
ಕೊಪ್ಪಳ ಸೆ.(18): ವಂದೇಮಾತರಂ(Vande mataram) ಗೀತೆಯನ್ನು ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಎರಡೇ ಚರಣ ಹಾಡಬೇಕೆಂದು ಸರ್ಕಾರ ಆದೇಶ ಮಾಡಿದೆ. ಅದನ್ನು ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಪಾಲಿಸಬೇಕು. ಇಲ್ಲವಾದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಎಚ್ಚರಿಸಿದ್ದಾರೆ.
ಇತ್ತೀಚೆಗೆ ಗಂಗಾವತಿಯ ಪ್ರಜಾಸೇವೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ನಿಗದಿಗಿಂತ ಹೆಚ್ಚು ಚರಣ ಹಾಡಿರುವ ಕುರಿತಂತೆ ಅವರ ಗಮನ ಸೆಳೆದಾಗ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕ ಜನಾರ್ದನ ರೆಡ್ಡಿ ಒತ್ತಡದ ಹಿನ್ನೆಲೆಯಲ್ಲಿ ಪ್ರಜಾಸೇವೆ ಕಾರ್ಯಕ್ರಮದಲ್ಲಿ ವಂದೇಮಾತರಂ ಗೀತೆ ಪೂರ್ತಿ ಹಾಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ತಂಗಡಗಿ, ಜನಾರ್ದನ ರೆಡ್ಡಿ ಹೇಳಿದ ರೀತಿ ಕೇಳಲು ಆಗೋದಿಲ್ಲ. ಸರ್ಕಾರದ ಆದೇಶ ಪಾಲನೆ ಮಾಡಬೇಕು. ವಂದೇ ಮಾತರಂ ಪ್ರಾರಂಭವಾಗಿದ್ದೇ ಕಾಂಗ್ರೆಸ್ ಕಚೇರಿಯಲ್ಲಿ, ದೇಶಭಕ್ತಿ ಬಗ್ಗೆ ನಮಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.
ಕೆಲ ದಿನಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಎರಡು ಚರಣ ಹಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಶಾಸಕ ಚನ್ನಬಸಪ್ಪ ಅವರು ಕಾರ್ಯಕ್ರಮವನ್ನೇ ಬಹಿಷ್ಕರಿಸಿದ್ದರು. ಗುರುವಾರ ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಅವರು ಕೂಡ 2 ಚರಣದ ವಂದೇ ಮಾತರಂಗೆ ಆಕ್ಷೇಪ ವ್ಯಕ್ತಪಡಿಸಿ ಪೂರ್ಣ ಹಾಡಲು ಸೂಚಿಸಿದ್ದರು. ಕೇಂದ್ರ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಪೂರ್ಣವಾಗಿ ಹಾಡಲಾಗುತ್ತಿದ್ದರೆ, ಅದನ್ನು 2 ಚರಣ ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಕಾಂಗ್ರೆಸ್- ಬಿಜೆಪಿ ನಡುವೆ ಜಟಾಪಟಿಗೆ ಕಾರಣವಾಗಿದೆ.
ವಂದೇ ಮಾತರಂ ಪ್ರಾರಂಭವಾಗಿದ್ದೇ ಕಾಂಗ್ರೆಸ್ ಕಚೇರಿಯಲ್ಲಿ. ದೇಶಭಕ್ತಿ ಬಗ್ಗೆ ನಮಗೆ ಬಿಜೆಪಿಗರು ಪಾಠ ಮಾಡುವ ಅಗತ್ಯವಿಲ್ಲ. ಸರ್ಕಾರದ ಆದೇಶದಂತೆ ವಂದೇ ಮಾತರಂನ 2 ಚರಣ ಹಾಡಬೇಕು. ಇಲ್ಲವಾದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.
- ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.