ಶಿರಾ ಬೈ ಎಲೆಕ್ಷನ್: ಡಿಕೆಶಿ ತಂತ್ರ ಸಕ್ಸಸ್, ಕಾಂಗ್ರೆಸ್ ಅಭ್ಯರ್ಥಿ ಫೈನಲ್

By Suvarna NewsFirst Published Sep 16, 2020, 2:16 PM IST
Highlights

ಬಹುನಿರೀಕ್ಷಿತ ಶಿರಾ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧಿಕೃತವಾಗಿ ಪ್ರಕಟಿಸಿದ್ದಾರೆ. 

ಬೆಂಗಳೂರು, (ಸೆ.16) : ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವಿಗೆ ಆರಂಭಿಕ ತೊಡಕಾಗಿದ್ದ ಕೆ.ಎನ್​.ರಾಜಣ್ಣ ಬಂಡಾಯ ಶಮನವಾಗಿದೆ.

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್​ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ನಡೆದ ತುಮಕೂರು ಜಿಲ್ಲಾ ಕಾಂಗ್ರೆಸ್​ ಮುಖಂಡರ ಸಭೆಯಲ್ಲಿ ಟಿ.ಬಿ. ಜಯಚಂದ್ರ ಅವರನ್ನು ಕಾಂಗ್ರೆಸ್‌ನ ಅಭ್ಯರ್ಥಿಯನ್ನಾ ಆಯ್ಕೆ ಮಾಡಲಾಗಿದೆ. 

ಕಾಂಗ್ರೆಸ್‌ ನಾಯಕ ಕೆ.ಎನ್. ರಾಜಣ್ಣ ಆಸೆಗೆ ತಣ್ಣೀರೆರಚಿದ ಡಿಕೆ ಶಿವಕುಮಾರ್..!

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಶಿರಾ ಉಪಚುನಾವಣೆಯಲ್ಲಿ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ರಾಜಣ್ಣ ಅವರೇ ಜಯಚಂದ್ರರ ಹೆಸರನ್ನು ಸೂಚಿಸಿದ್ದಾರೆ. ಅವರ ಅಭಿಪ್ರಾಯ ಪಡೆದಿದ್ದು, ಇದನ್ನೇ ಪಕ್ಷದ ಹೈಕಮಾಂಡ್​ಗೆ ಕಳುಹಿಸಿಕೊಡುತ್ತೇವೆ. ಶಿರಾ ಉಪಚುನಾವಣೆಯನ್ನು ಮಾಜಿ ಗೃಹ ಸಚಿವ ಡಾ. ಪರಮೇಶ್ವರ್ ನೇತೃತ್ವದಲ್ಲಿ ಎದುರಿಸುತ್ತೇವೆ. ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಉಪಾಧ್ಯಕ್ಷರಾಗಿ ಜೊತೆಗೆ ಇರಲಿದ್ದಾರೆ ಎಂದು ತಿಳಿಸಿದರು.

ಎಲ್ಲ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಇಂದಿನಿಂದ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.

ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ  ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಮಾಜಿ ಸಚಿವ ಟಿ.ಬಿ ಜಯಚಂದ್ರ, ಮಾಜಿ ಸಂಸದ ಮುದ್ದಹನುಮೇಗೌಡ, ಬಿ.ಎನ್ ಚಂದ್ರಪ್ಪ, ಮಾಜಿ ಶಾಸಕ ಕೆ.ಎನ್ ರಾಜಣ್ಣ ಸೇರಿದಂತೆ ಮತ್ತಿತರರ ನಾಯಕರು ಪಾಲ್ಗೊಂಡಿದ್ದರು.

click me!