
ದೆಹಲಿ (ಜು.21): ಹಾವೇರಿ ಜಿಲ್ಲೆಯಲ್ಲಿ ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ 'ನಕಲಿ ಸುದ್ದಿ' ಹಬ್ಬಿಸಿದರೆಂದು ಆರೋಪಿಸಿ ಬಿಜೆಪಿಯ ಯುವ ನಾಯಕ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್‌ನಿಂದ ತೀವ್ರ ತಡೆ ಸಿಕ್ಕಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ, ಈ ಅರ್ಜಿಯನ್ನು ವಜಾ ಮಾಡಿದೆ.
ಅರ್ಜಿ ವಿಚಾರಣೆಗೆ ತೆಗೆದುಕೊಂಡ ಕೂಡಲೇ ಮುಖ್ಯ ನ್ಯಾಯಮೂರ್ತಿ ಗರಂ ಆಗಿ, 'ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಇಂಥ ವಿಷಯಗಳನ್ನು ಮತದಾರರ ಮುಂದೆ ನ್ಯಾಯಾಲಯಕ್ಕೆ ಬಾರದಂತೆ ತೆಗೆದುಕೊಳ್ಳಿ. ನ್ಯಾಯಾಲಯವನ್ನು ರಾಜಕೀಯ ವೇದಿಕೆಯಾಗಿಸಲು ಪ್ರಯತ್ನಿಸಬೇಡಿ' ಎಂದು ಖಡಕ್ ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರದ ಪರ ಕಾನೂನು ತಜ್ಞ ಅವಿಷ್ಕಾರ್ ಸಿಂಘ್ವಿ ವಾದ ಮಂಡಿಸಿದರು. ಅವರು ತೇಜಸ್ವಿ ಸೂರ್ಯ ಅವರ ಟ್ವೀಟ್ ರೈತರ ಆತ್ಮಹತ್ಯೆ ಬಗ್ಗೆ ನಕಲಿ ಸುದ್ದಿ ಹರಡಿದ್ದು ಸಾರ್ವಜನಿಕ ಜವಾಬ್ದಾರಿಯ ವಿರುದ್ಧವಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಆದರೆ, ಪೀಠ ಈ ಅಭಿಪ್ರಾಯವನ್ನು ಒಪ್ಪಿಕೊಳ್ಳದೆ, ಪ್ರಸ್ತುತ ಅರ್ಜಿ ವಿವಾದಾತ್ಮಕವಾಗಿದ್ದು, ನ್ಯಾಯಾಂಗ ವೀಕ್ಷಣೆಗೆ ಒಳಪಟ್ಟ ವಿಷಯವಲ್ಲ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿದೆ. ಈ ತೀರ್ಪು ತೇಜಸ್ವಿ ಸೂರ್ಯಗೆ ರಾಜಕೀಯವಾಗಿ ರಿಲೀಫ್ ಒದಗಿಸಿರುವಂತಾಗಿದ್ದು, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಪ್ರಕರಣದ ಹಿನ್ನೆಲೆಯೇನು?
ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ 2024ರ ನವೆಂಬರ್‌ನಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.
ಹರನಗೇರಿ ರೈತ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ವಕ್ಫ್ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು. ಇನ್ನು ಹಾನಗಲ್ ತಾಲೂಕು ಹರನಗೇರಿ ಗ್ರಾಮದ ರುದ್ರಪ್ಪ ಎಂಬ ರೈತ ಆತ್ಮಹತ್ಯೆಗೆ ಶರಣಾಗಿದ್ದನು. 2022ರಲ್ಲಿ ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಪ್ರಕರಣ ದಾಖಲಾಗಿತ್ತು. ಆದರೆ, ವಕ್ಪ್ ಅಂತ ಪಹಣಿಯಲ್ಲಿ ನಮೂದಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದನು. ವಕ್ಪ್ ಬೋರ್ಡ್ ನಿಂದ ಅನ್ಯಾಯ ಆಗಿದೆ ಎಂದು ಕುಟುಂಬಸ್ಥರು ದೂರಿದ್ದರು.
ನಿನ್ನೆ ಹುಬ್ಬಳ್ಳಿಯಲ್ಲಿ ಮೃತ ರುದ್ರಪ್ಪ ಕುಟುಂಬಸ್ಥರು ಕೇಂದ್ರ ವಕ್ಪ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ಮನವಿ ಸಲ್ಲಿಸಿದ್ದರು. ಇದು ಪಹಣಿಯಲ್ಲಿ ವಕ್ಪ್ ಎಂದು ಸೇರಿಸಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಸುದ್ದಿ ಆಗಿತ್ತು. ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ, ಸಾಲ ಬಾಧೆಯಿಂದ ರುದ್ರಪ್ಪ ಆತ್ಮಹತ್ಯೆ ಎಂದು ಪ್ರಕರಣ ದಾಖಲಾಗಿದೆ. ಪಹಣಿಯಲ್ಲಿ ವಕ್ಪ್ ಅಂತ ಸೇರಿಸದ್ದರಿಂದ ಆತ್ಮಹತ್ಯೆ ಎಂದು ಪ್ರಕರಣ ದಾಖಲಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.