
ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ಮೇಲೆ ಮಲತಾಯಿ ಧೋರಣೆ ತೋರುತ್ತಿದೆ. ಹೀಗಾಗಿ ನಮಗೆ ಬರಬೇಕಿರುವ ಅನುದಾನವನ್ನು ಪಡೆಯಲು ಕಾನೂನು ಹೋರಾಟ ಮಾಡುವ ಚಿಂತನೆಯಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಆಯವ್ಯಯ, ರಾಜಸ್ವಗಳ ಸಂಗ್ರಹಣೆ, ಅನುದಾನಗಳ ವರ್ಗೀಕರಣ ಹಾಗೂ ಆಯವ್ಯಯ ಅನುದಾನಗಳ ಬಳಕೆ ಮತ್ತು ನಿರ್ವಹಣೆ ಕುರಿತು ಶಾಸಕರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಶಾಸಕರು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.
ಕೇಂದ್ರ ಸರ್ಕಾರ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿರುವುದು ಸತ್ಯವಿದೆ. 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ 5,495 ಕೋಟಿ ರು. ವಿಶೇಷ ಅನುದಾನ ನೀಡಬೇಕು ಎಂದು ಹೇಳಲಾಗಿತ್ತು. ಅದರ ಜತೆಗೆ ಪೆರಿಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ರು., ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರು. ಸೇರಿದಂತೆ ಒಟ್ಟಾರೆ ₹11,495 ಕೋಟಿ ಘೋಷಿತ ಅನುದಾನ ಬರಬೇಕಿದೆ. ಭದ್ರಾ ಮೇಲ್ದಂಡೆ ಯೋಜನೆಗಾಗಿಯೇ ₹5,300 ಕೋಟಿ ಕೊಡಬೇಕು. ಇವೆಲ್ಲವನ್ನು ಗಮನಿಸಿದರೆ ಅನುದಾನ ಪಡೆಯಲು ಕಾನೂನು ಹೋರಾಟಕ್ಕೆ ಯೋಚಿಸುತ್ತಿದ್ದೇವೆ. ಅದನ್ನು ಪರಿಶೀಲಿಸಿ ನಿರ್ಧರಿಸುತ್ತೇವೆ ಎಂದರು.
ನಮಗೆ ಬರಬೇಕಿರುವ ನ್ಯಾಯಯುತ ಅನುದಾನ ಪಡೆಯಲು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೆ ಬೇರೆ ದಾರಿಯಿಲ್ಲ. ಅದರಲ್ಲೂ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಬಿಜೆಪಿ ಸರ್ಕಾರವಿರುವ ರಾಜ್ಯಗಳೇ ಹೆಚ್ಚಿರುವ ಕಾರಣ, ನಮ್ಮ ವಾದ ಏನೇ ಮಾಡಿದರೂ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ನ್ಯಾಯ ಸಿಗುವುದಿಲ್ಲ. ಹೀಗಾಗಿ ನ್ಯಾಯಾಲಯಕ್ಕೆ ಹೋಗುವುದೇ ನಮಗಿರುವ ದಾರಿ. ಈ ಹಿಂದೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರ ಬರ ಪರಿಹಾರವನ್ನು ನಮಗೆ ನೀಡಿದರು. ಈಗಲೂ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಬೇಕೆ ಎಂಬ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದರು.
- ಬಜೆಟ್ ಕುರಿತು ಶಾಸಕರಿಗೆ ಮಾರ್ಗದರ್ಶನ ನೀಡುವ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
- ಈ ವೇಳೆ ಅನುದಾನ ಹಂಚಿಕೆಯಲ್ಲಿ ಬಿಜೆಪಿಯೇತರ ರಾಜ್ಯಗಳ ವಿರುದ್ಧ ಕೇಂದ್ರದ ತಾರತಮ್ಯ ಎಂಬ ಆರೋಪ
- ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಬಿಜೆಪಿ ಆಡಳಿತದ ರಾಜ್ಯಗಳೇ ಹೆಚ್ಚಿರುವ ಕಾರಣ, ಅಲ್ಲೂ ನ್ಯಾಯ ಸಿಗಲ್ಲ ಎಂದು ಆಕ್ರೋಶ
- ಹೀಗಾಗಿ ಅನುದಾನ ಪಡೆಯಲು ಕಾನೂನು ಹೋರಾಟದ ಯೋಚನೆ. ಈ ಬಗ್ಗೆ ಪರಿಶೀಲಿಸಿ ನಿರ್ಧಾರ ಎಂದು ಸಭೆಗೆ ಸಿಎಂ ಸಿದ್ದು ಮಾಹಿತಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.