
ಬೆಂಗಳೂರು (ಜೂ.01): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗದ್ದಲ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾವಣೆಗೆ ಸ್ಥಳೀಯ ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಜಿಲ್ಲೆಯ ಅಧಿಕಾರಿಗಳು ದಿನೇಶ್ ಗುಂಡೂರಾವ್ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಮತ್ತು ಶನಿವಾರ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೈಗೊಂಡ ಕ್ರಮಗಳ ಕುರಿತು ಚರ್ಚಿಸುವ ವೇಳೆ, ದಿನೇಶ್ ಗುಂಡೂರಾವ್ ಅವರು ನಿಯಮಿತವಾಗಿ ಜಿಲ್ಲೆಗೆ ಭೇಟಿ ನೀಡಿ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ಅವರು ಮಂಗಳೂರಿಗೆ ಅತಿಹೆಚ್ಚು ಬಾರಿ ಭೇಟಿ ನೀಡಿದ್ದಾರೆ. ಕಳೆದೆರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆ ನಡೆಸಿದ್ದಾರೆ ಎಂಬ ಅಂಶಗಳು ಚರ್ಚೆಯಾದವು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಜನರ ಸಮಸ್ಯೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಜತೆಗೆ, ಅಧಿಕಾರಿಗಳು ಯಾವುದೇ ಒತ್ತಡವಿಲ್ಲದೆ ಕಾರ್ಯ ಮಾಡಲು ಅವಕಾಶ ನೀಡಿದ್ದಾರೆ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಿದ್ದಾರೆ.
ಕಳೆದೆರಡು ವರ್ಷಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಸೇವೆ ಮೇಲ್ದರ್ಜೆಗೇರಿಸಲು ಹಲವು ಕಾರ್ಯಕ್ರಮ ರೂಪಿಸಿ, ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣ, ಉದ್ಘಾಟನೆ, ವೆನ್ಲಾಕ್ ಆಸ್ಪತ್ರೆ ಅಭಿವೃದ್ಧಿ ಕಾಮಗಾರಿ ಅನುಷ್ಠಾನ, ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ, ನೂತನ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಮೇಲ್ದರ್ಜೆರಿಸುವ ಕಾಮಗಾರಿ, ನೇತ್ರಾವತಿ ನದಿಗೆ ಸೇತುವೆ ನಿರ್ಮಾಣ, ಭೂಕುಸಿತ ತಡೆಗೆ ಹಲವು ಮುಂಜಾಗ್ರತಾ ಕ್ರಮ ಕೈಗೊಂಡಿರುವುದು ಸೇರಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.
30ಕ್ಕೂ ಹೆಚ್ಚಿನ ಬಾರಿ ಜಿಲ್ಲೆಗೆ ಭೇಟಿ: ದಿನೇಶ್ ಗುಂಡೂರಾವ್ ಅವರು ಸರ್ಕಾರಿ ದಾಖಲೆಗಳ ಪ್ರಕಾರವೇ ಕಳೆದೆರಡು ವರ್ಷಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 30ಕ್ಕೂ ಹೆಚ್ಚಿನ ಬಾರಿ ಭೇಟಿ ನೀಡಿದ್ದಾರೆ. ಹೀಗೆ ಜಿಲ್ಲೆಗೆ ಭೇಟಿ ನೀಡಿದಾಗಲೆಲ್ಲ ಕೆಡಿಪಿ ಸಭೆ, ಕಾಮಗಾರಿಗಳ ಪ್ರಗತಿ ಪರಿಶೀಲನೆ, ಉದ್ಘಾಟನೆ, ರಾಜಕೀಯ ಸಮಾವೇಶ ಸೇರಿ ಇನ್ನಿತರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ಕೈಗೊಂಡಿರುವ ಕಾರ್ಯಗಳಿಗೆ ಸ್ಥಳೀಯರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಲ್ಲದೆ, ಕೋಮು ಗದ್ದಲ ಹೆಚ್ಚಿರುವ ಜಿಲ್ಲೆಯಲ್ಲಿ ಎಲ್ಲ ಸಮುದಾಯದವರನ್ನೂ ಒಟ್ಟಿಗೆ ಕರೆದುಕೊಂಡು ಹೋದ, ಸೂಕ್ಷ್ಮ ಪರಿಸ್ಥಿತಿಯಲ್ಲಿ ಜಿಲ್ಲೆಗೆ ಆಗಮಿಸಿ ಕೈಗೊಂಡ ನಿರ್ಧಾರಗಳ ಬಗ್ಗೆಯೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕಳೆದೆರಡು ವರ್ಷಗಳಿಂದ ಕೋಮು ಗದ್ದಲ ತೀವ್ರಮಟ್ಟಕ್ಕೆ ತಿರುಗದಂತೆ ನೋಡಿಕೊಳ್ಳುವಲ್ಲಿ ಜಿಲ್ಲಾ ಅಧಿಕಾರಿಗಳ ಜತೆಗೆ ದಿನೇಶ್ ಗುಂಡೂರಾವ್ ಶ್ರಮವೂ ಇದೆ. ಆದರೆ, ಕಳೆದೆರಡು ಕೊಲೆಗಳಿಂದಾಗಿ ಜಿಲ್ಲೆಯಲ್ಲಿನ ಚಿತ್ರಣ ಬದಲಾಗಿದೆ ಎಂದು ಹೇಳುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.