ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳನ್ನೂ ಗೆಲ್ಲುವ ಸಂಕಲ್ಪ ಮಾಡಿರುವುದರಿಂದ ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸುವ ಸಂಬಂಧ ಶೀಘ್ರದಲ್ಲೇ ರಾಜ್ಯ ಪ್ರವಾಸ ಆರಂಭಿಸುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರು (ಜ.06): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳನ್ನೂ ಗೆಲ್ಲುವ ಸಂಕಲ್ಪ ಮಾಡಿರುವುದರಿಂದ ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸುವ ಸಂಬಂಧ ಶೀಘ್ರದಲ್ಲೇ ರಾಜ್ಯ ಪ್ರವಾಸ ಆರಂಭಿಸುತ್ತೇನೆ ಎಂದು ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಶುಕ್ರವಾರ ನಡೆದ ‘ಬಲವರ್ಧನೆಗಾಗಿ ಭೀಮ ಸಮಾವೇಶ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇನ್ನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ.
ಪ್ರಧಾನಿ ಮೋದಿಗೆ ಸರಿಸಾಟಿಯಾದ ವ್ಯಕ್ತಿ ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಇಲ್ಲ. ಇದನ್ನು ಸದುಪಯೋಗಪಡಿಸಿಕೊಂಡು ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲ್ಲಲು ನಾವೆಲ್ಲ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು. ರಾಜ್ಯಾಧ್ಯಕ್ಷರೊಂದಿಗೆ ಚರ್ಚಿಸಿ ಮೂರ್ನಾಲ್ಕು ದಿನಗಳಲ್ಲಿ ನಾನು ರಾಜ್ಯ ಪ್ರವಾಸ ಆರಂಭಿಸಲಿದ್ದೇನೆ. ಪ್ರತಿ ಜಿಲ್ಲೆಗೆ ಭೇಟಿ ನೀಡಿ ಪಕ್ಷದ ಪ್ರಮುಖ ಮುಖಂಡರ ಸಭೆ ನಡೆಸಿ ಚರ್ಚಿಸಲಿದ್ದೇನೆ. ಪ್ರಧಾನಿ ಮೋದಿ ಒಂದು ದಿನವೂ ರಜೆ-ವಿಶ್ರಾಂತಿ ಇಲ್ಲದೆ ಕೆಲಸ ಮಾಡಿ ಪಕ್ಷವನ್ನು ಬಲಪಡಿಸುತ್ತಿದ್ದಾರೆ. ಮುಖಂಡರಾದ ನಾವು ಹೇಗೆ ಕೆಲಸ ಮಾಡಬೇಕು ಎಂಬುದನ್ನು ತೀರ್ಮಾನಿಸಬೇಕು ಎಂದು ಹೇಳಿದರು.
ಭದ್ರಾ ಎಡದಂಡ ನಾಲೆಗೆ ಜ.10, ಬಲದಂಡ ನಾಲೆಗೆ ಜ.20 ರಿಂದ ನೀರು: ಸಚಿವ ಮಧು ಬಂಗಾರಪ್ಪ
ಕಾಂಗ್ರೆಸ್ ದಲಿತ ಸಮುದಾಯವನ್ನು ವೋಟ್ ಬ್ಯಾಂಕ್ ಆಗಿ ದುರುಪಯೋಗಪಡಿಸಿಕೊಂಡಿದೆ. ಈ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸವಾಗಿಲ್ಲ. ಪ್ರಧಾನಿ ಮೋದಿ ಅವರು ಎಲ್ಲ ಜಾತಿ-ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದಾರೆ. ಇಂತಹ ಪ್ರಧಾನಿಗಳ ನೇತೃತ್ವದಲ್ಲಿ ಕೆಲಸ ಮಾಡಲು ನಮಗೆ ಅವಕಾಶ ಸಿಕ್ಕಿದೆ. ಎಲ್ಲ ಕಾರ್ಯಕರ್ತರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಇಡೀ ರಾಜ್ಯದಲ್ಲಿ ಸಂಚಲನ ಪ್ರಾರಂಭವಾಗಿದೆ. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲುವ ವಾತಾವರಣ ಸೃಷ್ಟಿಯಾಗಿದೆ ಎಂದರು.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ನೂರಾರು ವರ್ಷದ ದೇಶವನ್ನಾಳಿದ ಬ್ರಿಟೀಷರು ಹಾಗೂ ಕಾಂಗ್ರೆಸಿಗರು ನೀಡಿರುವ ಬಳುವಳಿ ಎಂದರೆ ಒಡೆದು ಆಳುವ ನೀತಿ. ಇದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಕಾಂಗ್ರೆಸ್ ಸಮಾಜಗಳ ನಡುವೆ ಒಡಕು ಮೂಡಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು. ಗರಿಬೀ ಹಟಾವೋದಿಂದ ಹಿಡಿದು ಗ್ಯಾರಂಟಿಗಳವರೆಗೂ ಕಾಂಗ್ರೆಸ್‌ನ ಎಲ್ಲ ಯೋಜನೆಗಳಲ್ಲಿ ಚುನಾವಣೆಗಳಲ್ಲಿ ಮತ ಪಡೆಯುವ ಹುನ್ನಾರ ಅಡಗಿದೆ. ಸುಮಾರು 50 ವರ್ಷ ದೇಶದ ಆಳಿದ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಶಕ್ತಿ ತುಂಬುವ ಕೆಲಸ ಮಾಡಲಿಲ್ಲ.
ಅಯೋಧ್ಯೆ ರಾಮಮಂದಿರ ಉದ್ಘಾಟನೆ: ತುಮಕೂರು ಜಿಲ್ಲೆಯ ಮೂವರು ಸ್ವಾಮೀಜಿಗಳಿಗೆ ಆಹ್ವಾನ!
ಅಂಬೇಡ್ಕರ್ ಹೆಸರು ಹೇಳಿ ಚುನಾವಣೆಯಲ್ಲಿ ಮತ ಪಡೆದು ಅಧಿಕಾರಕ್ಕೆ ಬರುವುದಷ್ಟೇ ಕಾಂಗ್ರೆಸ್ ಕೆಲಸ. ಈ ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ ಅವರನ್ನೇ ಸೋಲಿಸಿದ ಪಕ್ಷ ಕಾಂಗ್ರೆಸ್. ಈಗ ಮತದಾರರು ಪ್ರಜ್ಞಾವಂತರಾಗಿದ್ದಾರೆ. ಕಾಂಗ್ರೆಸ್‌ನ ಬೂಟಾಟಿಕೆ ರಾಜಕಾರಣ ಅರ್ಥ ಮಾಡಿಕೊಂಡಿದ್ದಾರೆ ಎಂದರು. ಸಂಸದ ಮುನಿಸ್ವಾಮಿ, ಶಾಸಕ ಸಿಮೆಂಟ್ ಮಂಜು, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಎನ್.ಮಹೇಶ್ ಸೇರಿದಂತೆ ಬಿಜೆಪಿಯ ಹಲವು ದಲಿತ ಮುಖಂಡರು ಉಪಸ್ಥಿತರಿದ್ದರು.