ತಿಂಗಳಿಗೊಮ್ಮೆ ಮೋದಿ ಕರ್ನಾಟಕ್ಕೆ ಬರಲು ಸಮ್ಮತಿ: ಯಡಿಯೂರಪ್ಪ

By Kannadaprabha NewsFirst Published Aug 28, 2022, 12:30 AM IST
Highlights

ಮಂಗಳೂರಿನಲ್ಲಿ ನಡೆಯುವ ಬೃಹತ್‌ ಸಮಾವೇಶಕ್ಕೆ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದೇವೆ. ಸಮಾವೇಶದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ಸಮಾವೇಶ ಮಾಡಲು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ: ಬಿಎಸ್‌ವೈ

ಬೆಂಗಳೂರು(ಆ.28):  ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗಾಗ ರಾಜ್ಯಕ್ಕೆ ಬರುವಂತೆ ಮನವಿ ಮಾಡಿದ್ದೇನೆ. ತಿಂಗಳಿಗೊಮ್ಮೆ ಯಾವುದಾದರೂ ಕಾರ್ಯಕ್ರಮಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಬೆಂಗಳೂರು ನಗರ ಜಿಲ್ಲೆಯ ಕೆ.ಆರ್‌.ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ ಬೃಹತ್‌ ಸಮಾವೇಶಕ್ಕೆ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದೇವೆ. ಸಮಾವೇಶದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ಸಮಾವೇಶ ಮಾಡಲು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ ಎಂದು ಹೇಳಿದರು.

ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತನ್ನಿ: ಯಡಿಯೂರಪ್ಪಗೆ ವರಿಷ್ಠರ ಟಾಸ್ಕ್‌

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ರಾಜ್ಯದಲ್ಲಿ ಬಿಜೆಪಿ ಬಿಟ್ಟು ಯಾವುದೇ ಪಕ್ಷವೂ ಅಧಿಕಾರಕ್ಕೆ ಬರದಂತೆ ನೋಡಿಕೊಂಡು ಮುಂದಿನ ಬಾರಿಯೂ ನಾವೇ ಸರ್ಕಾರ ರಚಿಸುತ್ತೇವೆ. ರಾಜ್ಯದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಎಲ್ಲರೂ ಒಟ್ಟಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಬಲವರ್ಧನೆಗೆ ಶ್ರಮಿಸಲಾಗುವುದು. ಮುಂದೆ ಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಯಾವುದೇ ಶಕ್ತಿಯಿಂದ ತಡೆಯಲು ಸಾಧ್ಯವಿಲ್ಲ. ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ ಎಂದು ಲೇವಡಿ ಮಾಡಿದರು.

40 % ಕಮಿಷನ್‌ ಆರೋಪ ಸುಳ್ಳು

40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳು, ಕಮಿಷನ್‌ ಬಗ್ಗೆ ಮೂರ್ಖರು ಮಾತನಾಡುತ್ತಾರೆ. ಯಾರೋ ಒಬ್ಬನಿಗೆ ಹೇಳಿಕೊಟ್ಟು ಸುಳ್ಳು ಆರೋಪ ಮಾಡಿಸುತ್ತಿದ್ದಾರೆ. ಸುಳ್ಳು ಆರೋಪ ಮಾಡಿದರೆ ಅದು ಸತ್ಯ ಆಗಲು ಸಾಧ್ಯವಿಲ್ಲ. ಕಾಂಗ್ರೆಸ್‌ನವರು ಲೋಕಾಯುಕ್ತಕ್ಕೆ ದೂರು ಕೊಟ್ಟು ತನಿಖೆ ಮಾಡಿಸಲಿ. ಇದಕ್ಕೆ ನಮ್ಮದೇನೂ ಅಭ್ಯಂತರ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಸುಮ್ಮನೆ ಅನಗತ್ಯವಾಗಿ ಆರೋಪ ಮಾಡಲಾಗುತ್ತದೆ. ಸಿದ್ದರಾಮಯ್ಯ ಅವರು ಉದ್ದೇಶಪೂರ್ವಕವಾಗಿ ಆರೋಪ ಮಾಡಿಸುತ್ತಿದ್ದಾರೆ. ಅಧಿವೇಶನದಲ್ಲಿ ಕಾಂಗ್ರೆಸ್‌ನವರಿಗೆ ಇದರ ಬಗ್ಗೆ ತಕ್ಕ ಉತ್ತರ ಕೊಡುತ್ತೇವೆ ಎಂದು ಹೇಳಿದರು.
 

click me!