ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರದ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿತು. ಸೋಮವಾರ ಅಭ್ಯರ್ಥಿಗಳು ಮನೆ- ಮನೆ ಪ್ರಚಾರ ನಡೆಸಿ ಮತಯಾಚಿಸಲಿದ್ದಾರೆ.
ಬೆಂಗಳೂರು (ಮೇ.06): ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರದ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿತು. ಸೋಮವಾರ ಅಭ್ಯರ್ಥಿಗಳು ಮನೆ- ಮನೆ ಪ್ರಚಾರ ನಡೆಸಿ ಮತಯಾಚಿಸಲಿದ್ದಾರೆ. ಮಂಗಳವಾರ ಬೆಳಗ್ಗೆ 7 ಗಂಟೆ ಯಿಂದ 14 ಕ್ಷೇತ್ರದಲ್ಲಿ ಮತದಾನ ಆರಂಭವಾಗುವ ಹಿನ್ನೆಲೆಯಲ್ಲಿ ಭಾನುವಾರ ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಸೋಮ ವಾರ ಇಡೀ ದಿನ ಅಭ್ಯರ್ಥಿಗಳು ಮತ್ತು ಬೆಂಬಲಿಗರು ಮನೆ ಮನೆ ಪ್ರಚಾರ ನಡೆಸಲಿದ್ದಾರೆ. ಸ್ಪರ್ಧಾ ಕಣದಲ್ಲಿ 206 ಪುರುಷರು ಹಾಗೂ 21 ಮಹಿಳೆಯರು ಸೇರಿದಂತೆ ಒಟ್ಟು 227 ಮಂದಿ ಇದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಶಿವಾನಂದ್ ಪಾಟೀಲ್, ಈಶ್ವರ್ ಖಂಡ್ರೆ ಅವರ ಮಕ್ಕಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಅಭ್ಯರ್ಥಿಗಳನ್ನು ಹೊರತುಪಡಿಸಿ ಕ್ಷೇತ್ರಕ್ಕೆ ಸಂಬಂಧಪಡದ ವ್ಯಕ್ತಿಗಳು ಕ್ಷೇತ್ರದಲ್ಲಿ ಕಾಣಿಸಿಕೊಳ್ಳುವಂತಿಲ್ಲ. ಮತದಾನಕ್ಕೂ 48 ಗಂಟೆ ಮೊದಲು ಶೂನ್ಯ ಅವಧಿ ಪ್ರಾರಂಭವಾಗಿರುವ ಕಾರಣ ಯಾವುದೇ ರೀತಿಯ ಅಬ್ಬರದ ಪ್ರಚಾರ ಕೈಗೊಳ್ಳುವಂತಿಲ್ಲ.
ಪ್ರಜ್ವಲ್ ರೇವಣ್ಣ ಗೆದ್ದರೆ ಎನ್‌ಡಿಎಯಿಂದ ಕಾನೂನು ಕ್ರಮ: ಆರ್.ಅಶೋಕ್
ಮನೆ-ಮನೆ ಮತಯಾಚನೆ ವೇಳೆ ಐದು ಜನಕ್ಕಿಂತ ಹೆಚ್ಚು ಜನರು ಇರುವಂತಿಲ್ಲ. ಧ್ವನಿ ವರ್ಧಕ ಬಳಸದೆ ಮತಯಾಚನೆ ಮಾಡಬಹುದಾಗಿದೆ. ಯಾವುದೇ ರೀತಿಯ ಸಾರ್ವಜನಿಕ ಸಭೆ, ಕ್ಯಾಲಿಗಳನ್ನು ನಿರ್ಬಂಧಿಸಲಾಗಿದೆ. ಭಾನುವಾರ ಸಂಜೆ 6 ಗಂಟೆಯಿಂದಲೇ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮತದಾರರಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಕ್ಷೇತ್ರ ಬಿಟ್ಟು ತೆರಳಿದ್ದಾರೆ. ಅಕ್ರಮವಾಗಿ ತಂಗುವ ಸಾಧ್ಯತೆ ಇರುವ ಕಾರಣ ಚುನಾವಣಾ ಸಿಬ್ಬಂದಿ ಕಲ್ಯಾಣ ಮಂಟಪ, ಹೋಟೆಲ್, ಅತಿಥಿಗೃಹ, ವಸತಿಗೃಹ ಸೇರಿದಂತೆ ಇತರೆ ಪ್ರದೇಶಗಳ ಪರಿಶೀಲನೆ ನಡೆಸಿದ್ದಾರೆ.
ಯಾತ್ರಾರ್ಥಿಗಳು, ಪ್ರವಾಸಿಗರಿಗೆ ಕ್ಷೇತ್ರ ಬಿಟ್ಟು ತೆರಳುವ ನಿರ್ಬಂಧ ಇಲ್ಲಎಂದು ಚುನಾವಣಾ ಆಯೋಗ ತಿಳಿಸಿದೆ. ಕ್ಷೇತ್ರದ ಗಡಿಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಕ್ಷೇತ್ರದ ಹೊರಗಿನಿಂದ ಬರುವ ವಾಹನಗಳ ಚಲನವಲನದ ಮೇಲೆ ನಿಗಾ ವಹಿಸಬೇಕು. ಅಕ್ರಮವಾಗಿ ಕ್ಷೇತ್ರದಲ್ಲಿ ಓಡಾಡುತ್ತಿರುವುದು ಅನುಮಾನ ಬಂದರೆ ಅವರು ಆಯಾ ಕ್ಷೇತ್ರದ ಮತದಾರರೇ ಅಥವಾ ಇಲ್ಲವೇ ಎಂಬುದನ್ನು ಪತ್ತೆಹಚ್ಚಲು ಗುರುತಿನ ಚೀಟಿಗಳನ್ನು ಪರಿಶೀಲನೆ ನಡೆಸಲಾಗುತ್ತದೆ.
ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಬಿರುಸಿನ ಮತ ಪ್ರಚಾರ ಕೈಗೊಂಡರು. ಬಹಿರಂಗ ಪ್ರಚಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಎಲ್ಲಾ ಘಟಾನುಘಟಿ ನಾಯಕರು ಕ್ಷೇತ್ರದಿಂದ ಹೊರಗೆ ತೆರಳಿದ್ದಾರೆ. ಒಂದು ವೇಳೆ ಕ್ಷೇತ್ರಕ್ಕೆ ಸಂಬಂಧಿಸದ ವ್ಯಕ್ತಿಗಳು ಕಂಡು ಬಂದರೆ ಚುನಾವಣಾ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಲಿದ್ದಾರೆ.
ಪ್ರಜ್ವಲ್ ರೇವಣ್ಣಗೆ ಮಾನಸಿಕ ರೋಗ ಇತ್ತಾ?: ಸಚಿವ ಪ್ರಿಯಾಂಕ್ ಖರ್ಗೆ
ಚುನಾವಣೆ ನಡೆಯುವ 14 ಲೋಕಸಭಾ ಕ್ಷೇತ್ರ
ಚಿಕ್ಕೋಡಿ | ಬೆಳಗಾವಿ | ಬಾಗಲಕೋಟೆ | ವಿಜಯಪುರ | ಕಲಬುರಗಿ | ರಾಯಚೂರು | ಬೀದರ್ | ಕೊಪ್ಪಳ | ಬಳ್ಳಾರಿ | ಹಾವೇರಿ | ಧಾರವಾಡ | ಉತ್ತರ ಕನ್ನಡ | ದಾವಣಗೆರೆ | ಶಿವಮೊಗ್ಗ