ಹಣ ನೀಡಿದವರಿಗೆ, ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ. ಕೆಲವರು ಸಿಡಿ ತೋರಿಸಿ ಯಡಿಯೂರಪ್ಪ ಅವರನ್ನು ಹೆದರಿಸಿ ಸಚಿವರಾಗಿದ್ದಾರೆ ಎಂದು ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರ, (ಜ.13): ಇತ್ತ ಸಿಎಂ ನೂತನ ಸಚಿವರ ಹೆಸರನ್ನು ಅಂತಿಮಗೊಳಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟವಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲವು ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದಾರೆ.
ಅದರಂತೆ ಎಂದಿನಿಂತೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಿಡಿದೆದ್ದಿದ್ದು, ಸಿಡಿ ಬಾಂಬ್ ಸಿಡಿಸಿದ್ದಾರೆ.
undefined
ವಿಜಯಪುರದ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ನನ್ನ ಬೆಂಬಲ ಕೋರಿದ್ದ ಮೂವರು ಇದೀಗ ಸಿ.ಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿ, ಹಣ ನೀಡಿ ಸಚಿವ ಸ್ಥಾನ ಪಡೆದುಕೊಂಡು ಸಂಪುಟ ಸೇರಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದರು.
ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಹೊಸ ಬಾಂಬ್ ಸಿಡಿಸಿದ ಸಾಹುಕಾರ್..!
ಹಣ ನೀಡಿದವರಿಗೆ, ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ. ಕೆಲವರು ಸಿಡಿ ತೋರಿಸಿ ಯಡಿಯೂರಪ್ಪ ಅವರನ್ನು ಹೆದರಿಸಿ ಸಚಿವರಾಗಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆದ್ರೆ, ಆ ಸಿ.ಡಿ ಯಾರದ್ದು..? ಅದರಲ್ಲಿ ಏನಿದೆ..? ಯಾರ ಬಳಿ ಇದೆ..? ಎನ್ನುವುದು ಮಾತ್ರ ಸ್ಪಷ್ಟವಾಗಿ ಹೇಳಿಲ್ಲ. ಇದರಿಂದ ಈ ಸಿಡಿ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಇದು ಮುಂದೆ ಯಾವ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.
ಇದೇ ಮೂವರು ಈ ಹಿಂದೆ ನನ್ನ ಭೇಟಿಯಾಗಿದ್ದರು. ನಾವೆಲ್ಲರೂ ಒಗ್ಗೂಡಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸೋಣ, ನಮಗೆ ಬೆಂಬಲ ನೀಡಿ ಎಂದು ಕೋರಿದ್ದರು.ಅವರ ಮಾತು ಕೇಳಿ ನನಗೆ ಆಶ್ಚರ್ಯವಾಗಿತ್ತು. ಈಗಲೂ ಅಷ್ಟೇ ಅಚ್ಚರಿಯಾಗಿದೆ ಎಂದ ಯತ್ನಾಳ, ಆದರೆ ಬ್ಲ್ಯಾಕ್ ಮೇಲ್ ಮಾಡಿದ ಮೂವರಲ್ಲಿ ಯಾರೊಬ್ಬರ ಹೆಸರು ಹೇಳದೇ ಕಿಡಿಕಾರಿದರು.
ಮುಖ್ಯಮಂತ್ರಿ ಯಡಿಯೂರಪ್ಪ ವೀರಶೈವ-ಲಿಂಗಾಯತ ಸಮಾಜದ ಮರ್ಯಾದೆಯನ್ನ ಕಳೆದಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಹೊರಬರಲಿ ಎಂದು ಸವಾಲು ಹಾಕಿದರು.
ವೀರಶೈವ ಲಿಂಗಾಯತ ಮಠಗಳಿಗೆ ಹಣ ನೀಡಿರುವ ಯಡಿಯೂರಪ್ಪ, ಅಧಿಕಾರದಿಂದ ತಮ್ಮನ್ನು ಕೆಳಗೆ ಇಳಿಸಿದರೆ ತಮ್ಮಿಂದ ಹಣ ಪಡೆದ ಮಠಗಳು ಕೇಂದ್ರದ ವಿರುದ್ಧ ಬಂಡೇಳುವಂತೆ ಯೋಜನೆ ರೂಪಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಸಂಕ್ರಮಣದ ಉತ್ತರಾಯಣದ ಮೂಲಕ ಸಿಎಂ ಯಡಿಯೂರಪ್ಪ ಅವರ ರಾಜಕೀಯ ಅಧಪತನ ಆರಂಭವಾಗಿದೆ, ಕಾದು ನೋಡಿ ಎಂದು ಭವಿಷ್ಯ ನುಡಿದರು.