ಬಿಜೆಪಿ ಕೊಟ್ಟಿದ್ದ ₹1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ; ಆರ್. ಅಶೋಕ

Published : May 20, 2025, 06:00 PM IST
ಬಿಜೆಪಿ ಕೊಟ್ಟಿದ್ದ ₹1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ; ಆರ್. ಅಶೋಕ

ಸಾರಾಂಶ

ಬಿಜೆಪಿ ಅವಧಿಯ ೧೬೦೦ ಕೋಟಿ ರೂ. ಅನುದಾನದ ಕಾಮಗಾರಿಗಳನ್ನು ಕಾಂಗ್ರೆಸ್ ರದ್ದುಗೊಳಿಸಿದ್ದರಿಂದ ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ. ಮಳೆ ಅನಾಹುತದ ನಡುವೆಯೂ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದನ್ನು ಟೀಕಿಸಿದ ಅವರು, ಪರಿಹಾರಕ್ಕೆ ೧೦೦೦ ಕೋಟಿ ರೂ. ಬಿಡುಗಡೆಗೆ ಆಗ್ರಹಿಸಿದರು. ಸುರಂಗ ಮಾರ್ಗಕ್ಕೆ ಹಣ ವಿನಿಯೋಗಿಸಿ ಬೆಂಗಳೂರು ಅಭಿವೃದ್ಧಿ ನಿರ್ಲಕ್ಷಿಸಲಾಗಿದೆ ಎಂದು ದೂರಿದರು.

ಬೆಂಗಳೂರು (ಮೇ 20): ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್‌ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ತಿಳಿಸಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಪ್ರವಾಹಪೀಡಿತ ಪ್ರದೇಶಗಳಲ್ಲಿ ಒಂದಾದ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಐದು ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್‌ ಸಾಧನೆಯ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು. 

ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್‌ ಬೋರ್ಡ್‌ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಬಿಜೆಪಿ ಅವಧಿಯಲ್ಲಿ ರಾಜಕಾಲುವೆ, ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ನೀಡಲಾಗಿತ್ತು. ಅದನ್ನು ಕಾಂಗ್ರೆಸ್‌ ರದ್ದು ಮಾಡಿದೆ. ಆ ಅಭಿವೃದ್ಧಿ ಕಾರ್ಯ ನಡೆದಿದ್ದರೆ, ಈ ರೀತಿ ಪ್ರವಾಹ ಆಗುತ್ತಿರಲಿಲ್ಲ. ಬೆಂಗಳೂರಿಗೆ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ ಎಂದು ದೂರಿದರು. 

ಪ್ರವಾಹದ ಸ್ಥಳಗಳಲ್ಲಿ ಸೆನ್ಸರ್‌ ಅಳವಡಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಯಾವ ಕೆಲಸವೂ ಆಗಿಲ್ಲ. ಏಪ್ರಿಲ್‌ 15 ರಂದೇ ಹವಾಮಾನ ಇಲಾಖೆ ಮಳೆ ಜೋರಾಗಲಿದೆ ಎಂದು ಸೂಚನೆ ನೀಡಿತ್ತು. ಒಂದು ತಿಂಗಳ ಸಮಯದಲ್ಲಿ ಬಿಬಿಎಂಪಿಯಿಂದ ಮುಂಜಾಗ್ರತಾ ಸಭೆ ನಡೆಸಿಲ್ಲ. ಸಮಾವೇಶಕ್ಕೆ ಮಾತ್ರ ತರಾತುರಿಯಲ್ಲಿ ಸಿದ್ಧತೆ ಮಾಡಿಕೊಂಡರು. 14 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಈಗ ಕಾಂಗ್ರೆಸ್‌ ಪಕ್ಷವನ್ನು ಮುಚ್ಚಿಹಾಕಲು ಜನರೇ ಗುಂಡಿ ತೆಗೆಯುತ್ತಿದ್ದಾರೆ ಎಂದರು. 

ಯುದ್ಧಕ್ಕೆ ಸಾಕ್ಷಿ ಕೇಳುವ ಇವರು, ಜನರು ಸಾಯುತ್ತಿರುವುದನ್ನು ಬಂದು ನೋಡಲಿ. ಇದಕ್ಕೆ ಯಾವುದೇ ಸಾಕ್ಷಿ ಬೇಕಿಲ್ಲ. ಬಿಜೆಪಿ ಅವಧಿಯಲ್ಲಿ ಪ್ರತಿ ವರ್ಷ ಏಳೆಂಟು ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಕಾಂಗ್ರೆಸ್‌ ಸರ್ಕಾರ ಬೆಂಗಳೂರಿಗೆ ನೀಡಿರುವ ಹಣವೆಲ್ಲವನ್ನೂ ಸುರಂಗ ನಿರ್ಮಿಸಲು ಬಳಸಲಾಗುತ್ತಿದೆ. ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಗ್ರೇಟರ್‌ ಬೆಂಗಳೂರು ಹೋಗಿ ವಾಟರ್‌ ಬೆಂಗಳೂರು ಆಗಿದೆ. ಮನೆ ಬಾಗಿಲಿಗೆ ಅವಾಂತರ, ಸಾವುಗಳನ್ನು ಸರ್ಕಾರ ತರುತ್ತಿದೆ ಎಂದು ದೂರಿದರು.

ಮಳೆ ಅನಾಹುತ ಪರಿಹಾರಕ್ಕೆ 1,000 ಕೋಟಿ ರೂ. ಪರಿಹಾರ ಹಣ ಬಿಡುಗಡೆ ಮಾಡಿ:
ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು. ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ "ಬ್ರಾಂಡ್ ಬೆಂಗಳೂರು"ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ
ಸಿಎಂ ಕುರ್ಚಿ ಗೊಂದಲದಿಂದಾಗಿ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ