
ಕಾರಟಗಿ (ಮಾ.23): ಬಿಜೆಪಿ ಅಧಿಕಾರಕ್ಕೆ ಬಂದರೆ ಕೊರೋನಾ ಬರುತ್ತದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಪರ್ವ ಆರಂಭವಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಅನುದಾನ ಕೊಡುವುದಾಗಿ ಘೋಷಣೆ ಮಾಡಿತ್ತು. ಆದರೆ ಹಣ ನೀಡಿರಲಿಲ್ಲ.
ಪ್ರಧಾನಮಂತ್ರಿ ಮೋದಿಯಿಂದ ಹಿಡಿದು ಮಂಡಲ ಅಧ್ಯಕ್ಷರವರೆಗೂ ಬರಿ ಸುಳ್ಳು ಹೇಳುತ್ತಾ ಜನರನ್ನು ಯಾಮಾರಿಸುತ್ತಿರುತ್ತಾರೆ. ಸುಖಾಸುಮ್ಮನೆ ಯಾವ ಕಾಮಗಾರಿ ನಡೆದಿಲ್ಲ ಎಂದು ಕುಂಟು ನೆಪ ಹೇಳಿ ಬಿಜೆಪಿ ಆರೋಪ ಮಾಡುತ್ತಿದೆ ಎಂದರು. ನಮ್ಮ ಸರ್ಕಾರ ಹಣ ಬಿಡುಗಡೆ ಮಾಡಿ ಅಂಜನಾದ್ರಿಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭಿಸಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೊರೋನಾ ಬಂದಂತೆ.
ಅದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಪರ್ವ ಆರಂಭವಾದಂತೆ ಎಂದರು. ಯುದ್ಧ ನಡೆಯುತ್ತಿರುವ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ, ಸಂಸತ್‌ನಲ್ಲಿ ಮೋದಿ ಸರ್ಕಾರ ಯುದ್ಧ ನಡೆದರೂ ನಮ್ಮಲ್ಲಿ 6 ತಿಂಗಳಿಗೆ ಆಗುವಷ್ಟು ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ದಾಸ್ತಾನು ಇದೆ ಎಂದು ಹೇಳಿಕೆ ಕೊಟ್ಟಿದೆ. ಆದರೆ, ದೇಶದಲ್ಲಿ ಈ ಮೂರು ವಸ್ತುಗಳ ಕೊರತೆ ಹೆಚ್ಚಾಗಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಸುಳ್ಳು ಹೇಳುವ ಮೂಲಕ ಕೇಂದ್ರ ಸರ್ಕಾರ ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದು ಯಾಕೆ ಎಂದು ಸಚಿವ ತಂಗಡಗಿ ಪ್ರಶ್ನಿಸಿದರು. ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೆ ಗೆಲುವು ಸಾಧಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.