
ಬೆಂಗಳೂರು (ಮೇ.29): ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಾಗಿರುವುದರಿಂದ ಎಲ್ಲರೂ ಬೆಂಗಳೂರಿನಲ್ಲೇ ಉದ್ದಿಮೆ ಆರಂಭಿಸುವ ಬದಲು ಆಯಾ ಜಿಲ್ಲೆಯವರು ಆಯಾ ಜಿಲ್ಲೆಗಳಲ್ಲೇ ಕೈಗಾರಿಕೆ ಪ್ರಾರಂಭಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ಸಂಜೆ ಪರಿಶಿಷ್ಟ ಜಾತಿ ಮತ್ತು ಪರಿ಼ಶಿಷ್ಟ ಪಂಗಡಗಳ ಉದ್ದಿಮೆದಾರರ ಜತೆ ಸಭೆ ನಡೆಸಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ನಮ್ಮ ಸರ್ಕಾರದ ಉದ್ದೇಶ. ಅದಕ್ಕೆ ಬೇಕಾದ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಹೇಳಿದರು.
ಆದರೆ ಎಲ್ಲರೂ ಬೆಂಗಳೂರಿನಲ್ಲಿಯೇ ಉದ್ದಿಮೆ ಪ್ರಾರಂಭಿಸುವ ಬದಲಾಗಿ ಆಯಾ ಜಿಲ್ಲೆಯವರು ಆಯಾ ಜಿಲ್ಲೆಗಳಲ್ಲಿಯೇ ಕೈಗಾರಿಕೆ ಪ್ರಾರಂಭಿಸಲು ಮುಂದಾಗಬೇಕು ಎಂದು ಹೇಳಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಕೈಗಾರಿಕೆಗಳಿಗೆ ಈವರೆಗೂ 192 ಎಕರೆ ಮಂಜೂರು ಆಗಿದ್ದು, ಇನ್ನೂ 280 ಎಕರೆ ಪ್ರದೇಶದ ಅವಶ್ಯಕತೆ ಇರುವುದಾಗಿ ಮನವಿ ಸಲ್ಲಿಸಿದ್ದೀರಿ. ಈ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಎಸ್ಸಿ/ಎಸ್ಟಿ ಅವರಿಗೆ ಮೀಸಲಿಟ್ಟಿರುವ ಕೈಗಾರಿಕಾ ಜಾಗ ಬೇರೆಯವರಿಗೆ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಂಘದ ಅಧ್ಯಕ್ಷರು ಹೇಳಿದ್ದಾರೆ. ಈ ಬಗ್ಗೆ ಕೂಡಲೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಅವರು ನಿರ್ದೇಶಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ವಿವಾದಗಳಿರುವಂತಹ ಭೂಮಿಗಳನ್ನು ಹಂಚಿಕೆ ಮಾಡಲಾಗಿದೆ. ಕೆಐಎಡಿಬಿ ಇ ಖಾತಾ ಹಂಚಿಕೆಯಲ್ಲಿ ಸಮಸ್ಯೆಗಳಿವೆ ಎಂದು ಉದ್ದಿಮೆದಾರರು ಹೇಳಿದ್ದಾರೆ. ಕೂಡಲೇ ಸಮಸ್ಯೆ ಪರಿಶೀಲಿಸಿ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಎಲ್. ಹನುಮಂತಯ್ಯ ಸೇರಿ ಹಲವರು ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.