
ಬೆಳಗಾವಿ(ಫೆ.24): ಫೆ.27ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೃಷಿ ಇಲಾಖೆಯ ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಮಾತನಾಡಿದ ಅವರು, ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು. ಮೊದಲ ಬಾರಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬೆಳಗಾವಿಯ ಕಾರ್ಯಕ್ರಮದಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ರೋಡ್ ಶೋ ಮಾರ್ಗ ಇನ್ನೂ ಅಂತಿಮಗೊಂಡಿಲ್ಲ. ಎಸ್‌ಪಿಜಿ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು. ಪಿಎಂ-ಕಿಸಾನ್ ರೈತರ ಯೋಜನೆಯಾಗಿದ್ದು, ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ದೊಡ್ಡದು. ರೈತ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು.
KARNATAKA ELECTION 2023: ಖಾನಾಪುರದಲ್ಲಿ ಭಾಷಾ ರಾಜಕೀಯವೇ ಮೇಲು!
ಕಾರ್ಯಕ್ರಮದ ಸಿದ್ಧತೆ ಹಾಗೂ ವೇದಿಕೆ ನಿರ್ಮಾಣದ ಕುರಿತು ಜಿಲ್ಲಾಧಿಕಾರಿ ನಿತೇಶ ಪಾಟೀಲ ವಿವರಿಸಿದರು. ನಾಲ್ಕೂ ದಿಕ್ಕಿನಲ್ಲಿ ಊಟ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಈ ವೇಳೆ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ… ಪಾಟೀಲ, ಅನಿಲ… ಬೆನಕೆ, ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಮತ್ತಿತರರು ಉಪಸ್ಥಿತರಿದ್ದರು.
ಸಿದ್ದರಾಮಯ್ಯ ಜಾತಿ ರಾಜಕಾರಣಿ: ಸಚಿವೆ ಕರಂದ್ಲಾಜೆ ಟೀಕೆ
ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಜಾತಿವಾದ, ಧರ್ಮದ ರಾಜಕೀಯ ಮಾಡಿದ್ದಾರೆ ಹೊರತು, ರೈತರಿಗೆ ಏನೂ ಕೊಟ್ಟಿಲ್ಲ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅತೀ ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆ. 10-11 ಬಜೆಟ್ ಮಂಡನೆ ಮಾಡಿದ್ದೇನೆ ಎನ್ನುತ್ತಾರೆ. ಆದರೆ, ರೈತರಿಗೆ ಯಾವುದೇ ಯೋಜನೆ ಕೊಟ್ಟಿಲ್ಲ. ಅಭಿವೃದ್ಧಿ ಮಾಡಿದ್ದರೇ 2018ರಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಲೇವಡಿ ಮಾಡಿದರು.
ರೈತರಿಗೆ, ರಾಜ್ಯದ ಜನತೆಗೆ ಏನಾದರೂ ಕೊಟ್ಟಿದ್ದರೇ ಈ ಸಮಸ್ಯೆ ಇರುತ್ತಿರಲಿಲ್ಲ. ಅವರಿಗೆ ಅವಕಾಶ ಸಿಕ್ಕಾಗ ಏನೂ ಮಾಡಲಿಲ್ಲ. ಓಡಿ ಹೋದರು. ಸಿದ್ದರಾಮಯ್ಯ ಒಮ್ಮೆ ಹಿಂದೆ ತಿರುಗಿ ಅವರ ಬೆನ್ನು ನೋಡಿಕೊಳ್ಳಲಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.