೆ ಉತ್ತರ ಕೊಡುತ್ತಾರೆ ಎಂದರು.

Tap to resize

Latest Videos

ಲೋಕಸಭೆ ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲು: ಯತ್ನಾಳ್‌ ಬಾಂಬ್‌

ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿಪಡಿಸುವವರೆಗೂ ಶಾಸಕಾಂಗ ಪಕ್ಷದ ಸಭೆಗೂ ಬರುವುದಿಲ್ಲ ಎಂದು ಯತ್ನಾಳ್‌ ಹೇಳಿದ್ದಾರೆ ಎಂಬ ಪ್ರಶ್ನೆಗೆ, ಆ ವಿಚಾರ ಬಿಟ್ಟು ಬೇರೆ ಏನಾದರೂ ಹೇಳಿ. ಅಧಿವೇಶನದ ಬಗ್ಗೆ ಮಾತನಾಡುತ್ತೇನೆ ಕೇಳಿ. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಣ್ಣ ಪುಟ್ಟ ಕೆಲ ಮನಸ್ತಾಪಗಳಿದ್ದರೆ ಮಾತುಕತೆ ಮೂಲಕ ಬಗೆಹರಿಸಿಕೊಂಡು ಮುನ್ನಡೆಯಲಾಗುವುದು ಎಂದರು.

ಪಂಚರಾಜ್ಯ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ:

ಪಂಚರಾಜ್ಯ ಚುನಾವಣಾ ಫಲಿತಾಂಶ ಮುಂಬರುವ 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸಂಸತ್‌ ಸ್ಥಾನಗಳನ್ನೂ ಗೆಲ್ಲುವ ಮೂಲಕ ಕಾಂಗ್ರೆಸ್ಸನ್ನು ಧೂಳೀಪಟ ಮಾಡುತ್ತೇವೆ ಎಂದು ಇದೇ ವೇಳೆ ವಿಜಯೇಂದ್ರ ಹೇಳಿದರು.

click me!