
ಗದಗ (ಅ.17): ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸತ್ಯಾಸತ್ಯತೆ ಹೊರತರಲು ಸೂಕ್ತ ತನಿಖೆ ನಡೆಸಬೇಕು. ಸ್ವತ ಅವರೇ ಈ ವಿಚಾರ ಪ್ರಸ್ತಾಪಿಸಿ ಈಗ ತನಿಖೆ ನಡೆಸದಿದ್ದರೆ ಸಂಶಯ ಅವರ ಮೇಲೆಯೇ ಬರುತ್ತದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕೇವಲ ಹೇಳಿಕೆ ನೀಡಿ ಸುಮ್ಮನಿದ್ದರೆ ಸಾಲದು, ಇದು ಅತ್ಯಂತ ಗಂಭೀರ ವಿಚಾರ. ಸಂಪುಟದ ತಮ್ಮದೇ ಸಹೋದ್ಯೋಗಿಗಳ ಕುರಿತು ಮಾತನಾಡಿದ ಮೇಲೆ ಈಗ ಸುಮ್ಮನಿದ್ದರೆ ಅವರ ಪರಿಸ್ಥಿತಿ ಏನಾಗಬೇಡ? ಆದ್ದರಿಂದ ಸಿಎಂ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು, ಇಲ್ಲವಾದರೆ ಅವರ ಮೇಲೆಯೇ ಅನುಮಾನ ಮೂಡಲು ದಾರಿಯಾಗುತ್ತದೆ ಎಂದರು.
ಯೂಟ್ಯೂಬ್ ಹಾಗೂ ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಸೃಷ್ಟಿಸಿ ಹರಡುವುದರ ಹಿಂದೆ ದೊಡ್ಡ ಪಿತೂರಿಯೇ ಅಡಗಿದೆ. ಈ ಬಗ್ಗೆಯೂ ನಿಖರವಾದ ತನಿಖೆ ನಡೆಯುವ ಅಗತ್ಯವಿದೆ. ಮಾಧ್ಯಮಗಳು ಹಾಗೂ ಪತ್ರಕರ್ತರು ಆಧಾರ ರಹಿತ ಮತ್ತು ನಕಲಿ ಸುದ್ದಿ ಬಿತ್ತರಿಸುವ ಬದಲು ಸತ್ಯ, ವಾಸ್ತವಾಂಶಗಳಿಂದ ಕೂಡಿದ ವಿಷಯಗಳನ್ನು ವರದಿ ಮಾಡಬೇಕು ಎಂದು ಕಿವಿಮಾತು ಹೇಳಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮತ್ತು ಅದರ ನಾಯಕರು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ರಾಜ್ಯದಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಮೀಸಲಾತಿ ಹೆಚ್ಚಳ ರದ್ದಾಗಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಇತರ ರಾಜ್ಯಗಳಲ್ಲಿನ ಮೀಸಲಾತಿ ಪ್ರಮಾಣ, ಸಂವಿಧಾನ ತಿದ್ದುಪಡಿ ಹಾಗೂ ಕಾನೂನು ತಜ್ಞರ ಸಲಹೆ ಪಡೆದು ಎಲ್ಲರ ವಿಶ್ವಾಸದೊಂದಿಗೆ ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸಿದರೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ತಮಿಳುನಾಡಿನಲ್ಲಿ ಪ್ರಸ್ತುತ ಶೇ. 69ರಷ್ಟು ಮೀಸಲಾತಿ ಜಾರಿಯಲ್ಲಿದೆ. ಛತ್ತೀಸ್ಗಢ ಮತ್ತು ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಾಗಿದೆ. ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮೀಸಲಾತಿ ಮಿತಿ ಶೇ. 50 ಮೀರಬಾರದು ಎಂದು ಆದೇಶಿಸಿತ್ತು. ಆದರೆ, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯೂಎಸ್) ಶೇ. 10ರಷ್ಟು ಮೀಸಲಾತಿ ಕಲ್ಪಿಸಲು ಸಂವಿಧಾನ ತಿದ್ದುಪಡಿ ತರಲಾಯಿತು. ಇದರಿಂದ ಒಟ್ಟು ಮೀಸಲಾತಿ ಶೇ. 60ಕ್ಕೇರಿತು. ನಾವು ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಆಧರಿಸಿ ಮೀಸಲಾತಿ ಹೆಚ್ಚಿಸಿದ್ದೆವು. ಆದರೆ, ಪ್ರಸ್ತುತ ರಾಜ್ಯ ಸರ್ಕಾರ ಹೈಕೋರ್ಟ್ನಲ್ಲಿ ಸರಿಯಾಗಿ ವಾದ ಮಂಡಿಸುವಲ್ಲಿ ವಿಫಲವಾಗಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂಕೋರ್ಟ್ನಲ್ಲಿ ಸಮರ್ಥ ವಾದ ಮಂಡಿಸಿದರೆ ಖಂಡಿತ ನ್ಯಾಯ ಸಿಗಲಿದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣಾ ಆಯೋಗ ಮತ್ತು ಇವಿಎಂ ಕುರಿತು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು, ಸತತ ಸೋಲಿನ ಹತಾಶೆಯಿಂದ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗ ಹಾಗೂ ಇವಿಎಂಗಳ ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿದ್ದಾರೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಇಂದು ಪ್ರಾದೇಶಿಕ ಪಕ್ಷದ ಹಂತಕ್ಕೆ ಕುಸಿದಿದೆ, ಅವರ ಹೇಳಿಕೆಯೇ ಅದಕ್ಕೆ ಸಾಕ್ಷಿ.
ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.