
ಬೆಂಗಳೂರು [ಡಿ.29]: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ನೇಮಕದ ಬಗ್ಗೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ವರ್ಷದ ಜನವರಿ 1ರಂದು ದೆಹಲಿಗೆ ಆಗಮಿಸುವಂತೆ ಬುಲಾವ್ ನೀಡಿದೆ.
ಜ.1ರಂದು (ಬುಧವಾರ) ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದೆ. ಈ ವೇಳೆ ಕೂಲಂಕಷವಾಗಿ ಚರ್ಚೆ ನಡೆಸಿ ಬಳಿಕ ಅಧ್ಯಕ್ಷರ ಹೆಸರನ್ನು ಅಂತಿಮಗೊಳಿಸಿ ಆದೇಶ ಹೊರಡಿಸಲಿದೆ ಎಂದು ಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ದಿನೇಶ್ ಅವರ ರಾಜೀನಾಮೆ ಅಂಗೀಕರಿಸಿದರೆ ನೂತನ ಅಧ್ಯಕ್ಷರನ್ನಾಗಿ ಯಾರನ್ನು ನೇಮಕ ಮಾಡಬೇಕು ಎಂಬ ಗೊಂದಲ ಕಾಂಗ್ರೆಸ್ ಹೈಕಮಾಂಡ್‌ಗೆ ಮೂಡಿದೆ. ಅಧ್ಯಕ್ಷರ ರೇಸ್‌ನ ಅಂತಿಮ ಹಂತದಲ್ಲಿ ಮಾಜಿ ಸಚಿವರಾದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಡಿ.ಕೆ.ಶಿವಕುಮಾರ್ ಹಾಗೂ ಲಿಂಗಾಯತ ಸಮುದಾಯಕ್ಕೆ ಸೇರಿದ ಎಂ.ಬಿ. ಪಾಟೀಲ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಪಕ್ಷದ ಹೈಕಮಾಂಡ್ ಯಾವ ಸಮುದಾಯಕ್ಕೆ ಮಣೆ ಹಾಕುತ್ತದೆ ಎಂಬುದು ಕುತೂಹಲ ಮೂಡಿಸಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಶಿವಕುಮಾರ್ ಅವರೇ ಅಧ್ಯಕ್ಷರಾಗಿ ನೇಮಕವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗುಂಪು ಎಂ.ಬಿ.ಪಾಟೀಲ್ ಬೆನ್ನಿಗೆ ನಿಂತಿರುವುದರಿಂದ ಕೊನೆಯ ಕ್ಷಣದಲ್ಲಿ ಯಾರು ಬೇಕಾದರೂ ಅಧ್ಯಕ್ಷರಾಗಿ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜ.1ರಂದು ಹೈಕಮಾಂಡ್ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ.
ಡಿ.19ರಂದು ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ವೀಕ್ಷಕರಾದ ಮಧುಸೂದನ್ ಮಿಸ್ತ್ರಿ ಹಾಗೂ ಭಕ್ತಚರಣದಾಸ ಅವರು, ದಿನೇಶ್ ಗುಂಡೂರಾವ್ ರಾಜೀನಾಮೆಯಿಂದಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ 50ಕ್ಕೂ ಹೆಚ್ಚು ನಾಯಕರೊಂದಿಗೆ ಅಭಿಪ್ರಾಯ ಸಂಗ್ರಹಿಸಿದ್ದರು.
ಸಿದ್ದು, ರವಿ, ಶೋಭಾ ಟ್ವೀಟರ್ ವಾರ್!...
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ್ ಅವರ ಹೆಸರು ಕೇಳಿಬಂದಿತ್ತು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಮರ್ಥ ನಾಯಕರೊಬ್ಬರನ್ನು ನೇಮಿಸಲು ಇದು ಸಕಾಲ. ಹೀಗಾಗಿ ದಿನೇಶ್ ಗುಂಡೂರಾವ್ ಅವರ ರಾಜೀನಾಮೆ ಅಂಗೀಕರಿಸಿ ಬೇರೊಬ್ಬ ಸೂಕ್ತ ನಾಯಕರನ್ನು ನೇಮಿಸಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಕೂಲಂಕಷವಾಗಿ ಪರಿಶೀಲಿಸಿರುವ ವೀಕ್ಷಕರು ತಮ್ಮ ಅಂತಿಮ ವರದಿ ಸಲ್ಲಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಆದರೆ, ಡಿ.ಕೆ. ಶಿವಕುಮಾರ್ ಹಾಗೂ ಎಂ.ಬಿ. ಪಾಟೀಲ್ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರವಾಗಿದೆ. ಎಂ.ಬಿ. ಪಾಟೀಲ್ ಪರ ಸಿದ್ದರಾಮಯ್ಯ ಬ್ಯಾಟ್ ಬೀಸುತ್ತಿದ್ದಾರೆ. ಹೀಗಾಗಿ ರಾಜ್ಯದ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಂತಿಮ ಹೆಸರು ಪ್ರಕಟಿಸಲು ಹೈಕಮಾಂಡ್ ಒಲವು ತೋರಿದೆ. ಈ ಹಿನ್ನೆಲೆಯಲ್ಲಿಯೇ ಜ.1ರಂದು ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.