ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಮುಖ್ಯಮಂತ್ರಿಗಳ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮುಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು (ಅ.03): ಸಾಕ್ಷ್ಯ ನಾಶ ಮಾಡಿ ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಹಗರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದ್ದು, ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಮುಖ್ಯಮಂತ್ರಿಗಳ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮುಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮುಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದರು.
ವಿವಾದ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ಇದರ ಹಿಂದೆ ಹಲವು ಅನುಮಾನಗಳು ಮೂಡಿವೆ. ಅಲ್ಲದೇ, ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಈ ಹಿನ್ನೆಲೆಯಲ್ಲಿ ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಸಿದ್ದರಾಮಯ್ಯ ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.
undefined
ಮುಡಾ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ಕೈಗೆತ್ತಿಕೊಂಡ ಬಳಿಕ ಬಿರುಸಿನ ಬೆಳವಣಿಗೆಗಳು ನಡೆದಿವೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರೇ ಖುದ್ದು ಮುಡಾ ಕಚೇರಿಗೆ ತೆರಳಿ ನಿವೇಶನ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಹೇಳಿಕೆ ಹೊರಬಿದ್ದ ನಂತರ ಎಲ್ಲಾ ನಿವೇಶನಗಳು ಮುಡಾ ವಶಕ್ಕೆ ಹೋಗಿವೆ. 14 ನಿವೇಶನಗಳ ಕ್ರಯಪತ್ರಗಳು ರದ್ದಾಗಿವೆ ಎಂಬುದಾಗಿ ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲಾ ರಾಕೆಟ್ ವೇಗದಲ್ಲಿ ಆಗಿದ್ದು, ಸಂಶಯಾಸ್ಪದವಾಗಿ ನಡೆದಿದೆ ಎಂದು ಕಿಡಿಕಾರಿದರು.
ಇಂದು ಸುಳ್ಳು ಸುದ್ದಿ, ತೇಜೋವಧೆ ಸುದ್ದಿ ಹೆಚ್ಚಿವೆ: ಸಿಎಂ ಸಿದ್ದರಾಮಯ್ಯ ಕಳವಳ
ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯದಿಂದ ತನಿಖೆಯ ಆದೇಶ ಇದೆ. ಇಂತಹ ಸಮಯದಲ್ಲಿ ನಿವೇಶನ ವಾಪಸ್ ಪಡೆಯುವ ಅಧಿಕಾರ ಇಲ್ಲ. ಯಾವ ಆಧಾರದ ಮೇಲೆ ವಾಪಸ್ ಪಡೆಯಲಾಗಿದೆ? ಮುಡಾ ಆಯುಕ್ತರು ತಮ್ಮ ಅಧಿಕಾರ ಮೀರಿ ವರ್ತಿಸಿದ್ದಾರೆ. ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಯಲ್ಲಿ ಮುಖ್ಯಮಂತ್ರಿಗಳ ಹಸ್ತಕ್ಷೇಪ ಎದ್ದು ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದರು.