
ಬೆಂಗಳೂರು (ಸೆ.25): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ದೆಹಲಿಯಲ್ಲಿ ಎರಡೂ ಪಕ್ಷದ ಉನ್ನತ ನಾಯಕರು ಮಾತುಕತೆ ನಡೆಸಿದ ಬೆನ್ನಲ್ಲೇ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಭಾನುವಾರ ತೆರಳಿದ ನಿಖಿಲ್ ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ, ಹಾರ ಹಾಕಿ, ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕನಾಗಿ, ಕಾರ್ಯಕರ್ತನಾಗಿ ಯಡಿಯೂರಪ್ಪ ಅವರ ಆಶೀರ್ವಾದ ಪಡೆಯಲು ಆಗಮಿಸಿದ್ದೇನೆ. ಇದೊಂದು ಸೌಹಾರ್ದಯುತ ಭೇಟಿಯಾಗಿದೆ. ಯಾವುದೇ ರಾಜಕೀಯ ವಿಷಯ ಮಾತನಾಡಿಲ್ಲ. ಯಡಿಯೂರಪ್ಪ ಅವರು ರಾಜ್ಯಕ್ಕೆ ಅಪಾರ ಕಾರ್ಯಕ್ರಮಗಳನ್ನು ನೀಡಿದ್ದು ರಾಜ್ಯಾದ್ಯಂತ ಮನೆಮಾತಾಗಿದ್ದಾರೆ. ಹಿರಿಯರ ಆಶೀರ್ವಾದ ಪಡೆಯುವುದು ನಮ್ಮ ಸಂಸ್ಕೃತಿ ಎಂದು ಸ್ಪಷ್ಟಪಡಿಸಿದರು.
ನಿವೃತ್ತಿಯ ಮಾತನಾಡಿಲ್ಲ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಈಗ ನಾನು ಮಾತನಾಡುವುದಿಲ್ಲ. ಮಾತನಾಡಲು ಇದು ಸೂಕ್ತ ಸಮಯವೂ ಅಲ್ಲ. ರಾಜಕೀಯದಿಂದ ಹಿಂದೆ ಸರಿಯುತ್ತೇನೆ ಎಂದು ನಾನು ಎಲ್ಲೂ ವೈಯಕ್ತಿಕವಾಗಿ ಹೇಳಿಕೆ ನೀಡಿಲ್ಲ. ನನಗೆ ನನ್ನದೇ ಆದ ಜವಾಬ್ದಾರಿ ಇದೆ. ಪಕ್ಷ ವಹಿಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.
ಕಾವೇರಿ ವಿಚಾರದಲ್ಲಿ ರಾಜ್ಯದ ಸಂಸದರಿಗೆ ಮೋದಿ ಬಳಿ ಹೋಗಲು ಧೈರ್ಯವಿಲ್ಲ: ಸಚಿವ ತಂಗಡಗಿ
ರಾಜ್ಯದ ಜನರ ಹಿತದೃಷ್ಟಿಯಿಂದಾಗಿ ಪಕ್ಷದ ವರಿಷ್ಠರಾದ ದೇವೇಗೌಡರು ಬಿಜೆಪಿ ಜೊತೆ ಮೈತ್ರಿಯ ತೀರ್ಮಾನ ಕೈಗೊಂಡಿದ್ದಾರೆ. ಬಿಜೆಪಿಯು ಪ್ರತಿಯೊಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪಕ್ಷವಾಗಿದೆ. ಲೋಕಸಭಾ ಚುನಾವಣಾ ಸೀಟು ಹಂಚಿಕೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಸಮಯ-ಸಂದರ್ಭ ನೋಡಿಕೊಂಡು ಮುಂದಿನ ದಿನಗಳಲ್ಲಿ ಹಿರಿಯರು ಚರ್ಚೆ ನಡೆಸಲಿದ್ದಾರೆ ಎಂದು ವಿವರಿಸಿದರು. ಬಿಜೆಪಿ ಶಾಸಕ ಮುನಿರತ್ನ ಮತ್ತಿತರರು ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.