* ಪರಿಷತ್ ಚುನಾವಣೆಯ ಟಿಕೆಟ್ ನಿರೀಕ್ಷೆ ಇಟ್ಟುಕೊಂಡಿರುವ ಇಬ್ರಾಹಿಂ
* ಪರೋಕ್ಷವಾಗಿ ಎಂಎಲ್ಸಿ ಟಿಕೆಟ್ ಇಲ್ಲ ಎಂದ ಮಾಜಿ ಸಿಎಂ
* ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಆಕಾಂಕ್ಷಿಗಳು
ಬೆಂಗಳೂರು(ಮೇ.19): ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸಿದೆ.
ಈಗಾಗಲೇ ಇಬ್ರಾಹಿಂ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದೇವೆ ಎನ್ನುವ ಮೂಲಕ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರಿಷತ್ ಚುನಾವಣೆಯ ಟಿಕೆಟ್ ಕೊಡುವುದಿಲ್ಲ ಎಂಬ ಸುಳಿವು ನೀಡಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಬ್ರಾಹಿಂ ಅವರೂ ಪರಿಷತ್ ಚುನಾವಣೆಯ ಟಿಕೆಟ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್ಸಿನಲ್ಲಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದಾರೆ. ಹೀಗಾಗಿ, ನಿರೀಕ್ಷೆ ಇಟ್ಟುಕೊಳ್ಳುವುದು ಸಹಜ. ಆದರೆ, ಈಗಾಗಲೇ ಅವರಿಗೆ ಅಧ್ಯಕ್ಷ ಸ್ಥಾನವನ್ನೇ ಕೊಟ್ಟಿದ್ದೇವೆ’ ಎಂದು ತಿಳಿಸಿದರು.
ಸಿಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ, ಗಳಗಳನೆ ಅತ್ತ ಕುಮಾರಸ್ವಾಮಿ
‘ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳು ಇದ್ದಾರೆ. ಯಾರಿಗೆ ಕೊಡಬೇಕು ಎನ್ನುವುದನ್ನು ಪಕ್ಷದ ನಾಯಕರ ಸಭೆ ನಡೆಸಿ ತೀರ್ಮಾನಿಸುತ್ತೇವೆ’ ಎಂದು ಹೇಳಿದರು.
ಒಟ್ಟು ಏಳು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಜೆಡಿಎಸ್‌ಗೆ ಒಂದು ಸ್ಥಾನ ಮಾತ್ರ ಲಭಿಸಲಿದೆ. ಈ ಒಂದು ಸ್ಥಾನವನ್ನು ತಮಗೇ ನೀಡಬೇಕು ಎಂಬ ಬೇಡಿಕೆಯನ್ನು ಇಬ್ರಾಹಿಂ ಅವರು ಪಕ್ಷದ ವರಿಷ್ಠರ ಮುಂದಿಟ್ಟಿದ್ದಾರೆ. ಈ ಸ್ಥಾನಕ್ಕಾಗಿ ಪಕ್ಷ ವಕ್ತಾರ ಟಿ.ಎ.ಶರವಣ, ರಾಜ್ಯಸಭೆಯ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ, ಪರಿಷತ್ತಿನ ನಿರ್ಗಮಿತ ಸದಸ್ಯ ರಮೇಶ್‌ಗೌಡ, ನಗರ ಘಟಕದ ಅಧ್ಯಕ್ಷ ಪ್ರಕಾಶ್ ಮತ್ತಿತರರು ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.