
ಮಂಡ್ಯ(ಏ.03): ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಟಿಕೆಟ್ ವಂಚಿತ ಸಂಸದೆ ಸುಮಲತಾ ಅಂಬರೀಶ್ ಬುಧವಾರ ನಗರದಲ್ಲಿ ಬೆಂಬಲಿಗರು, ಕಾರ್ಯಕರ್ತರ ಸಭೆ ಕರೆದಿದ್ದಾರೆ. ಅವರ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿರುವ ಈ ಸಭೆ ತೀವ್ರ ಕುತೂಹಲ ಕೆರಳಿಸಿದೆ. ಬುಧವಾರ ಬೆಳಗ್ಗೆ 10ಕ್ಕೆ ನಗರದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಭೆಗೆ ಆಗಮಿಸಲಿದ್ದಾರೆ. ನಟ ದರ್ಶನ್ ಮತ್ತು ಅಭಿಷೇಕ್ ಅಂಬರೀಶ್ ಕೂಡ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಸದೆಯಾಗಿ ಐದು ವರ್ಷಗಳ ಕಾಲ ಜಿಲ್ಲೆಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಸಾಕ್ಷ್ಯಚಿತ್ರವನ್ನು ದರ್ಶನ್ ಇದೇ ಸಮಯದಲ್ಲಿ ಬಿಡುಗಡೆ ಮಾಡುವರು.
ಬಿಜೆಪಿ-ಜೆಡಿಎಸ್ ಮೈತ್ರಿ ಕಾರಣದಿಂದ ಸಂಸದೆ ಸುಮಲತಾ ಅವರಿಗೆ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದೆ. ಜೆಡಿಎಸ್‌ಗೆ ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿರುವುದರಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಇದರಿಂದ ತೀವ್ರ ನಿರಾಸೆಗೊಳಗಾಗಿರುವ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಂಡ್ಯ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಹೈಕಮಾಂಡ್ ಕೂಡ ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಾನ-ಮಾನ ನೀಡುವ ಭರವಸೆಯನ್ನೂ ನೀಡಿದೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಸುಮಲತಾ ಸಮಾಧಾನಗೊಂಡವರಂತೆ ಕಂಡುಬಂದಿದ್ದಾರೆ.
ಸುಮಲತಾ ಜೊತೆ ಶೀಘ್ರ ಭೇಟಿ, ಪಕ್ಷದಲ್ಲಿ ಗೌರವಯುತ ಸ್ಥಾನದ ಭರವಸೆ: ವಿಜಯೇಂದ್ರ
ಭವಿಷ್ಯದ ರಾಜಕೀಯದ ಹಿತದೃಷ್ಟಿ ಹಾಗೂ ಪುತ್ರ ಅಭಿಷೇಕ್ ಅಂಬರೀಶ್‌ಗೆ ಜಿಲ್ಲೆಯಲ್ಲಿ ರಾಜಕೀಯ ನೆಲೆ ದೊರಕಿಸುವ ಅನಿವಾರ್ಯತೆ ಕಾರಣ ಸುಮಲತಾ ಚುನಾವಣೆಗೆ ಸ್ಪರ್ಧಿಸುವ ದುಡುಕಿನ ನಿರ್ಧಾರ ಮಾಡುವುದಿಲ್ಲ. ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಬೆಂಬಲಕ್ಕೆ ನಿಲ್ಲುವುದರೊಂದಿಗೆ ಮೈತ್ರಿಧರ್ಮ ಪಾಲಿಸಲು ಮಾನಸಿಕವಾಗಿ ನಿರ್ಧರಿಸಿದ್ದಾರೆ ಎಂಬ ಮಾತುಗಳು ಬೆಂಬಲಿಗರ ವಲಯದಲ್ಲಿ ಕೇಳಿಬರುತ್ತಿವೆ.
ಹಳೆಯ ಕಹಿ ನೆನಪುಗಳನ್ನು ಮರೆತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸುಮಲತಾ ಬೆಂಬಲ ಕೋರುವುದರೊಂದಿಗೆ ಸ್ನೇಹದ ರಾಜಕಾರಣ ಬಯಸಿದ್ದಾರೆ. ಸುಮಲತಾ ಪಾಲಿಗೆ ಕಾಂಗ್ರೆಸ್ ಬಾಗಿಲು ಮುಚ್ಚಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಬಹುದೆಂಬ ಅಭಿಪ್ರಾಯದೊಂದಿಗೆ ಮೈತ್ರಿಧರ್ಮ ಪಾಲಿಸುವುದೇ ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಸೂಕ್ತ ಎಂದು ಗಂಭೀರವಾಗಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.
ನಿಮ್ಮ ನಡೆಯೇ ನನ್ನದೂ ಆಗಿರಲಿದೆ ಸುಮಲತಾ ವಿಡಿಯೋ ಸಂದೇಶ:
ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಏನೇ ನಿರ್ಧಾರ ತೆಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ. ನಿಮ್ಮ ಸಲಹೆ, ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ ಎಂದು ಸುಮಲತಾ ಹೇಳಿಕೊಂಡಿದ್ದಾರೆ.
ಸುಮಲತಾರನ್ನ ಅತಂತ್ರ ಮಾಡಿತಾ ಬಿಜೆಪಿ ಹೈಕಮಾಂಡ್?: ಮತ್ತೆ ರೆಬಲ್ ಲೇಡಿಯ ಸ್ವಾಭಿಮಾನದ ಸ್ಪರ್ಧೆ?
ಮಂಗಳವಾರ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿರುವ ಅವರು, ಚುನಾವಣೆಗೆ ಸ್ಪರ್ಧಿಸುವ ಕುರಿತು ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತು ಗಂಭೀರ ಚಿಂತನೆ ಕೂಡ ನಡೆದಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಏನೇ ನಿರ್ಧಾರ ತೆಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ಕಾಳಿಕಾಂಬ ದೇಗುಲದ ಆವರಣದಲ್ಲೇ ನಾನು ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆ ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.