* ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ
* ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದ ಆಸೆ
* ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಶಾಸಕ ತಿಪ್ಪಾರೆಡ್ಡಿ
ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿತ್ರದುರ್ಗ, (ಏ.05): ಸದ್ಯ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎಂಬ ಮಾತು ಕೇಳಿ ಬರ್ತಿದೆ. ಇದರ ಮಧ್ಯೆ ಚಿತ್ರದುರ್ಗದ ಬಿಜೆಪಿ ಹಿರಿಯ ಶಾಸಕ ತಿಪ್ಪಾರೆಡ್ಡಿ ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ನಮಗೂ ಸ್ಥಾನ ಸಿಗುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
undefined
ಮೊನ್ನೆ ತಾನೆ ರಾಜ್ಯಕ್ಕೆ ಅಮಿತ್ ಶಾ ಬಂದು ಹೋದ ಹಿನ್ನೆಲೆ ಅಂದೇ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ವಿಚಾರವಾಗಿ ಚರ್ಚೆ ಮಾಡಲಾಗಿದೆ ಎಂದು ನನಗೂ ಮಾಹಿತಿ ಬಂದಿದೆ. ಜೊತೆಗೆ ಇದೇ ತಿಂಗಳು 16-17 ರಂದು ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಣಿ ಸಭೆಯ ಬಳಿಕ ವಿಸ್ತರಣೆ ಆಗುವುದು ಪಕ್ಕಾ ಎಂದು ನಮ್ಮ ಶಾಸಕ ಮಿತ್ರರು ಹೇಳ್ತಿದ್ದಾರೆ. ಆದ್ದರಿಂದ ಮುಂದಿನ ಚುನಾವಣಾ ದೃಷ್ಟಿಯಿಂದ ನಮ್ಮ ಜಿಲ್ಲೆಗೆ ಸಚಿವ ಸ್ಥಾನ ಬೇಕಾಗಿದೆ ಎಂದು ಹೇಳಿದರು.
ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ: 6 ಸಚಿವರಿಗೆ ಕೊಕ್, 10 ಜನ ಸೇರ್ಪಡೆ..?
ಸಚಿವ ಸ್ಥಾನ ವಂಚಿತ ಹಿರಿಯ ಶಾಸಕರಲ್ಲಿ ನಾನೇ ಮೊದಲು
ಈಗಾಗಲೇ ಬಹುತೇಕ ಹಿರಿಯ ಬಿಜೆಪಿ ಶಾಸಕರುಗಳಿಗೆ ಸಚಿವ ಸ್ಥಾನವನ್ನು ನೀಡಲಾಗಿದೆ. ಆದ್ರೆ ಸಚಿವ ಸ್ಥಾನ ವಂಚಿತ ಹಿರಿಯ ಶಾಸಕ ಯಾರಾದ್ರು ಇದ್ರೆ ಅದು ನಾನು ಮಾತ್ರ ಎಂದು ಬೇಸರ ವ್ಯಕ್ತಪಡಿಸಿದರು.
ಇದೆಲ್ಲದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷ ನಮ್ಮ ಜಿಲ್ಲೆಗೆ ಪ್ರಾತಿನಿಧ್ಯ ನೀಡಲಿದೆ ಎಂಬ ಭರವಸೆಯಿದೆ. ಚುನಾವಣಾ ಹಿನ್ನೆಲೆ ಸ್ಥಳೀಯರಿಗೆ ಸಚಿವ ಸ್ಥಾನ ನೀಡೋದ್ರಿಂದ ಮತದಾರರಿಗೆ ಒಂದು ಒಳ್ಳೆಯ ಸಂದೇಶ ರವಾನೆ ಆದಂಗೆ ಆಗುತ್ತೆ. ಆದ್ರೆ ಈವರೆಗೂ ನಾನು ಯಾರ ಬಳಿಯೂ ನನಗೆ ಸಚಿವ ಸ್ಥಾನ ನೀಡಿ ಎಂದು ಲಾಭಿ ಮಾಡಿಲ್ಲ. ಸಚಿವ ಸ್ಥಾನ ನೀಡುವುದು ಬಿಡುವುದು ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಹಿರಿಯರು ನಾಯಕರಿಗೆ ಬಿಟ್ಟಂತ ವಿಚಾರ ಎಂದು ಶಾಸಕ ತಿಪ್ಪಾರೆಡ್ಡಿ ತಿಳಿಸಿದರು.
ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿನಿಂದ (ಏ. 5) ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುತ್ತಾರೆ. ಮಧ್ಯಾಹ್ನ 1.55ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಸಚಿವ ಗೋವಿಂದ ಕಾರಜೋಳ ಸಹ ಹೋಗಲಿದ್ದಾರೆ. ಸಂಜೆ 7 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಭೇಟಿಗೆ ಸಮಯ ನಿಗದಿಯಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ನೀರಾವರಿ ಸಮಸ್ಯೆಗಳ ಬಗ್ಗೆ ಸಚಿವರ ಜೊತೆ ಮುಖ್ಯಮಂತ್ರಿ ಚರ್ಚೆ ನಡೆಸಲಿದ್ದಾರೆ. ಮೇಕೆದಾಟು ಯೋಜನೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆ ಬಗ್ಗೆಯೂ ಸಚಿವರ ಜೊತೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ದೆಹಲಿ ಭೇಟಿ ನಿಗದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಚಿವಾಕಾಂಕ್ಷಿಗಳಲ್ಲಿ ನಿರೀಕ್ಷೆ ಗರಿಗೆದರಿದೆ. ದೆಹಲಿಯಲ್ಲಿ ಬೊಮ್ಮಾಯಿ ಅವರು ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ಹೀಗಾಗಿ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿರುವ ಹಲವು ನಾಯಕರು ಕೊನೆ ಕ್ಷಣದ ಪ್ರಯತ್ನ ಮುಂದುವರಿಸಿದ್ದಾರೆ. ಸಂಪುಟ ಪುನರ್ ರಚನೆಗೆ ಮುಖ್ಯಮಂತ್ರಿಗೆ ಹೈಕಮಾಂಡ್ ಸಿಎಂಗೆ ಗ್ರೀನ್ ಸಿಗ್ನಲ್ ನೀಡಲಿದೆಯೇ ಎನ್ನುವುದು ಈವರೆಗೆ ಸ್ಪಷ್ಟವಾಗಿಲ್ಲ. ಈಗಾಗಲೇ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಕೆಲ ಆಕಾಂಕ್ಷಿಗಳು ಸಹ ದೆಹಲಿಗೆ ತೆರಳುವ ಸಾಧ್ಯತೆಯಿದೆ.
ಒಟ್ಟಿನಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಯಾವಿರಗೆ ಸಚಿವ ಸ್ಥಾನ ಸಿಗುತ್ತೋ ಎನ್ನುವುದನ್ನು ಕಾದುನೋಡಬೇಕಿದೆ.