ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಈಗಿನಿಂದಲೇ ಸಿದ್ಧತೆ ನಡೆಸಿದ್ದು, ಇದಕ್ಕೆ ವೀಕ್ಷಕರ ತಂಡವನ್ನು ಸಹ ರಚಿಸಿದೆ. ಇದರ ಮಧ್ಯೆ ದಳಪತಿಗಳಿಗೆ ಆಘಾತವಾಗಿದೆ.
ಬೆಳಗಾವಿ, (ಏ.07): ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ಅವರನ್ನು ಬೆಂಬಲಿಸಿ ಶಿವಮೊಗ್ಗ ಜಿಲ್ಲೆಯ ಜೆಡಿಎಸ್ ನಾಯಕ ಗುಂಪು ಕೈ ಹಿಡಿದಿದೆ.
ಇದಕ್ಕೆ ಪೂರಕವೆಂಬಂತೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಇಂದು (ಬುಧವಾರ) ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು.
JDS ಅಧ್ಯಕ್ಷ ಹಾಗೂ ಹಲವರು ಮುಖಂಡರು ರಾಜೀನಾಮೆ : ಶೀಘ್ರ ಮತ್ತೊಂದು ಪಾಳಯಕ್ಕೆ
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ, ತೀರ್ಥಹಳ್ಳಿಯ ಪ್ರಭಾವಿ ನಾಯಕ ಆರ್. ಎಂ. ಮಂಜುನಾಥ ಗೌಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ.
2018ರ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 40,127 ಮತಗಳನ್ನು ಪಡೆದು ಬಿಜೆಪಿಯ ಆರಗ ಜ್ಞಾನೇಂದ್ರ ವಿರುದ್ಧ ಸೋಲು ಕಂಡಿದ್ದರು.
ಮಂಜುನಾಥ ಗೌಡ ಅವರನ್ನ ಕಾಂಗ್ರೆಸ್ ಸೇರಿಸಿಕೊಳ್ಳುವುದಕ್ಕೆ ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಅವರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಡಿಕೆ ಶಿವಕುಮಾರ್ ಅವರು ಮಂಜುನಾಥ್ ಗೌಡ ಅವರನ್ನ ಪಕ್ಷಕ್ಕೆ ಸೇರಿಸಿಕೊಂಡಿದ್ದು, ಮುಂದೆ ಏನಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
ಇನ್ನು ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಸಹ ಕಾಂಗ್ರೆಸ್ ಸೇರುವುದು ಖಚಿತವಾಗಿದ್ದು, ಸೇರ್ಪಡೆ ದಿನಾಂಕ ಇನ್ನೂ ಅಂತಿಮವಾಗಿಲ್ಲ.
ಒಟ್ಟಿನಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರೇ ಪಕ್ಷ ಬಿಟ್ಟಿರುವುದು ಪಕ್ಷಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.