
ನ್ಯೂಯಾರ್ಕ್: ಹೋದಲ್ಲಿ, ಬಂದಲ್ಲಿ ಭಾರತದ ವಿರುದ್ಧವೇ ಹೆಚ್ಚಾಗಿ ಮಾತನಾಡುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಬಾರಿಯೂ ಅಮೆರಿಕದ ಚಿಕಾಗೋ ವಿಶ್ವವಿದ್ಯಾಲಯದಲ್ಲಿ ಅದನ್ನೇ ಮಾಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 11ನೇ ಸ್ಥಾನದಲ್ಲಿರುವ ಭಾರತದ ಅರ್ಥ ವ್ಯವಸ್ಥೆ ಘಟಾನುಘಟಿ ರಾಷ್ಟ್ರಗಳನ್ನು ಹಿಂದಿಕ್ಕಿ 3ನೇ ಸ್ಥಾನಕ್ಕೆ ಬಂದಿರುವ ಈ ಹೊತ್ತಿನಲ್ಲಿ ಭಾರತದ ಅರ್ಥವ್ಯವಸ್ಥೆಯ ಬಗ್ಗೆ ಹೀನಾಯವಾಗಿ ಮಾತನಾಡಿ, ನಿಜವಾದ ಭಾರತೀಯರ ಕೋಪಕ್ಕೆ ರಾಹುಲ್ ಕಾರಣವಾಗಿದ್ದಾರೆ. ಇದರ ಬಗ್ಗೆ ಇದಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ. ಇದರ ನಡುವೆಯೇ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನ ಮುಟ್ಟಿಕೊಳ್ಳುವಂಥ ಉತ್ತರ ಕೊಟ್ಟು ಅಲ್ಲಿದ್ದವರನ್ನು ಕಕ್ಕಾಬಿಕ್ಕಿಯಾಗಿಸಿದ್ದಾರೆ ಇದೇ ರಾಹುಲ್ ಗಾಂಧಿ (Rahul Gandhi)
ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ನಡೆದ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಅವರಿಗೆ, ವಿದ್ಯಾರ್ಥಿಯೊಬ್ಬ ಭಾರತ-ಪಾಕಿಸ್ತಾನ ಸಂಬಂಧಗಳ ಪ್ರಶ್ನೆ ಕೇಳಿದ್ದ. ಪಾಕಿಸ್ತಾನದ ಪ್ರಜೆ ಎಂದು ಗುರುತಿಸಿಕೊಂಡಿದ್ದ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಭಾರತೀಯ ನಾಗರಿಕರ ಮೇಲೆ ನಿರಂತರವಾಗಿ ಹಿಂಸಾಚಾರ ನಡೆಯುತ್ತಿರುವಾಗ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು. ನಮ್ಮ ಅಮಾಯಕ ಜನರನ್ನು ಹತ್ಯೆ ಮಾಡಲಾಗುತ್ತಿರುವಾಗ ಅದೇ ಸಮಯದಲ್ಲಿ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದನ್ನು ಒಪ್ಪಿಕೊಳ್ಳುವುದು ಅಸಾಧ್ಯ ಎಂದರು. ರಾಹುಲ್ ಬಾಯಿಯಿಂದ ಈ ಮಾತನ್ನು ಕೇಳಿದ ವಿದ್ಯಾರ್ಥಿಗಳು ಅರೆ ಕ್ಷಣ ಕಕ್ಕಾಬಿಕ್ಕಿಯಾಗಿದ್ದರು.
ಇದಕ್ಕೂ ಮುನ್ನ ಭಾರತವನ್ನು ತೆಗಳುವ ಭರದಲ್ಲಿ ರಾಹುಲ್ ಗಾಂಧಿ ಪರೋಕ್ಷವಾಗಿ ಪಾಕಿಸ್ತಾನವನ್ನೂ ಹೊಗಳಿದ್ದರು. ಜಾಗತಿಕ ರಾಜಕೀಯದಲ್ಲಿ ಭಾರತದ ಪ್ರಭಾವ ಕಡಿಮೆಯಾಗುತ್ತಿದೆ. ಅಮೆರಿಕ, ಚೀನಾ ಮತ್ತು ರಷ್ಯಾದ ನಾಯಕರು ಒಂದೇ ವೇದಿಕೆಯಲ್ಲಿ ಮಾತುಕತೆ ನಡೆಸುತ್ತಿದ್ದರೆ, ಪಾಕಿಸ್ತಾನ, ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಯತ್ನಗಳಲ್ಲಿ ತೊಡಗಿದ್ದರೆ ಭಾರತ ಮಾತ್ರ ಜಾಗತಿಕ ರಾಜಕೀಯದಲ್ಲಿ ಪ್ರೇಕ್ಷಕನಂತೆ ಉಳಿದಿದೆ ಎಂದು ಟೀಕಿಸಿದ್ದರು. ಈ ಹೇಳಿಕೆ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹೊಸ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದು, ರಾಹುಲ್ ಗಾಂಧಿಯನ್ನು ‘ಪಾಕಿಸ್ತಾನದ ಅಭಿಮಾನಿ’ ಎಂದು ಬಿಜೆಪಿ ನಾಯಕರು ವ್ಯಂಗ್ಯವಾಡುತ್ತಿದ್ದಾರೆ.
ಅಷ್ಟಕ್ಕೂ ರಾಹುಲ್ ಗಾಂಧಿ ಅವರು ಪಾಕಿಸ್ತಾನದ ವಿರುದ್ಧ, ಭಯೋತ್ಪಾದನೆಯ ವಿರುದ್ಧ ಜಾಗತಿಕ ವೇದಿಕೆ ಮಾತ್ರವಲ್ಲದೇ ದೇಶದ ಒಳಗೂ ಮಾತನಾಡಿದ್ದು ಕಡಿಮೆಯೇ. ಆದರೆ ಇದೀಗ ಅಚ್ಚರಿಯ ಬೆಳವಣಿಗೆಯಲ್ಲಿ ಈ ಮಾತನ್ನು ಹೇಳುವ ಮೂಲಕ ಎಲ್ಲರನ್ನೂ ಅಚ್ಚರಿಗೆ ತಳ್ಳಿದ್ದಾರೆ. ಇದೀಗ ಪಾಕಿಸ್ತಾನ ಏನು ಹೇಳುತ್ತದೆ ಎನ್ನುವ ಕಾದು ನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.