ಜೂನ್ ಅಂತ್ಯದೊಳಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳು ಮುಕ್ತಾಯ: ಸಚಿವ ಪರಮೇಶ್ವರ್

By Kannadaprabha NewsFirst Published Mar 18, 2024, 1:37 PM IST
Highlights

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಲಾದ ಅನೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಮುಂದಿನ ಜೂನ್ ಅಂತ್ಯದೊಳಗೆ ಉಳಿದ ಕಾಮಗಾರಿಗಳು ಮುಕ್ತಾಯಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು. 

ತುಮಕೂರು (ಮಾ.18): ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಲಾದ ಅನೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಮುಂದಿನ ಜೂನ್ ಅಂತ್ಯದೊಳಗೆ ಉಳಿದ ಕಾಮಗಾರಿಗಳು ಮುಕ್ತಾಯಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಗರಾಭಿವೃದ್ಧಿ ಇಲಾಖೆ ಮತ್ತು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ 8.78 ಕೋಟಿ ರು. ವೆಚ್ಚದ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಬಾಕಿ ಉಳಿದಿರುವ ಹಣದಲ್ಲಿ ನಗರಕ್ಕೆ ಅಗತ್ಯವಿರುವ ಕಾಮಗಾರಿಗಳನ್ನು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಅಂಗನವಾಡಿ ಕೇಂದ್ರಗಳ ನಿರ್ಮಾಣ ಹಾಗೂ ಬಸ್ ಶೆಲ್ಟರ್‌ಗಳ ನಿರ್ಮಾಣ ಮಾಡಲಾಗುವುದು ಮತ್ತು ನಗರದ ವಿವಿಧ ಸ್ಥಳಗಳಲ್ಲಿ ಪ್ಲೇಸ್ ಮೇಕಿಂಗ್ ಕಾಮಗಾರಿ, ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿರುವ ನೂತನ ವೇದಿಕೆ ಕಟ್ಟಡಕ್ಕೆ ಪೀಠೋಪಕರಣಗಳ ಸರಬರಾಜು ಮತ್ತು ಅಳವಡಿಕೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆ ಮತ್ತು ಸೈನ್ ಬೋರ್ಡ್ಗಳ ಅಳವಡಿಕೆ, ನಗರದ ಜನರಿಗಾಗಿ ಜಿಮ್‌ನಾಸ್ಟಿಕ್ ಸೆಂಟರ್‌ಗೆ ಯಂತ್ರೋಪಕರಣಗಳ ಸರಬರಾಜು ಮತ್ತು ಅಳವಡಿಕೆ ಮಾಡುವ ಕಾಮಗಾರಿಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ನಗರದ ಎಸ್. ಮಾಲ್ ಬಳಿಯಿರುವ ಸೇತುವೆ ಚಿಕ್ಕದಾಗಿದಾಗಿರುವುದರಿಂದ ಅನೇಕ ಅಪಘಾತಗಳು ಸಂಭವಿಸಿರುವುದರಿಂದ ಸೇತುವೆ ಅಗಲೀಕರಣಕ್ಕಾಗಿ 3.5 ಕೋಟಿ ರು. ಹಣವನ್ನು ಬಿಡುಗಡೆ ಮಾಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ನಂತರ ಮಾತನಾಡಿದ ಶಾಸಕ ಜ್ಯೋತಿ ಗಣೇಶ್, ನಗರದಲ್ಲಿ ಎದುರಾಗಿದ್ದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವಾಗಿ ಜಿಲ್ಲೆಗೆ 2.5 ಟಿಎಂಸಿ ನೀರನ್ನು ಹರಿಸಿದಕ್ಕೆ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವ ರಾಜಣ್ಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ಅವರಿಗೆ ನಗರದ ಜನರ ಪರವಾಗಿ ಅಭಿನಂದನೆ ಸಲ್ಲಿಸಿದರು.

ಕಾಂಗ್ರೆಸ್‌ ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿ ನಿಲ್ಲಲ್ಲ: ಸಚಿವ ಪರಮೇಶ್ವರ್‌

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ವ್ಯವಸ್ಥಾಪಕ ನಿರ್ದೇಶಕರು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಪಾಲಿಕೆ ಆಯುಕ್ತರಾದ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

click me!